ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಗಮಂದಿರ: ಕಾಮಗಾರಿ ಪೂರ್ಣಕ್ಕೆ ಆ.15ರ ಗಡುವು

Last Updated 1 ಮೇ 2022, 6:23 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ರಂಗಮಂದಿರ ಕಾಮಗಾರಿಯನ್ನು ಶೀಘ್ರವೇ ಆರಂಭಿಸಿ ಆಗಸ್ಟ್ 15ರೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಶನಿವಾರ ತಾಕೀತು ಮಾಡಿದರು.

ಜಿಲ್ಲಾ ರಂಗಮಂದಿರ, ಗ್ರಂಥಾಲಯ ಕಟ್ಟಡ ನಿರ್ಮಾಣ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಹಲ ವರ್ಷಗಳಿಂದ ಜಿಲ್ಲಾ ರಂಗಮಂದಿರ ಕಾಮಗಾರಿ ಅಪೂರ್ಣಗೊಂಡಿದೆ. ಈಗಾಗಲೇ ಹಣ ನಿಗದಿಯಾಗಿದೆ. ಇನ್ನು ವಿಳಂಬ ಮಾಡದೇ ಕಾಮಗಾರಿಯನ್ನು ಆರಂಭಿಸಿ ಶೀಘ್ರವಾಗಿ ಮುಗಿಸಬೇಕು’ ಎಂದರು.

ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಹಿರಿಯ ಅಧಿಕಾರಿಗಳು ಖುದ್ದಾಗಿ ಕಾಮಗಾರಿಯ ಮೇಲ್ವಿಚಾರಣೆ ನಡೆಸಬೇಕು ಎಂದು ಹೇಳಿದರು.

ನಗರದಲ್ಲಿ ನಿರ್ಮಾಣವಾಗುತ್ತಿರುವ ಗ್ರಂಥಾಲಯ ಕಟ್ಟಡ ಕಾಮಗಾರಿ ಪ್ರಗತಿ ಪರಿಶೀಲಿಸಿದ ಅವರು, ಜನತೆಯ ಬಳಕೆಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದರು.

ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಅಪೂರ್ಣವಾಗಿರುವ ಕೆಲಸಗಳನ್ನು ಕೈಗೊಳ್ಳುವ ಸಂಬಂಧ ಸೂಚನೆ ನೀಡಿದ ಸಚಿವರು, ಸಮಸ್ಯೆ ಇತ್ಯರ್ಥ ಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ, ‘ಪರಿಹಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಕ್ರಮ ವಹಿಸಬೇಕು. ನಂತರ ಅಪೂರ್ಣವಾಗಿರುವ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದರು.

ಅಧಿಕಾರಿಗಳಿಗೆ ತರಾಟೆ:ಚಾಮರಾಜನಗರ ನಗರಸಭೆ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಆಗುತ್ತಿರುವ ವಿಳಂಬದ ಬಂದಿರುವ ದೂರುಗಳ ಕುರಿತು ನಗರಸಭೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸೋಮಣ್ಣ ಅವರು, ಅಧಿಕಾರಿಗಳ ಕಾರ್ಯವೈಖರಿ ಬದಲಾಗಬೇಕು. ಜನರಿಗೆ ಸ್ಪಂದಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳನ್ನು ಬದಲಾಯಿಸಬೇಕಾಗುತ್ತದೆ. ನಗರಸಭೆಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಆದ್ಯತೆ ನೀಡಬೇಕು. ಇನ್ನು ಮುಂದೆ ದೂರುಗಳು ಬಂದರೆ ಸಹಿಸುವುದಿಲ್ಲ’ ಎಂದು ಎಚ್ಚರಿಸಿದರು.

ಶಾಸಕ ಸಿ.ಎಸ್.ನಿರಂಜನ್‍ಕುಮಾರ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆಂಪರಾಜು, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಸುರೇಂದ್ರ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಕೆ. ಸುರೇಶ್, ನಗರಸಭೆ ಆಯುಕ್ತ ಕರಿಬಸವಯ್ಯ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವಿಕುಮಾರ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕ ‌ಎಚ್.ಚೆನ್ನಪ್ಪ ಇತರರು ಇದ್ದರು.

ಗೋ ಶಾಲೆ ನಿರ್ಮಾಣಕ್ಕೆ ಚಾಲನೆ

ಚಾಮರಾಜನಗರ: ಜಾನುವಾರುಗಳ ಸಂರಕ್ಷಣೆಗಾಗಿ ಗುಂಡ್ಲುಪೇಟೆ ತಾಲ್ಲೂಕಿನ ಬರಗಿಯಲ್ಲಿ ನಿರ್ಮಾಣ ಮಾಡಲಾಗುವ ಗೋ ಶಾಲೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಶನಿವಾರ ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ –2020ಕ್ಕೆ ಪೂರಕವಾಗಿ ವಯಸ್ಸಾದ, ಅನುಪಯುಕ್ತ ಜಾನುವಾರುಗಳು ಮತ್ತು ಆಕಸ್ಮಿಕವಾಗಿ ಅಪಘಾತಕ್ಕೆ ಒಳಗಾದ ಜಾನುವಾರುಗಳನ್ನು ಸಂರಕ್ಷಿಸಲು ಜಿಲ್ಲೆಗೊಂದು ಸರ್ಕಾರಿ ಗೋ ಶಾಲೆ ಯೋಜನೆಯನ್ನು ಸರ್ಕಾರ ರೂಪಿಸಿದೆ’ ಎಂದರು.

‘ಜಿಲ್ಲೆಯಲ್ಲಿ 2.60 ಲಕ್ಷ ಜಾನುವಾರುಗಳಿದ್ದು ಶೇ 0.75ರಷ್ಟು ಅಂದರೆ ಅಂದಾಜು 1,950 ಜಾನುವಾರುಗಳಿಗೆ ಒಂದು ಸರ್ಕಾರಿ ಗೋ ಶಾಲೆ ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ. ಪ್ರಾಥಮಿಕವಾಗಿ ಸುಮಾರು 250 ರಾಸುಗಳಿಗೆ ಗೋ ಶಾಲೆಯನ್ನು ಗುಂಡ್ಲುಪೇಟೆ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗೆ ₹52 ಲಕ್ಷ ರೂ ಬಿಡುಗಡೆ ಗೊಳಿಸಲಾಗಿದೆ. ಮೊದಲ ಹಂತದಲ್ಲಿ ಗೋ ಶೆಡ್ ನಿರ್ಮಾಣ, ಕೊಳವೆ ಬಾವಿ, ದಾಸ್ತಾನು ಕೊಠಡಿ, ಔಷಧ ಸಂಗ್ರಹಣಾ ಕೊಠಡಿ, ಕಚೇರಿ ನಿರ್ಮಿಸಲು ಈಗಾಗಲೇ ಕಾರ್ಯಾದೇಶ ನೀಡಲಾಗಿದೆ. ಯೋಜನೆಯನ್ನು ಪೂರ್ಣಗೊಳಿಸಲು 3 ತಿಂಗಳ ಕಾಲಾವಕಾಶ ನಿಗದಿ ಮಾಡಲಾಗಿದೆ’ ಎಂದು ಉಸ್ತುವಾರಿ ಸಚಿವರು ವಿವರಿಸಿದರು.

ಶಾಸಕ ಸಿ.ಎಸ್.ನಿರಂಜನ ಕುಮಾರ್ ಮಾತನಾಡಿದರು.ಶಾಸಕ ಸಿ.ಪುಟ್ಟರಂಗಶೆಟ್ಟಿ, ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT