ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಜಾತ್ರೆ: ಸಿ.ಎಂ ಜೊತೆ ಚರ್ಚಿಸಿ ನಿರ್ಧಾರ ಎಂದ ಸಚಿವ ಸೋಮಣ್ಣ

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಘೋಷಣೆ
Last Updated 11 ಫೆಬ್ರುವರಿ 2022, 15:58 IST
ಅಕ್ಷರ ಗಾತ್ರ

ಚಾಮರಾಜನಗರ: ‘ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಹಾಗೂ ಯುಗಾದಿ ಜಾತ್ರೆ ಆಯೋಜಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶುಕ್ರವಾರ ಇಲ್ಲಿ ತಿಳಿಸಿದರು.

ಜಾತ್ರೆ ಸಂಬಂಧ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ಪೂರ್ವಭಾವಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇವತ್ತು ಪೂರ್ವಭಾವಿ ಸಭೆ ನಡೆಸಿದ್ದೇವೆ. ಸಾಧಕ–ಬಾಧಕ ಚರ್ಚಿಸಲಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಮುಖ್ಯಮಂತ್ರಿ ಜೊತೆ ಮಾತನಾಡಿ, ತಜ್ಞರ ಸಮಿತಿ ಜೊತೆ ಚರ್ಚಿಸಲಾಗುವುದು. ಆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ಇದಕ್ಕೂ ಮುನ್ನ ನಡೆದ ಸಭೆಯಲ್ಲಿಜಾತ್ರೆಗಳ ಸಂಬಂಧ ಕೈಗೊಳ್ಳಬೇಕಿರುವ ಸಿದ್ಧತೆಗಳ ಬಗ್ಗೆ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರಿಂದ ಸಚಿವರು ಮಾಹಿತಿ ಪಡೆದರು.

‘ಮಹದೇಶ್ವರ ಬೆಟ್ಟದಲ್ಲಿ ಅಭಿವೃದ್ಧಿ ಕೆಲಸ ನಿಲ್ಲಬಾರದು. ಹನೂರು ಮಾರ್ಗದಲ್ಲಿ ಕೆ–ಶಿಪ್ ವತಿಯಿಂದ ನಡೆಯುತ್ತಿರುವ ರಸ್ತೆ ವಿಸ್ತರಣೆ ಅಭಿವೃದ್ಧಿ ಕಾಮಗಾರಿ ತ್ವರಿತವಾಗಿ ನಡೆಯಬೇಕು. ಈ ಕುರಿತು ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಬೇಕು’ ಎಂದು ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ವಿ.ಸೋಮಣ್ಣ ಹೇಳಿದರು.

‘ಪ್ರಾಧಿಕಾರದಿಂದ ಹನೂರಿನಲ್ಲಿ 100 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ, ಡಯಾಲಿಸಿಸ್ ಸೌಕರ್ಯ, ಮಹದೇಶ್ವರ ಬೆಟ್ಟದಲ್ಲಿ 30 ಹಾಸಿಗೆಗಳ ಆಸ್ಪತ್ರೆ, ಕೌದಳ್ಳಿಯಲ್ಲಿ ಟ್ರಾಮ ಕೇರ್ ಸೆಂಟರ್ ಕಟ್ಟಡಗಳ ನಿರ್ಮಾಣಕ್ಕೆ ನೆರವು ಒದಗಿಸಲು ಪ್ರಸ್ತಾವ ಕಳುಹಿಸಿಕೊಡಬೇಕು. ಸರ್ಕಾರದಿಂದಲೂ ಅವಶ್ಯವಿರುವ ನೆರವು ನೀಡಲಾಗುವುದು’ ಎಂದರು.

ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್.ನಿರಂಜನ್ ಕುಮಾರ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲು ಇದ್ದರು.

ವಿವಿಧ ಸೌಲಭ್ಯಗಳ ಉದ್ಘಾಟನೆ

ಸಚಿವ ವಿ.ಸೋಮಣ್ಣ ಶುಕ್ರವಾರ ಜಿಲ್ಲೆಯಲ್ಲಿ ವಿವಿಧ ಸೌಲಭ್ಯಗಳನ್ನು ಉದ್ಘಾಟಿಸಿದರು.

ಸಂತೇಮರಹಳ್ಳಿಯಲ್ಲಿ ಸೆಸ್ಕ್‌ನ ಕಾರ್ಯ ಮತ್ತು ಪಾಲನೆ ಉಪವಿಭಾಗದ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಜಿಲ್ಲಾಡಳಿತ ಭವನದ ಆವರಣದಲ್ಲಿ ಶಾಸಕರ ಅನುದಾನದಲ್ಲಿ ಖರೀದಿಸಲಾಗಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಏಳು ಆಂಬುಲೆನ್ಸ್ ವಾಹನಗಳನ್ನು ಸೇವೆಗೆ ಲೋಕಾರ್ಪಣೆ ಮಾಡಿದರು.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಜನಸ್ಪಂದನಾ ಕೇಂದ್ರವನ್ನು ಉದ್ಘಾಟಿಸಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಅಗ್ನಶಾಮಕ ಮತ್ತು ತುರ್ತು ಇಲಾಖೆಗೆ ವಿಪತ್ತು ನಿರ್ವಹಣಾ ಪರಿಸ್ಥಿತಿ ಎದುರಿಸಲು ಅಗತ್ಯವಿರುವ ಅತ್ಯಾಧುನಿಕ ಸಲಕರಣೆ ಮತ್ತು ಪರಿಕರಗಳನ್ನು ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT