ಮಂಗಳವಾರ, ನವೆಂಬರ್ 24, 2020
22 °C
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರದ ವಿರುದ್ಧ ಆಕ್ರೋಶ

ಹಾಥರಸ್‌ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಯುವತಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಿ ಡಾ.ಬಿ.ಆರ್.ಅಂಬೇಡ್ಕರ್ ಸಮಾಜವಾದಿ ಡೆಮಾಕ್ರಟಿಕ್ ಪಾರ್ಟಿ ಹಾಗೂ ಜಿಲ್ಲಾ ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಕಾರರು, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಭವನದ ಶಿರಸ್ತೇದಾರ ಪರಶಿವಮೂರ್ತಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಸಮಾಜವಾದಿ ಡೆಮಾಕ್ರಟಿಕ್ ಪಾರ್ಟಿಯ ಅಧ್ಯಕ್ಷ ಸಿ.ಎಂ.ನಾಗರಾಜ್ ಅವರು ಮಾತನಾಡಿ, ‘ಹಾಥರಸ್‌ನಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವಿರೋಧಿಸಿ ಅಖಿಲ ಭಾರತೀಯ ಪ್ರಜಾಸತ್ತಾತ್ಮಕ ಮಹಿಳಾ ಸಂಘಟನೆ, ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟ ಹಾಗೂ ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಗಳು ರಾಷ್ಟ್ರವ್ಯಾಪಿ ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ನಮ್ಮ ಪಕ್ಷ ಹಾಗೂ ಚಾಮರಾಜನಗರ ಜಿಲ್ಲಾ ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದರು.

‘ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರವು ಅತ್ಯಾಚಾರ, ಕೊಲೆ ಆರೋಪಿಗಳನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಿ ನ್ಯಾಯ ದೊರಕಿಸಿಕೊಡಬೇಕು’ ಎಂದು ಆಗ್ರಹಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಸಮಾಜವಾದಿ ಡೆಮಾಕ್ರಟಿಕ್ ಪಾರ್ಟಿಯ ರಾಜ್ಯ ಸಮಿತಿ ಸದಸ್ಯ ಶಿವಲಿಂಗಸ್ವಾಮಿ, ನಿಜಧ್ವನಿಗೋವಿಂದರಾಜು, ಆಲೂರು ನಾಗೇಂದ್ರ, ಸಿ.ಎಂ.ಕೃಷ್ಣಮೂರ್ತಿ, ಬಂಗಾರಸ್ವಾಮಿ, ಭಗವಾನ್, ಷರೀಫ್, ನಾಗರಾಜು, ಗುರುಸ್ವಾಮಿ, ಬಿ.ಕೃಷ್ಣಯ್ಯ, ಮಲ್ಲಶೆಟ್ಟಿ, ಮೂರ್ತಿ, ಮೂರ್ತಿ, ನಂಜುಂಡಯ್ಯ ಇದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು