ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟದಲ್ಲಿ ಅದ್ಧೂರಿ ದಸರಾ ಜಾತ್ರೆ ಇಲ್ಲ: ಭಕ್ತರಿಗೆ ಪ್ರವೇಶ ನಿರ್ಬಂಧ

ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ, ಕೋವಿಡ್‌ ಮುಂಜಾಗ್ರತಾ ನಿಯಮ ಪಾಲನೆಗೆ ಹೆಚ್ಚು ಸಿಬ್ಬಂದಿ ನಿಯೋಜಿಸಲು ಸೂಚನೆ
Last Updated 3 ಅಕ್ಟೋಬರ್ 2020, 15:22 IST
ಅಕ್ಷರ ಗಾತ್ರ

ಮಹದೇಶ್ವರ ಬೆಟ್ಟ: ಇಲ್ಲಿನ ಮಲೆಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಈ ಬಾರಿಯ ದಸರಾ ಜಾತ್ರಾ ಮಹೋತ್ಸವವನ್ನು ಅತ್ಯಂತ ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ, ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಎಸ್‌.ಸುರೇಶ್‌ ಕುಮಾರ್ ಅವರ ನೇತೃತ್ವದಲ್ಲಿ ಶನಿವಾರ ನಡೆದ ಪ್ರಾಧಿಕಾರದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದ್ದು, ಆ ಸಮಯದಲ್ಲಿ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ.

ಕೋವಿಡ್‌–19 ಕಾರಣದಿಂದ ಜಾತ್ರಾ ಸಮಯದಲ್ಲಿ ಲಕ್ಷಾಂತರ ಭಕ್ತರು ಬಂದರೆ ನಿರ್ವಹಣೆ ಕಷ್ಟವಾಗಲಿರುವುದರಿಂದ ಜಾತ್ರೆ ಮಹೋತ್ಸವನ್ನು ಸಾಂಪ್ರದಾಯಿಕವಾಗಿ ಧಾರ್ಮಿಕ ವಿಧಿವಿಧಾನಗಳಿಗೆ ಸೀಮಿತಗೊಳಿಸಲಾಗಿದೆ.

‘ದಸರಾ, ದೀಪಾವಳಿ ಹಾಗೂ ಕಾರ್ತಿಕ ಸೋಮವಾರಗಳಂದು ಜಾತ್ರೋತ್ಸವದ ಬಗ್ಗೆ ತೀರ್ಮಾನ ಕೈಗೊಳ್ಳುವುದಕ್ಕಾಗಿ ಸಭೆ ನಡೆಸಲಾಗಿತ್ತು. ದಸರಾ, ದೀ‍ಪಾವಳಿ ಮತ್ತು ಕಾರ್ತಿಕ ಸೋಮವಾರದ ಪೂಜೆಗಳನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ದಸರಾ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ದೇವಾಲಯದ ಮಟ್ಟಿಗೆ ಪೂಜೆ ಪುನಸ್ಕಾರಗಳು ನಡೆಯಲಿವೆ. ಭಕ್ತರಿಗೆ ಪ್ರವೇಶ ಇರುವುದಿಲ್ಲ. ದೀಪಾವಳಿ ಜಾತ್ರೆಯನ್ನು ಹೇಗೆ ಸರಳವಾಗಿ ಆಚರಿಸಬೇಕು ಎಂಬ ಬಗ್ಗೆ ಮುಂದಿನ ತಿಂಗಳ ಮೊದಲ ವಾರದಲ್ಲಿ ತೀರ್ಮಾನಿಸಲಾಗುವುದು’ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ತಿಳಿಸಿದ್ದಾರೆ.

ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಸೂಚನೆ: ಶನಿವಾರ, ಭಾನುವಾರ ಹಾಗೂ ಸರ್ಕಾರಿ ರಜಾ ಸಂದರ್ಭಗಳಲ್ಲಿ ಕ್ಷೇತ್ರಕ್ಕೆ ಹೆಚ್ಚಿನ ಭಕ್ತಾದಿಗಳು ಭೇಟಿ ನೀಡುತ್ತಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದಕ್ಕಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸಚಿವರು ಪ್ರಾಧಿಕಾರದ ಅಧಿಕಾರಿಗಳು ಹಾಗೂ ಪೊಲೀಸರಿಗೆ ಸೂಚಿಸಿದ್ದಾರೆ.

ಗಾಂಧಿ ಜಯಂತಿಯ ದಿನವಾದ ಶುಕ್ರವಾರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರಿಂದ, ದೇವಸ್ಥಾನದಲ್ಲಿ ನೂಕು ನುಗ್ಗಲಿನ ಪರಿಸ್ಥಿತಿ ನಿರ್ಮಾಣವಾಗಿತ್ತು. ಭಕ್ತರು ಕೋವಿಡ್‌ ಮುಂಜಾಗ್ರತಾ ನಿಯಮಗಳನ್ನು ಪಾಲಿಸದೇ ಇದ್ದುದೂಕಂಡು ಬಂದಿತ್ತು.

ಥರ್ಮಲ್‌ ಸ್ಕ್ರೀನಿಂಗ್‌, ಸುರಕ್ಷಿತ ಅಂತರ ಕಾಪಾಡಿಕೊಳ್ಳಲು ಪ್ರಾಧಿಕಾರದ ಸಿಬ್ಬಂದಿ ಜೊತೆ ಹೆಚ್ಚಿನ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಿ ಬಂದೋಬಸ್ತ್‌ ಕೈಗೊಳ್ಳಬೇಕು ಎಂದು ಡಿವೈಎಸ್‌ಪಿ ನಾಗರಾಜು ಅವರಿಗೆ ಸಚಿವರು ಸೂಚಿಸಿದರು.

ಶಾಸಕ ಆರ್‌.ನರೇಂದ್ರ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT