ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರದಲ್ಲಿ ಬಂದ್ ನೀರಸ, ಪ್ರತಿಭಟನೆಗಷ್ಟೇ ಸೀಮಿತ

ತೆರೆದ ಅಂಗಡಿ ಮುಂಗಟ್ಟುಗಳು, ಬಸ್‌, ಆಟೊ ಸಂಚಾರ ಅಬಾಧಿತ, ಪ್ರತಿಭಟನಕಾರರು ವಶಕ್ಕೆ
Last Updated 5 ಡಿಸೆಂಬರ್ 2020, 12:05 IST
ಅಕ್ಷರ ಗಾತ್ರ
ADVERTISEMENT
""

ಚಾಮರಾಜನಗರ: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ಖಂಡಿಸಿ ಕನ್ನಡ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲೆಯ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಿ, ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದವು.

ಚಾಮರಾಜನಗರ ಸೇರಿದಂತೆ ಜಿಲ್ಲೆಯಾದ್ಯಂತ ಜನಜೀವನ ಎಂದಿನಂತೆ ಇತ್ತು. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಜನರ ಸಂಚಾರ ಸ್ವಲ್ಪ ಕಡಿಮೆ ಇತ್ತು. ಬೆರಳೆಣಿಕೆಯಷ್ಟು ಅಂಗಡಿಗಳನ್ನು ಬಿಟ್ಟರೆ, ಬಹುತೇಕ ಎಲ್ಲ ಮಳಿಗೆಗಳು ತೆರೆದಿದ್ದವು. ಹೋಟೆಲ್‌ಗಳು ಕೂಡ ಕಾರ್ಯಾಚರಿಸಿದವು. ಸರ್ಕಾರಿ ಕಚೇರಿಗಳಲ್ಲಿ ಕೆಲಸಕ್ಕೆ ತೊಂದರೆಯಾಗಲಿಲ್ಲ. ಶನಿವಾರ ಆದ ಕಾರಣ ಸಿಬ್ಬಂದಿ ಸಂಖ್ಯೆ ಕಡಿಮೆ ಇತ್ತು. ಬಂದ್‌ ಎಂಬ ಕಾರಣಕ್ಕೆ ಸಾರ್ವಜನಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲಾಡಳಿತ ಭವನದತ್ತ ಸುಳಿಯಲಿಲ್ಲ.

ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳ ಸಂಚಾರ ಎಂದಿನಂತೆ ಇತ್ತು. ಆಟೊಗಳ ಓಡಾಟವೂ ಸಾಮಾನ್ಯವಾಗಿತ್ತು. ಹಾಗಾಗಿ, ಜನರ ಸಂಚಾರಕ್ಕೆ ಏನೂ ತೊಂದರೆಯಾಗಲಿಲ್ಲ.

‘ಬೆಳಿಗ್ಗೆ ಆರು ಗಂಟೆಯಿಂದಲೇ ಎಲ್ಲ ಮಾರ್ಗಗಳಲ್ಲಿ ಬಸ್‌ಗಳ ಸಂಚಾರ ಆರಂಭಿಸಲಾಗಿತ್ತು. ಪ್ರಯಾಣಿಕರು ಕಡಿಮೆ ಇದ್ದರು. ಅದು ಬಿಟ್ಟರೆ, ನಮ್ಮ ಸೇವೆಯ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ’ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್‌ ಬಿ. ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಕೊಳ್ಳೇಗಾಲ, ಗುಂಡ್ಲುಪೇಟೆ, ಹನೂರು ಮತ್ತು ಯಳಂದೂರುಗಳಲ್ಲೂ ಇದೇ ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ವಹಿವಾಟು ಎಂದಿನಂತೆ ಇತ್ತು. ಬಂದ್‌ ಜನಜೀವನದ ಮೇಲೆ ಪರಿಣಾಮ ಬೀರಲಿಲ್ಲ.

ಪ್ರತ್ಯೇಕ ಪ್ರತಿಭಟನೆ: ಕರ್ನಾಟಕ ರಕ್ಷಣಾ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ ಶೆಟ್ಟಿ ಬಣ), ಜಯ ಕರ್ನಾಟಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತ್ಯೇಕ ಪ್ರತಿಭಟನೆಗಳನ್ನು ನಡೆಸಿ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆದೇಶವನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು.

ಚಾಮರಾಜೇಶ್ವರ ದೇವಾಲಯದ ಬಳಿಯಿಂದ ಪ್ರತ್ಯೇಕವಾಗಿ ಮೆರವಣಿಗೆ ಹೊರಟ ಪ್ರತಿಭಟನಕಾರರು ಬಿ.ರಾಚಯ್ಯ ಜೋಡಿ ರಸ್ತೆಯಾಗಿ ಜಿಲ್ಲಾಡಳಿತ ಭವನ ತಲುಪಿ ಅಲ್ಲಿ ಕೆಲ ಕಾಲ ಧರಣಿ ಕುಳಿತರು. ನಂತರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರಿಗೆ ಮನವಿ ಸಲ್ಲಿಸಿದರು. ಜಯ ಕರ್ನಾಟಕ ಸಂಘಟನೆಗಳ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ನೀಡಿದರು.

‘ರಾಜ್ಯ ಸರ್ಕಾರ ಮತಬ್ಯಾಂಕ್ ರಾಜಕಾರಣ ಮಾಡುತ್ತಿದ್ದು, ಭಾಷೆಗೊಂದು ಪ್ರಾಧಿಕಾರ ರಚನೆ ಮಾಡಲು ಹೊರಟಿದೆ. ಈಗ ಮರಾಠಿಗರನ್ನು ಓಲೈಸಲು ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ₹50 ಕೋಟಿ ನೀಡಿದೆ.ಕೂಡಲೇ ರಾಜ್ಯ ಸರ್ಕಾರವು ಪ್ರಾಧಿಕಾರವನ್ನು ರದ್ದುಮಾಡಿ, ಅನುದಾನ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.

ಕನ್ನಡಪರ ಸಂಘಟನೆಗಳ ಮಿಂಚು ನಾಗೇಂದ್ರ, ಪ್ರಕಾಶ್, ಗೋವಿಂದರಾಜು, ಆರ್.ಮೋಹನ್, ನಾಗೇಶನಾಯಕ, ರಿಯಾಜ್ ಪಾಷ, ಚಂದ್ರು, ಮಂಜು, ನವೀನ್, ಮಹೇಶ್, ಆನಂದ್, ಪ್ರಭುಸ್ವಾಮಿ, ಡಿ.ಎನ್.ಉಷಾ, ಪುಷ್ಪಲತಾ, ಲೀಲಾವತಿ, ಶಿವಮಲ್ಲಪ್ಪ ಮತ್ತಿತರರು ಇದ್ದರು.

ಮರಾಠಾ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಖಂಡಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು

ಪ್ರತಿಭಟನಕಾರರು ವಶಕ್ಕೆ

ಬಂದ್‌ಗೆ ಬೆಂಬಲ ವ್ಯಕ್ತಪಡಿಸಿಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಶನಿವಾರ ಬೆಳ್ಳಂಬೆಳಗ್ಗೆ ನಗರದ ಭುವನೇಶ್ವರಿ ವೃತ್ತದಲ್ಲಿ ಬಂದ್‌ ಅಂಗವಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧ ಘೋಷಣೆ ಕೂಗಿದರು. ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದು ‍ಪಡಿಸುವಂತೆ ಆಕ್ರೋಶ ವ್ಯಕ್ತಪಡಿಸಿದರು.

ಭುವನೇಶ್ವರಿ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿದ ಪ್ರತಿಭಟನನಿರತರು, ಅಲ್ಲಿಯೇ ಉರುಳು ಸೇವೆ ಮಾಡಲು ಮುಂದಾದರು. ಸ್ಥಳದಲ್ಲಿದ್ದ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಹೋರಾಟಗಾರರನ್ನು ವಶಕ್ಕೆ ಪಡೆದು ಅಲ್ಲಿಂದ ಕರೆದೊಯ್ದರು. ಸೇನಾ ಪಡೆಯ ಚಾ.ರಂ.ಶ್ರೀನಿವಾಸಗೌಡ, ಶಾ.ಮುರುಳಿ, ನಿಜಧ್ವನಿ ಗೋವಿಂದರಾಜು, ರಾಜಗೋಪಾಲ್ ಇದ್ದರು.

ಬಿಗಿ ಪೊಲೀಸ್ ಬಂದೋಬಸ್ತ್

ಬಂದ್ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್‌ ಇಲಾಖೆ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್‌ ಕೈಗೊಂಡಿತ್ತು. ಚಾಮರಾಜನಗರ, ಕೊಳ್ಳೇಗಾಲ, ಯಳಂದೂರು, ಗುಂಡ್ಲುಪೇಟೆ, ಹನೂರು ಪಟ್ಟಣಗಳ ವ್ಯಾಪ್ತಿಯ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಆಯಕಟ್ಟಿನ ಜಾಗಗಳಲ್ಲಿ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT