ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ಘಟನೆಗೆ ಖಂಡನೆ: ಬಿರೇನ್‌ ಸಿಂಗ್‌, ಮೋದಿ ರಾಜೀನಾಮೆಗೆ ಆಗ್ರಹ

Published 26 ಜುಲೈ 2023, 14:14 IST
Last Updated 26 ಜುಲೈ 2023, 14:14 IST
ಅಕ್ಷರ ಗಾತ್ರ

ಚಾಮರಾಜನಗರ: ಮಣಿಪುರದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂಸಾಚಾರ ಹಾಗೂ ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಪ್ರತಿಭಟನೆ ನಡೆಸಿರುವ ಘಟನೆಯ ನೈತಿಕ ಹೊಣೆ ಹೊತ್ತು, ಅಲ್ಲಿನ ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ರಾಜೀನಾಮೆ ನೀಡಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಆಗ್ರಹಿಸಿದೆ. 

ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಬುಧವಾರ ಜಿಲ್ಲಾಡಳಿತ ಭವನದ ಮುಂದೆ ಮಣಿಪುರದ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದರಲ್ಲದೆ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು. 

‘ಇಬ್ಬರು ಮಹಿಳೆಯರನ್ನು  ಬೆತ್ತಲೆಗೊಳಿಸಿ ನಡುಬೀದಿಯಲ್ಲಿ ಮೆರವಣಿಗೆ ಮಾಡಿ ಚಿತ್ರಹಿಂಸೆ ನೀಡುತ್ತಾ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಘಟನೆ ಇಡೀ ದೇಶವೇ ತಲೆತಗ್ಗಿಸುವಂತಹ ಅಮಾನುಷ ಕೃತ್ಯ. ಮಣಿಪುರ ರಾಜ್ಯದ ಗುಡ್ಡಗಾಡು ಪ್ರದೇಶದಲ್ಲಿ ವಾಸಮಾಡುವ ಕ್ರೈಸ್ತ ಸಮುದಾಯದ ಕುಕಿಗಳಿಗೂ ಮತ್ತು ಹಿಂದೂ ಸಮುದಾಯದ ಮೈತೇಯಿ ಸಮುದಾಯಗಳ ಮಧ್ಯೆ 80 ದಿನಗಳಂದ ಜನಾಂಗೀಯ, ಘರ್ಷಣೆ ಉಂಟಾಗಿ ಮಕ್ಕಳು, ಮಹಿಳೆಯರು, ವೃದ್ಧರಾದಿಯಾಗಿ 156 ಜನ ಬಲಿಯಾಗಿದ್ದಾರೆ. ಕುಕಿ ಸಮುದಾಯದವರಿಗೆ ಸೇರಿದ ಸಾವಿರಾರು ಮನೆಗಳನ್ನು, ಚರ್ಚುಗಳನ್ನು ಸುಟ್ಟುಹಾಕಲಾಗಿದೆ’ ಎಂದು ಮನವಿಯಲ್ಲಿ ದೂರಲಾಗಿದೆ. 

‘ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿರುವ ಘಟನೆಯಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಮಣಿಪುರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು, ಬಿರೇನ್ ಸಿಂಗ್‌ ಮುಖ್ಯಮಂತ್ರಿಯಾಗಿದ್ದಾರೆ. ಬೇರೆ ರಾಜ್ಯಗಳಲ್ಲಿ ಇಂತಹ ಅತ್ಯಾಚಾರಗಳು, ನೂರಾರು ಕೊಲೆಗಳು ನಡೆದಿಲ್ಲವೇ ಎಂದು ಹೇಳುವ ಮೂಲಕ ಅಲ್ಲಿನ ಮುಖ್ಯಮಂತ್ರಿ ಘಟನೆ ಸಮರ್ಥಿಸಿಕೊಂಡಿರುವುದು ಖಂಡನೀಯ. ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಬಿರೇನ್ ಸಿಂಗ್ ರಾಜೀನಾಮೆ ನೀಡಬೇಕು. ಕೊಡದಿದ್ದರೆ, ರಾಜ್ಯಪಾಲರು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಲಾಗಿದೆ. 

‘ಅಮಾನುಷ ಕೃತ್ಯಗಳು 80 ದಿನಗಳಿಂದ ನಡೆಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ತಮಗೂ ಇದಕ್ಕೂ ಸಂಬಂಧ ಇಲ್ಲ ಎಂದು ಕಣ್ಣುಮುಚ್ಚಿ ಕುಳುತಿರುವುದು ನಾಚಿಕೆಗೇಡು. ನೈತಿಕ ಹೊಣೆ ಹೊತ್ತು ಮೋದಿಯವರೂ ರಾಜೀನಾಮೆ ನೀಡಬೇಕು‌. ಮಣಿಪುರ ರಾಜ್ಯದ ಜನರ ಪ್ರಾಣ ಮತ್ತು ಆಸ್ತಿಪಾಸ್ತಿ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು’ ಎಂದು ಮನವಿಯಲ್ಲಿ ಬಿಎಸ್‌ಪಿ ಹೇಳಿದೆ. 

ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ನಾಗಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಮುಖಂಡರಾದ ಎಸ್‌.ಪಿ,ಮಹೇಶ್‌, ಬ.ಮ.ಕೃಷ್ಣಮೂರ್ತಿ, ಶಿವಶಂಕರ್‌, ಸಿದ್ದಯ್ಯ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT