ಶನಿವಾರ, ಆಗಸ್ಟ್ 13, 2022
22 °C
ಪ್ರಗತಿ ಪರಿಶೀಲನೆ ನಡೆಸಿದ ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಸಚಿವ ನಾರಾಯಣ ಗೌಡ

ಚಾಮರಾಜನಗರ: 'ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವ ಕಳುಹಿಸಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಹೆಚ್ಚುವರಿ ಅನುದಾನಕ್ಕಾಗಿ ಅಗತ್ಯ ಪ್ರಸ್ತಾವನೆ ಹಾಗೂ ಅಂದಾಜುಪಟ್ಟಿ ಸಲ್ಲಿಸುವಂತೆ ಪೌರಾಡಳಿತ, ರೇಷ್ಮೆ ಹಾಗೂ ತೋಟಗಾರಿಕೆ ಸಚಿವರಾದ ನಾರಾಯಣಗೌಡ ಅವರು ಸೂಚನೆ ನೀಡಿದರು.

ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳು ಅನುಷ್ಟಾನಗೊಳಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮತ್ತು ರೇಷ್ಮೆ, ತೋಟಗಾರಿಕೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಅವರು ನಡೆಸಿದರು. 

ಸಭೆಯ ಆರಂಭದಲ್ಲಿ ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಅನುಷ್ಠಾನಗೊಳಿಸಿರುವ ನಗರೋತ್ಥಾನ, ಮುಖ್ಯಮಂತ್ರಿಯವರ ವಿಶೇಷ ಅನುದಾನ, ವಿವಿಧ ಸಾಲಿನ ಎಸ್ಎಫ್‌ಸಿ ಅನುದಾನ, ಸ್ವಚ್ಛ ಭಾರತ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಕಾಮಗಾರಿಗಳನ್ನು ವಿಳಂಬ ಮಾಡದೇ ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

‘ನಗರೋತ್ಥಾನ ಯೋಜನೆಯಡಿ ಚಾಮರಾಜನಗರ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ, ಒಳಚರಂಡಿ, ಕುಡಿಯುವ ನೀರು ಸೇರಿದಂತೆ ಶೇ 50ರಷ್ಟು ಅರ್ಥಿಕ ಪ್ರಗತಿ ಸಾಧಿಸಲಾಗಿದೆ. ಕೊಳ್ಳೇಗಾಲ ನಗರಸಭಾ ವ್ಯಾಪ್ತಿಯ ಅನೇಕ ಕಾಮಗಾರಿಗಳು ಆರಂಭದ ಹಂತದಲ್ಲಿವೆ. ಗುಂಡ್ಲುಪೇಟೆ ಹಾಗೂ ಯಳಂದೂರಿನಲ್ಲಿ ರಸ್ತೆ ಕಾಮಗಾರಿ ಮುಗಿದಿದ್ದು, ಕುಡಿಯುವ ನೀರಿನ ಕೆಲಸಗಳು ತುರ್ತಾಗಿ ಆಗಬೇಕಾಗಿವೆ. ಅವುಗಳನ್ನು ಆದ್ಯತೆ ಮೇರೆಗೆ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಸಚಿವರು ನಿರ್ದೇಶನ ನೀಡಿದರು.

‘ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಚಾಮರಾಜನಗರ ನಗರಸಭೆ ವತಿಯಿಂದ ಜಿಲ್ಲಾ ಕ್ರೀಡಾಂಗಣ, ಖಾಸಗಿ ಬಸ್ ನಿಲ್ದಾಣ, ರಂಗಮಂದಿರದ ಕಾಮಗಾರಿ ಹಾಗೂ ಕೋರ್ಟ್ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೋರ್ಟ್ ರಸ್ತೆಯ ಅಗಲೀಕರಣಕ್ಕಾಗಿ ₹8 ಕೋಟಿಯನ್ನು ಲೋಕೋಪಯೋಗಿ ಇಲಾಖೆಗೆ ನೀಡಲಾಗಿದ್ದು, ರಸ್ತೆಬದಿಯಲ್ಲಿನ ನಿವಾಸಿಗಳಿಗೆ ಈಗಾಗಲೇ ₹ 2.85 ಕೋಟಿ ಪರಿಹಾರ ನೀಡಲಾಗಿದೆ. ಹೆಚ್ಚುವರಿ ಪರಿಹಾರದ ಅಗತ್ಯವಿದ್ದರೆ ಪ್ರಸ್ತಾವ ಸಲ್ಲಿಸಿ’ ಎಂದು ಸೂಚಿಸಿದರು. 

ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ, ‘ಕೋರ್ಟ್ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ರಸ್ತೆ ಬದಿಯ ನಿವಾಸಿಗಳಿಗೆ ಸೂಕ್ತ ಪರಿಹಾರ ಒದಗಿಸಿ ಕಾಮಗಾರಿಯನ್ನು ಅದಷ್ಟು ಬೇಗ ಪೂರ್ಣಗೊಳಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದರೂ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ. ರಸ್ತೆ ಬದಿಯಲ್ಲಿ ಸರ್ಕಾರಿ ಜಾಗವಿದ್ದರೆ ಅದನ್ನು ತೆರವುಗೊಳಿಸಲು ನೋಟಿಸ್ ನೀಡುವ ಅಗತ್ಯವಿಲ್ಲ’ ಎಂದರು.

ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ,‘ಕೊಳ್ಳೇಗಾಲದಲ್ಲಿ ಬಸ್‌ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಉಳಿದ ಕಾಮಗಾರಿಗಳಿಗಾಗಿ ₹10 ಕೋಟಿ ಹೆಚ್ಚುವರಿ ಅನುದಾನ ಅವಶ್ಯವಾಗಿದೆ. ಮಾದರಿ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಅಗತ್ಯ ಅನುದಾನ ಬಿಡುಗಡೆ ಮಾಡಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಅಲ್ಲದೆ ಕೊಳ್ಳೇಗಾಲ ನಗರಕ್ಕೆ 24X7 ಅವಧಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಒವರ್‌ಹೆಡ್‌ ಟ್ಯಾಂಕ್‌ಗೆ ಜಾಗದ ಸಮಸ್ಯೆ ಉದ್ಭವಿಸಿದೆ. ಅದನ್ನು ಪರಿಹರಿಸುವ ನಿಟ್ಟಿನಲ್ಲಿ ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದರು.

ರೇಷ್ಮೆ ಇಲಾಖೆ ಹಾಗೂ ತೋಟಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನೆಯನ್ನೂ ಸಚಿವರು ನಡೆಸಿದರು. 

ಚಾಮರಾಜನಗರ ನಗರಸಭೆ ಆಯುಕ್ತ ಎಂ.ರಾಜಣ್ಣ, ಕೊಳ್ಳೇಗಾಲ ನಗರಸಭೆ ಆಯುಕ್ತ ನಾಗಶೆಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ. ಸುರೇಶ್, ಎಂಜಿನಿಯರ್ ರವಿಕುಮಾರ್, ರೇಷ್ಮೆ ಇಲಾಖೆ ಉಪನಿರ್ದೇಶಕ ವೃಷಭೇಂದ್ರಪ್ಪ, ತೋಟಗಾರಿಕಾ ಉಪನಿರ್ದೇಶಕ ಶಿವಪ್ರಸಾದ್ ಸೇರಿದಂತೆ ಪುರಸಭೆ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಕೇರಳ ತ್ಯಾಜ್ಯ; ಚೆಕ್‌ಪೋಸ್ಟ್‌ ಬಲಪಡಿಸಿ

ಗುಂಡ್ಲುಪೇಟೆ ಭಾಗದಲ್ಲಿ ಕೇರಳದ ವಾಹನಗಳು ಅನುಪಯುಕ್ತ ಕಸ, ತ್ಯಾಜ್ಯವನ್ನು ಸುರಿಯುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಸಚಿವರು ಅಂತಹ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ತ್ಯಾಜ್ಯ ಸುರಿಯುತ್ತಿರುವ ವಾಹನಗಳ ನಿಯಂತ್ರಣಕ್ಕಾಗಿ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರವು ಅಧಿಕಾರಿಗಳು ಮುಂದಾಗಬೇಕು ಎಂದು ನಾರಾಯಣ ಗೌಡ ಅವರು ಹೇಳಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು