ಚಾಮರಾಜನಗರ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಮಹಿಳೆಯನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಧರಣಿ ಕುಳಿತ ಪ್ರತಿಭಟನಕಾರರು, ಹಿಂಸಾಚಾರದ ವಿಚಾರದಲ್ಲಿ ಮಣಿಪುರ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು. ಅಲ್ಲಿನ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲತಾ ಜತ್ತಿ, ‘ಮಣಿಪುರದಲ್ಲಿ ನಡೆದಿರುವ ಘಟನೆ ಇಡೀ ದೇಶವೇ ತಲೆತಗ್ಗಿಸುವಂತಹದ್ದು. ಆಧುನಿಕ ಯುಗದಲ್ಲಿ ಮಹಿಳೆಯರನ್ನು ಈ ರೀತಿ ಅಮಾನವೀಯವಾಗಿ ನಡೆಸಿಕೊಂಡಿರುವುದು ಖಂಡನಾರ್ಹ. ಇಡೀ ದೇಶದ ಯಾವ ಮಹಿಳೆಯರೂ ಇದನ್ನು ಒಪ್ಪಲು ಸಾಧ್ಯವಿಲ್ಲ’ ಎಂದರು.
‘ಮಹಿಳೆ ಯಾವತ್ತೂ ಅಬಲೆಯಲ್ಲ; ಸಬಲೆ. ವಿಜ್ಞಾನ ಕ್ಷೇತ್ರದಲ್ಲೂ ಆಕೆ ಮುಂದಿದ್ದಾಳೆ. ಮಂಗಳಯಾನ ಯೋಜನೆಯನ್ನು ಮಹಿಳೆಯರೇ ನಿರ್ವಹಿಸಿದ್ದಾರೆ. ಹೀಗಿರುವಾಗ ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌಜನ್ಯ, ಅತ್ಯಾಚಾರ, ಕೊಲೆಯನ್ನು ಸಹಿಸಲು ಸಾಧ್ಯವಿಲ್ಲ. ಹಿಂಸಾಚಾರವನ್ನು ನಿಯಂತ್ರಿಸಲು ವಿಫಲವಾಗಿರುವ ಬಿರೇನ್ ಸಿಂಗ್ ನೇತೃತ್ವದ ಮಣಿಪುರ ಸರ್ಕಾರವನ್ನು ವಜಾಗೊಳಿಸಿ, ಅಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು’ ಎಂದು ಅವರು ಆಗ್ರಹಿಸಿದರು.
ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಪದ್ಮ ಪುರುಷೋತ್ತಮ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಚಿನ್ನಮ್ಮ, ಮಹಿಳಾ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಎಂ.ನಾಗಶ್ರೀ, ಯಳಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭವ್ಯ, ನಗರಸಭಾ ಸದಸ್ಯರಾದ ಎಂ.ಕಲಾವತಿ, ನೀಲಮ್ಮ, ಮುಖಂಡರಾದ ಸರೋಜಮ್ಮ, ಸುವರ್ಣ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.