ಉದ್ಧವ್ ಠಾಕ್ರೆ ಹೇಳಿಕೆಗೆ ಖಂಡನೆ, ಭಾವಚಿತ್ರ ದಹಿಸಿ ಆಕ್ರೋಶ

ಚಾಮರಾಜನಗರ: ‘ಕರ್ನಾಟಕ ಆಕ್ರಮಿತ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆಗೊಳಿಸುತ್ತೇವೆ’ ಎಂಬ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆಯನ್ನು ಖಂಡಿಸಿರುವ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಸೋಮವಾರ ನಗರದಲ್ಲಿ ಠಾಕ್ರೆ ಅವರ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಶ್ರೀಚಾಮರಾಜೇಶ್ವರ ಉದ್ಯಾನವನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಕಾರರು, ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಪ್ರತಿಭಟನೆ ನಡೆಸಿದರು. ಉದ್ಧವ್ ಠಾಕ್ರೆ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಸೊಲ್ಲಾಪುರ ಕರ್ನಾಟಕಕ್ಕೆ ಸೇರಲಿ ಎಂದು ಘೋಷಣೆ ಕೂಗಿದರು.
ಸೇನೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ ಮಾತನಾಡಿ ಅವರು, ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕ ವಿರೋಧಿ ಹೇಳಿಕೆಯನ್ನು ಅವರು ವಾಪಸ್ ಪಡೆಯಬೇಕು. ಉದ್ಧಟನದ ಹೇಳಿಕೆ ನೀಡಿ ಕನ್ನಡ ವಿರೋಧಿಯಾಗಿರುವ ಮಹಾರಾಷ್ಟ್ರ ಸರ್ಕಾರಕ್ಕೆ ವಿರುದ್ಧ ರಾಜ್ಯ ಸರ್ಕಾರ ಛೀಮಾರಿ ಹಾಕಬೇಕು. ಎಂಇಎಸ್ ಅನ್ನು ಓಲೈಕೆ ಮಾಡುವ ಸಲುವಾಗಿ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದೆ. ಇದರ ಬಗ್ಗೆ ವಿರೋಧ ಪಕ್ಷಗಳು ಧ್ವನಿ ಎತ್ತದೆ ಇರುವುದು ಅತ್ಯಂತ ನಾಚಿಗೇಡಿನ ಸಂಗತಿ’ ಎಂದರು.
‘ಮಹಾಜನ ವರದಿ ಪ್ರಕಾರ, ಮಹಾರಾಷ್ಟ್ರದ ಸೊಲ್ಲಾಪುರ ಹಾಗೂ ಇತರ ಪ್ರದೇಶಗಳು ಕರ್ನಾಟಕಕ್ಕೆ ಸೇರಬೇಕು. ಅದರ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಶೀಘ್ರವಾಗಿ ಆರಂಭಿಸಬೇಕು’ ಎಂದು ಆಗ್ರಹಿಸಿದರು.
ಶಾ.ಮುರಳಿ, ಚಾ.ವೆಂ.ರಾಜ್ ಗೋಪಾಲ್, ಕಂಡಕ್ಟರ್ ಚಾ.ಸಿ.ಸೋಮನಾಯಕ, ನಿಜಧ್ವನಿ ಗೋವಿಂದರಾಜು, ಚಾ.ರಾ.ಕುಮಾರ್, ತಾಂಡವಮೂರ್ತಿ, ವೀರಭದ್ರ, ಮೂರ್ತಿ, ಶಿವಶಂಕರನಾಯಕ, ನಂಜುಂಡ, ಗು.ಪುರುಷೋತ್ತಮ್, ಲಿಂಗರಾಜು, ಜಗದೀಶ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.