ಬುಧವಾರ, ಫೆಬ್ರವರಿ 26, 2020
19 °C
ಕಠಿಣ ಕ್ರಮ ಜರುಗಿಸಲು ಒತ್ತಾಯ

ದೌರ್ಜನ್ಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮುಂದಿನ ದಿನಗಳಲ್ಲೂ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಓಡಿಪಿ ಸಂಸ್ಥೆಯ ಮಹಿಳೋದಯ ಮಹಿಳಾ ಒಕ್ಕೂಟದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಸವರಾಜು ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸಮಾಜದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸದೆ ಇರುವುದು ಶೋಚನೀಯ. ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಮೇಲೆ ಹೆಚ್ಚುತ್ತಿರುವ ಘೋರ ಕೃತ್ಯಗಳು ಇಡೀ ಮಾನವ ಕುಲವನ್ನೇ ತಲ್ಲಣಗೊಳಿಸುತ್ತಿವೆ. ನಿರ್ಭಯಾ ದುರಂತ ಪ್ರಕರಣದ ನಂತರ ಮಹಿಳೆಯರ ಮೇಲೆ ಹಲ್ಲೆ, ಅತ್ಯಾಚಾರ, ಕೊಲೆಯಂತಹ ಕ್ರೌರ್ಯಗಳು ನಡೆಯುತ್ತಿದ್ದರೂ ಸರ್ಕಾರ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ, ಹತ್ಯೆ ಪ್ರಕರಣ ಹೆಣ್ಣುಮಕ್ಕಳಿಗೆ ಭಯ ಹುಟ್ಟಿಸಿತ್ತು. ಈಗ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ನಿಟ್ಟುಸಿರುಬಿಟ್ಟಂತಾಗಿದೆ. ಮುಂದಿನ ದಿನಗಳಲ್ಲಿ ಮಹಿಳೆಯರ ರಕ್ಷಣೆಗಾಗಿ ಮಹಿಳೆಯರ ಪರ ಸರ್ಕಾರ ರಕ್ಷಣಾ ನೀತಿಗಳನ್ನು ಜಾರಿಗೆ ತರಬೇಕು. ಕ್ರೂರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅತ್ಯಾಚಾರಿಗಳಿಗೆ ಸಾರ್ವಜನಿಕ ವಲಯದಲ್ಲಿಯೇ ಘೋರ ಶಿಕ್ಷೆ ನೀಡಿ ಮರಣ ದಂಡನೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ನೀಲಾ, ಶಾಂತಲಕ್ಷ್ಮೀ, ಮೀನಾಕ್ಷಿ, ಚಂದ್ರಮ್ಮ, ವಲಯ ಸಂಯೋಜಕ ಸಿದ್ದರಾಜ್, ಲತಾ, ಪುಷ್ಷಲತಾ, ಮೇರಿಗ್ರೆಸಿ, ರೇಖಾ, ಸರೋಜ, ಹಂಸವೇಣಿ, ಲಕ್ಷ್ಮಿ, ಪ್ರೇಮ, ಅನಿತಾ, ರವಿ, ರವಿಕುಮಾರ್, ಮೇರಿ ಜೋಸೆಫ್, ಕುಮಾರ್, ಸಿ.ಎಸ್.ನಾಗರಾಜು, ಪ್ರಕಾಶ್, ಸಾಗರ್ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು