ಶನಿವಾರ, ಡಿಸೆಂಬರ್ 4, 2021
20 °C

ಡ್ರಗ್ಸ್‌ ದಂಧೆ; ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಡ್ರಗ್ಸ್ ದಂಧೆಯಲ್ಲಿ ತೊಡಗಿಕೊಂಡಿರುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. 

ಜಿಲ್ಲಾಡಳಿತ ಭವನದ ಮುಂದೆ ಸೇರಿದ ಪ್ರತಿಭಟನನಿತರರು ದಂಧೆಯಲ್ಲಿ ತೊಡಗಿರುವವರ ವಿರುದ್ಧ ಘೋಷಣೆ ಕೂಗಿದರು.  

‘ಡ್ರಗ್ಸ್‌ ದಂಧೆಯ ಹಿಂದೆ ರಾಷ್ಟ್ರಘಾತುಕರ ಸಂಚು ಇದೆ. ಕನ್ನಡ ಚಿತ್ರರಂಗದೊಂದಿಗೆ ನಂಟು ಹೊಂದಿರುವ ಡ್ರಗ್ಸ್‌ ಜಾಲವನ್ನು ಎನ್‌ಸಿಬಿ ಅಧಿಕಾರಿಗಳು ಭೇದಿಸಿದ್ದು, ಇದರ ಹಿಂದೆ ಸಮಾಜದ ಪ್ರತಿಷ್ಠಿತ ಹಾಗೂ ಪ್ರಭಾವಿ ಕುಟುಂಬಗಳ ವ್ಯಕ್ತಿಗಳು, ಚಿತ್ರ ನಟ ನಟಿಯರು ಇದ್ದಾರೆ ಎಂಬ ಮಾಹಿತಿ ಇದೆ. ಈ ದಂಧೆಯಲ್ಲಿ ತೊಡಗಿರುವವರು ಯಾರೇ ಆಗಲಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.  

‘ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ರಾಜ್ಯದ ಹಲವು ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್‌ ಜಾಲ ವ್ಯವಸ್ಥಿತ ಕೋಡ್‌ ವರ್ಡ್‌ಗಳ ಮೂಲಕ ಕಾರ್ಯನಿರ್ವಹಿಸುತ್ತಿದೆ ಎಂಬ ಅಂಶವೂ ತನಿಖೆಯಿಂದ ಗೊತ್ತಾಗಿದೆ. ಪೋಷಕರು ಹೆಚ್ಚಿನ ಎಚ್ಚರವಹಿಸಿ, ಮಕ್ಳಳ ಚಟುವಟಿಕೆಗಳ ಮೇಲೆ ಕಣ್ಣಿಡಬೇಕಾಗಿದೆ’ ಎಂದು ಎಬಿವಿಪಿಯ ರಾಜ್ಯ ಸಹ ಕಾರ್ಯದರ್ಶಿ ಶ್ರೀರಾಮ ಅಂಗೀರಸ ಅವರು ಹೇಳಿದರು. 

‘ಬೆಂಗಳೂರಿನ ಡ್ರಗ್ಸ್‌ ಪ್ರಕರಣದಲ್ಲಿ ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಬೇಕಾಗಿದೆ. ಈ ಜಾಲದಲ್ಲಿ ಪ್ರಭಾವಿಗಳ ಹಸ್ತಕ್ಷೇಪ ಇರುವುದರಿಂದ, ಗೃಹ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯದೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು’ ಎಂದು  ಅವರು ಒತ್ತಾಯಿಸಿದರು. 

ರಾಜ್ಯ ಕಾರ್ಯಕಾರಣಿ ಸದಸ್ಯ ಶಿವಪ್ರಸಾದ್, ವಿದ್ಯಾರ್ಥಿಗಳಾದ ಶ್ರೀನಿಧಿ, ಅಮಿತ್, ಚಂದು, ನವೀನ್, ಪ್ರಜ್ವಲ್, ಕಿಶೋರ್, ಸೋನಾ, ತೇಜಸ್ವಿನಿ, ರಂಗಸ್ವಾಮಿ ಇತರರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು