ಶುಕ್ರವಾರ, ಆಗಸ್ಟ್ 12, 2022
24 °C

ಆಮ್ಲಜನಕ ದುರಂತ: ‘ದೊಡ್ಡವರು’ ತಪ್ಪಿಸಿಕೊಳ್ಳುವ ಹುನ್ನಾರ–ಬಿಎಸ್‌ಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಮೇ 2ರಂದು ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತ ಪ್ರಕರಕ್ಕೆ ಕಾರಣರಾದ ‘ದೊಡ್ಡವರು’ ಪ್ರಕರಣದಿಂದ ನುಣುಚಿಕೊಳ್ಳಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕ ಆರೋಪಿಸಿದೆ. 

‘ಆಮ್ಲಜನಕ ಕೊರತೆಯಿಂದ 36 ಜನ ಮೃತಪಟ್ಟಿರುವ ಪ್ರಕರಣದಲ್ಲಿ ನೈತಿಕ ಹೊಣೆ ಹೊರಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿ, ವೈದ್ಯಕೀಯ ಕಾಲೇಜಿನ ಡೀನ್, ಜಿಲ್ಲಾ ಸರ್ಜನ್‌, ಹಾಗೂ ಕೋವಿಡ್ ನೋಡೆಲ್ ಅಧಿಕಾರಿಗಳು ಈ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಮುಗ್ಧ ಜನರ ಸಾವಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಲಿ ಅಥವಾ ಸರ್ಕಾರ ಇವರನ್ನು ಸೇವೆಯಿಂದ ಅಮಾನತು ಮಾಡುವುದಾಗಲಿ, ವರ್ಗಾವಣೆ ಮಾಡುವುದಾಗಲಿ ಮಾಡಿಲ್ಲ. ಬದಲಾಗಿ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಡಿ’ ಗ್ರೂಪ್ ನೌಕರರು ಹಾಗೂ ಆಮ್ಲಜನಕ ನಿರ್ವಹಣೆಯ ತಂತ್ರಜ್ಞನನ್ನು ಹೊಣೆ ಮಾಡುವ ಹುನ್ನಾರ ನಡೆಯುತ್ತಿದೆ’ ಎಂದು ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ನಾಗಯ್ಯ ಅವರು ಆರೋಪಿಸಿದ್ದಾರೆ. 

‘ಈ ದುರ್ಘಟನೆಯ ಬಗ್ಗೆ ಮಾನವೀಯತೆ ಮೆರೆಯದ ಜಿಲ್ಲೆಯ ಕೆಲವು ಸ್ವಾರ್ಥ ರಾಜಕಾರಣಿಗಳು, ಅಧಿಕಾರಿಗಳ ರಕ್ಷಣೆಗೆ ನಿಂತಿದ್ದಾರೆ. ಈ ಸಂದರ್ಭದಲ್ಲಿ ವರ್ಗಾವಣೆ ಮಾಡಿದರೆ ಹೊಸದಾಗಿ ಬರುವ ಅಧಿಕಾರಿಗಳಿಗೆ ಆಡಳಿತ ನಿರ್ವಹಣೆ ಹಾಗೂ ಕೋವಿಡ್ ನಿಯಂತ್ರಣಕ್ಕೆ ತೊಂದರೆಯಾಗಬಹುದು ಎಂದು ಕುಂಟು ನೆಪ ಹೇಳುತ್ತಿದ್ದಾರೆ. ಇವರಲ್ಲಿ ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ಕೂಡ ಒಬ್ಬರು. ಮೈಸೂರಿನಲ್ಲಿ ಜಿಲ್ಲಾಧಿಕಾರಿ ಹಾಗೂ ಮೈಸೂರು ಮಹಾನಗರಪಾಲಿಕೆಯ ಆಯುಕ್ತರನ್ನು ವರ್ಗಾವಣೆ ಮಾಡಿದಾಗ ವ್ಯತ್ಯಾಸ ಉಂಟಾಗದಿರುವುದು ಚಾಮರಾಜನಗರದಲ್ಲಿ ಹೇಗೆ ಆಗುತ್ತದೆ ಎಂಬ ಕನಿಷ್ಠ ಜ್ಞಾನವಿಲ್ಲದ ಇವರು ಕೊಲೆಗಡುಕರನ್ನು ರಕ್ಷಿಸುವ ಪ್ರಯತ್ನದಲ್ಲಿದ್ದಾರೆ’ ಎಂದು ದೂರಿದ್ದಾರೆ. 

‘ಘಟನೆ ಸಂಭವಿಸಿ ಒಂದೂವರೆ ತಿಂಗಳು ಕಳೆದರೂ ಸರ್ಕಾರ ಇವರ ಬಗ್ಗೆ ಕ್ರಮ ತೆಗೆದುಕೊಳ್ಳದೇ ಇರುವುದು ಸಂಶಯ ಉಂಟುಮಾಡಿದೆ. ಈ ಘಟನೆ ಬಗ್ಗೆ ಸರ್ಕಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತರಾದ ಶಿವಯೋಗಿ ಕಳಸದ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಲಾಗಿತ್ತು’ ಎಂದು ಹೇಳಿದ್ದಾರೆ.

‘ಈವರೆಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಸಂತ್ರಸ್ತರಿಗೆ ಪೂರ್ಣ ಪ್ರಮಾಣದ ಪರಿಹಾರವಾಗಲಿ, ಸರ್ಕಾರ ಘೋಷಿಸದಿರುವ ಕಾರಣಕ್ಕೆ ಬಹುಜನ ಸಮಾಜ ಪಕ್ಷದ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ, ಈ ಘಟನೆ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಒತ್ತಾಯಿಸಲಾಗುವುದು ಹಾಗೂ ಲಾಕ್‌ಡೌನ್‌ ತೆರವುಗೊಂಡ ನಂತರ ಪ್ರತಿಭಟನೆ ಹಮ್ಮಿಕೊಂಡು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ನಾಗಯ್ಯ ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು