ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಜಿಲ್ಲಾ ಕೇಂದ್ರದಲ್ಲಿ ಬೃಹತ್‌ ರ‍್ಯಾಲಿ, ಧರಣಿ ನಡೆಸಿದ ಅಂಗನವಾಡಿ ನೌಕರರು
Published 24 ಜನವರಿ 2024, 5:49 IST
Last Updated 24 ಜನವರಿ 2024, 5:49 IST
ಅಕ್ಷರ ಗಾತ್ರ

ಚಾಮರಾಜನಗರ: ಈ ಬಾರಿಯ ಕೇಂದ್ರದ ಬಜೆಟ್‌ನಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ (ಐಸಿಡಿಎಸ್‌) ಅನುದಾನ ಹೆಚ್ಚಿಸಬೇಕು, ಅಂಗನವಾಡಿ ನೌಕರರಿಗೆ  ಕನಿಷ್ಠ ವೇತನವನ್ನು ಘೋಷಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ನಗರದಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿದರು. 

ಚಾಮರಾಜೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಸೇರಿದ ಪ್ರತಿಭಟನಕಾರರು ಅಲ್ಲಿಂದ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನದವರೆಗೆ ತೆರಳಿ, ಭವನದ ಮುಂಭಾಗ ಧರಣಿ ಕುಳಿತರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. 

‘ಕೇಂದ್ರ ಸರ್ಕಾರದ ನವ ಉದಾರೀಕರಣ ನೀತಿಗಳ ಜಾರಿಯ ವೇಗದಲ್ಲಿ ತನ್ನ ನೀತಿಗಳನ್ನು ಬದಲಾಯಿಸಿ ಮಕ್ಕಳು ಮತ್ತು ಮಹಿಳೆಯರಿಗಾಗಿ ಕೊಡುವ ಸವಲತ್ತುಗಳ ಪಾಲನ್ನು ಶೇ 90ರಿಂದ ಶೇ 60ರಷ್ಟು ಕಡಿತ ಮಾಡಿದೆ. 2021ರ ಬಜೆಟ್‌ನಲ್ಲಿ ₹8,542 ಕೋಟಿ ಕಡಿತ ಮಾಡಿತ್ತು. ಇದರಿಂದ ದೇಶದ 12 ಕೋಟಿ ಫಲಾನುಭವಿಗಳು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ದೂರಿದರು. 

‘ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸಿನಂತೆ ಈ ಯೋಜನೆಗಳಲ್ಲಿ ದುಡಿಯುತ್ತಿರುವ ಸಿಬ್ಬಂದಿ ಸೇರಿದಂತೆ 1 ಕೋಟಿ ನೌಕರರಿಗೆ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು ಕೊಟ್ಟು ನೌಕರರು ಎಂದು ಪರಿಗಣಿಸಬೇಕು. ಮಕ್ಕಳಿಗೆ ಉಚಿತ. ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ಕೊಡಲು ಕಾನೂನು ರೂಪಿಸಬೇಕು. ಎನ್‌ಇಪಿ ನಿಲ್ಲಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು. 

‘49 ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರಿಗೆ 21 ವರ್ಷಗಳಿಂದ ದುಡಿಯುವ ಬಿಸಿಯೂಟ ನೌಕರರಿಗೆ, ಆಶಾ ಮತ್ತು ಇತರೆ ಸಿಬ್ಬಂದಿಗೆ ₹31ಸಾವಿರ ಕನಿಷ್ಠ ವೇತನ, ನಿವೃತ್ತಿ ಬಳಿಕ ಕನಿಷ್ಠ ₹10 ಪಿಂಚಣಿ ಕೊಡಬೇಕು. ಚುನಾವಣೆಗಳು ಮತ್ತು ಇತರೆ ಸರ್ವೆ ಕೆಲಸಗಳಿಗೆ ಬಳಕೆ ಮಾಡಬಾರದು. ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಅಂಗನವಾಡಿ ಕೇಂದ್ರಗಳಾಗಿ ಪರಿವರ್ತಿಸಬೇಕು. ಬೆಲೆ ಏರಿಕೆ ಆಧಾರದಲ್ಲಿ ಪೂರಕ ಪೌಷ್ಟಿಕ ಆಹಾರಕ್ಕೆ ಕೊಡುವ ಹಣವನ್ನು ಹೆಚ್ಚಳ ಮಾಡಬೇಕು. 2022 ಏಪ್ರಿಲ್‌ನಲ್ಲಿ ಸುಪ್ರೀಂ  ಕೋರ್ಟ್ ಕೊಟ್ಟಿರುವ ತೀರ್ಪಿನಂತೆ ಎಲ್ಲ ಅಂಗನವಾಡಿ ನೌಕರರನ್ನು ಉದ್ಯೋಗಸ್ಥರೆಂದು ಪರಿಗಣಿಸಿ ಗ್ರಾಜ್ಯುಟಿ ಕಾಯ್ದೆಯನ್ನು ದೇಶದೆಲ್ಲೆಡೆ ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು. 

ರಾಜ್ಯ ಸರ್ಕಾರದ ಮುಂದೆಯೂ 15 ವಿವಿಧ ಬೇಡಿಕೆಗಳನ್ನು ಪ್ರತಿಭಟನಕಾರರು ಮುಂದಿಟ್ಟರು.  ಬೇಡಿಕೆಗಳನ್ನು ಈಡೇರಿಸಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರ ಗೊಳಿಸಲಾಗುವುದು ಎಂದು ಎಚ್ಚರಿಸಿದರು. 

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಕೆ.ಸುಜಾತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ, ಖಜಾಂಚಿ ಜೆ.ಭಾಗ್ಯ, ಜಿಲ್ಲಾ ಪದಾಧಿಕಾರಿಗಳಾದ ಶಾಯಿದಬಾನು, ಪಾರ್ವತಮ್ಮ, ಶಾಂತಮ್ಮ, ಭಾಗ್ಯ, ಸುಜಿಯಾ, ತುಳಸಮ್ಮ, ಮೀನಾಕ್ಷಿ, ಗುರುಮಲ್ಲಮ್ಮ, ಜಯಮಾಲ, ಗುರುಲಿಂಗಮ್ಮ, ಸುಮಿತ್ರ, ಮರಿಯಮ್ಮ, ಸುನಿಲ್‌ ಸೇರಿದಂತೆ ನೂರಾರು ಸದಸ್ಯರು ಭಾಗವಹಿಸಿದ್ದರು. 

ಇತರ ಬೇಡಿಕೆಗಳು ವಿದ್ಯುತ್ ರೈಲ್ವೆ ಸೇರಿದಂತೆ ಸಾರ್ವಜನಿಕ ವಲಯಗಳ ಖಾಸಗೀಕರಣ ನಿಲ್ಲಬೇಕು. 29 ಕಾರ್ಮಿಕ ಕಾನೂನುಗಳ ಸಂಹಿತೆಗಳಾಗಿ ಮಾಡಿರುವುದನ್ನು ಕೈಬಿಟ್ಟು ಕಾರ್ಮಿಕ ಪರವಾದ ನೀತಿಗಳನ್ನು ಜಾರಿ ಮಾಡಬೇಕು. ದೇಶದ ಎಲ್ಲ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಚಿಸಲಾಗಿರುವ ಸಾಮಾಜಿಕ ಭದ್ರತಾ ಮಂಡಳಿಯನ್ನು ಬಲಪಡಿಸಿ ಕೇಂದ್ರ ಸರ್ಕಾರ ವಾರ್ಷಿಕ ನಿವ್ವಳ ಆದಾಯದ ಶೇ 3 ರಷ್ಟು ಅನುದಾನ ಅಂದರೆ ₹3 ಲಕ್ಷ ಕೋಟಿ ಹಣವನ್ನು ಅಸಂಘಟಿತ ಕಾರ್ಮಿಕರ ಕಾರ್ಯಕ್ರಮಗಳಿಗೆ ಘೋಷಿಸಬೇಕು.  ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರಿಗೆ ಬದುಕಲು ಅವಕಾಶ ನೀಡುವ ನೀತಿಗಳನ್ನು ಜಾರಿಗೆ ತರಬೇಕು. ರಾಜ್ಯದಲ್ಲಿ ಕೆಲಸದ ಅವಧಿಯ ಹೆಚ್ಚಳವನ್ನು ತಂದಿರುವ ಕಾರ್ಖಾನೆ ಕಾಯ್ದೆ ತಿದ್ದುಪಡಿ ಕೈ ಬಿಡಬೇಕು. ಮಹಿಳೆಯರನ್ನು ರಾತ್ರಿಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ನೀಡುವುದು ಸೇರಿದಂತೆ ಎಲ್ಲ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಕೃಷಿ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತರಿಪಡಿಸಬೇಕು. ಎಪಿಎಮ್ಸಿ ವ್ಯವಸ್ಥೆಯನ್ನು ಬಲಗೊಳಿಸಬೇಕು. ಗೊಬ್ಬರ ಒಳಗೊಂಡಂತೆ ಕೃಷಿ ಇಡುವಳಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈ ಬಿಡಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT