ಬುಧವಾರ, ಅಕ್ಟೋಬರ್ 21, 2020
23 °C
ಹಾಥರಸ್‌ ಅತ್ಯಾಚಾರ ಪ್ರಕರಣ: ಯೋಗಿ ಆದಿತ್ಯನಾಥ ವಿರುದ್ಧ ಆಕ್ರೋಶ

ಉತ್ತರ ಪ್ರದೇಶ ಸರ್ಕಾರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಉತ್ತರ ಪ್ರದೇಶದ ಹಾಥರಸ್‌ನ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣ ಸಂಬಂಧ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಶನಿವಾರ ಎರಡು ಪ್ರತಿಭಟನೆಗಳು ನಡೆದವು. 

ಚಾಮರಾಜನಗರ ಜಿಲ್ಲಾ ಪ್ರಗತಿಪರ ಮತ್ತು ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಬಹುಜನ ಸಮಾಜ ಪಕ್ಷಗಳು ಪ್ರತ್ಯೇಕವಾಗಿ ಪ್ರತಿಭಟನೆ ಆರಂಭಿಸಿದ್ದರೂ, ಜಿಲ್ಲಾಡಳಿತ ಭವನದಲ್ಲಿ ಒಟ್ಟಾಗಿ ಧರಣಿ ಕುಳಿತು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ ಆಕ್ರೋಶ ಹೊರಹಾಕಿದವು.

ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಅಲ್ಲಿನ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಜಿಲ್ಲಾಡಳಿತರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದವು 

ಪ್ರಗತಿಪರ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ಅಡಿಯಲ್ಲಿ ಜಿಲ್ಲಾಡಳಿತ ಭವನದ ಎದುರು ಸಮಾವೇಶಗೊಂಡ ವಿವಿಧ ಸಂಘಗಳ ಮುಖಂಡರು ಹಾಗೂ ಕಾರ್ಯಕರ್ತರು, ಉತ್ತರ ಪ್ರದೇಶದ ಸರ್ಕಾರವನ್ನು ಟೀಕಿಸುವ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. 

‘ಉತ್ತರ ಪ್ರದೇಶದಾದ್ಯಂತ ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಅತ್ಯಾಚಾರ, ಕೊಲೆ ಸುಲಿಗೆ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮೇಲ್ವರ್ಗದ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ. ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಗೂಂಡಾ ರಾಜ್ಯವಾಗಿ ಪರಿವರ್ತನೆಯಾಗಿದೆ’ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. 

‘ಹಾಥರಸ್‌ ಜಿಲ್ಲೆಯ ಬೂಲ್‌ಗರ್ದಿ ಗ್ರಾಮದ ದಲಿತಯ ಯುವತಿ ಹಾಘು ಬಲರಾಮ್‌ಪುರ ಜಿಲ್ಲೆಯ ಮತ್ತೊಬ್ಬ ದಲಿತ ಯುವತಿಯ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಅವರ ಬರ್ಬರ ಹತ್ಯೆ ಇಡೀ ಮಾನವ ಕುಲವೇ ತಲೆ ತಗ್ಗಿಸುವ ದುಷ್ಕೃತ್ಯ. ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹರಾಜಾಗಿದೆ. ಹಿಂದೂ ಧರ್ಮ, ಸಂಸ್ಕೃತಿ, ಪರಂಪರೆ ಎಂದು ಉದ್ದುದ್ದ ಭಾಷಣ ಬಿಗಿಯುವ ಬಿಜೆಪಿಯಿಂದ ರಾಷ್ಟ್ರದ ಘನತೆ ಗೌರವ ಮಣ್ಣು ಪಾಲಾಗಿದೆ’ ಎಂದು ಹೇಳಿದರು. 

‘ಹಾಥರಸ್‌ ಅತ್ಯಾಚಾರ ಸಂತ್ರಸ್ತೆಯ ಮೃತದೇಹವನ್ನು ಗೌರವಯುತ ಅಂತ್ಯಕ್ರಿಯೆ ನಡೆಸಲು ಪೋಷಕರಿಗೆ ಒಪ್ಪಿಸದೆ ರಾತ್ರೋರಾತ್ರಿ ತರಾತುರಿಯಲ್ಲಿ ಪೊಲೀಸರ ಸುಟ್ಟು ಹಾಕಿರುವುದು ಸಾಕ್ಷಿ ನಾಶಗೊಳಿಸುವ ಷಡ್ಯಂತ್ರವಾಗಿದೆ. ವೈದ್ಯರು ಮರಣೋತ್ತರ ಪರೀಕ್ಷೆಯನ್ನು ಸರಿಯಾಗಿ ನಡೆಸಿಲ್ಲ. ಇದರಿಂದಾಗಿ ಅಪರಾತ್ರಿಯಲ್ಲಿ ಮಾಧ್ಯಮಗಳನ್ನು ನಿರ್ಬಂಧಿಸಿ ಶವವನ್ನು ಪೊಲೀಸರು ದಹಿಸಿದ್ದಾರೆ’ ಎಂದು ಆರೋಪಿಸಿದರು.

‘ಉತ್ತರ ಪ್ರದೇಶ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕು. ಸಂತ್ರಸ್ತೆಯ ಮೃತದೇಹವನ್ನು ಮಧ್ಯರಾತ್ರಿಯಲ್ಲಿ ಸುಟ್ಟು ಹಾಕಿದ ಪೊಲೀಸರ ವಿರುದ್ಧ ಮೊಕದ್ದಮೆ ದಾಖಲಿಸಿ ಬಂಧಿಸಬೇಕು ಮತ್ತು ಪ್ರಕರಣವನ್ನು ಹೈಕೋರ್ಟ್‌ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಪ್ರತಿಭಟನನಿರತರು ಆಗ್ರಹಿಸಿದರು. 

ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಸಿ.ಎಂ.ಕೃಷ್ಣಮೂರ್ತಿ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲುಕ ಸಿ.ಎಂ.ಶಿವಣ್ಣ, ದಸಂಸ (ಸಂಯೋಜಕ) ಜಿಲ್ಲಾ ಸಂಚಾಲಕ ಕೆ.ಎಂ.ನಾಗರಾಜು, ದಸಂಸ ವಿಭಾಗೀಯ ಸಂಚಾಲಯ ದೊಡ್ಡಿಂದುವಾಡಿ ಸಿದ್ದರಾಜು, ಎಸ್‌.ಜೆ.ಪಿ ರಾಜ್ಯಾಧ್ಯಕ್ಷ ಜಿ.ಎಂ.ಗಾಡ್ಕರ್‌, ದಸಂಸ ಜಿಲ್ಲಾ ಸಂಚಾಲು ಯರಿಯೂರು ರಾಜಣ್ಣಮ, ಮಾನವ ಬಂಧುತ್ವ ವೇದಿಕೆ ಜಿಲ್ಲಾಧ್ಯಕ್ಷ ಸುಭಾಷ್‌ ಮಾಡ್ರಳ್ಳಿ, ಛಲವಾದಿ ಮಹಾಸಭಾ ಗುಂಡ್ಲುಪೇಟೆ ತಾಲ್ಲೂಕು ಅಧ್ಯಕ್ಷ ಸೋಮಣ್ಣ, ಪಂಚಶೀಲ ಫೌಂಡೇಷನ್‌ ಅಧ್ಯಕ್ಷ ಸೋಮಣ್ಣ, ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಬ್ರಾರ್‌ ಅಹಮದ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್‌ ಮತ್ತಿತರರು ಇದ್ದರು. 

ರಾಷ್ಟ್ರಪತಿ ಆಳ್ವಿಕೆ ಹೇರಲು ಆಗ್ರಹ

ಉತ್ತರಪ್ರದೇಶದ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರವನ್ನು ವಜಾಮಾಡಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕು ಮತ್ತು ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕವು ಆಗ್ರಹಿಸಿದೆ. 

ಚಾಮರಾಜೇಶ್ವರ ಉದ್ಯಾನವನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು.

‘ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲಿನ ಅಪಹರಣ, ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಉತ್ತರಪ್ರದೇಶದಲ್ಲಿ ಇದೇ ತರಹದ ಘಟನೆಗಳು ಬಲರಾಂಪುರ ಮತ್ತು ಇತರೆ ಕಡೆಮರುಕಳಿಸುತ್ತಿರುವುದು ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುದಕ್ಕೆ ಸಾಕ್ಷಿ’ ಎಂದು ಆರೋಪಿಸಿದರು. 

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ಜಿಲ್ಲಾ ಅಧ್ಯಕ್ಷ ನಾಗಯ್ಯ ಜಿಲ್ಲಾ ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಎಸ್.ಪಿ.ಮಹೇಶ್, ಪ್ರಧಾನ ಕಾರ್ಯದರ್ಶಿ ಅರಳೀಪುರ ಮಹದೇವಸ್ವಾಮಿ, ದೊಡ್ಡರಾಯಪೇಟೆ ಸಿದ್ದರಾಜು, ರಾಜೇಂದ್ರ, ಶಿವಣ್ಣ ದೇವಾಲಪುರ ಇತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.