ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಒತ್ತಾಯಿಸಿ ಪ್ರತಿಭಟನೆ

Last Updated 5 ಮಾರ್ಚ್ 2021, 15:28 IST
ಅಕ್ಷರ ಗಾತ್ರ

ಚಾಮರಾಜನಗರ: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಸಂವಿಧಾನ ಬದ್ಧಹಕ್ಕುಗಳಿಗಾಗಿ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ (ದಸಂಸ) ಜಿಲ್ಲಾ ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಭವನದ ಎದುರು ಸೇರಿದ ಪ್ರತಿಭಟನಕಾರರುಕೇಂದ್ರ ಹಾಗೂ ರಾಜ್ಯ ಸರ್ಕಾಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಮಿತಿಯ ಸಂಚಾಲಕ ಕಂದಹಳ್ಳಿ ನಾರಾಯಣ ಅವರು, ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮೊತ್ತವನ್ನು ವಾರ್ಷಿಕವಾಗಿ ₹15 ಸಾವಿರ ಕೋಟಿಗೆ ಹೆಚ್ಚಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದ ಆದಾಯ ಮಿತಿಯನ್ನು ವಾರ್ಷಿಕ ₹15 ಲಕ್ಷಗೆ ಏರಿಸಬೇಕು. ಮ್ಯಾನೇಜ್‌ಮೆಂಟ್ ಕೋಟಾದ ಅಡಿಯಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಬೇಕು. ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು’ ಎಂದರು.

‘ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀಡಬೇಕು. ಬೆಲೆ ಏರಿಕೆಗೆ ತಕ್ಕಂತೆ ವಿದ್ಯಾರ್ಥಿವೇತನ ಹೆಚ್ಚಿಸಬೇಕು. ಹಾಸ್ಟೆಲ್ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಕಟ್ಟಡಗಳನ್ನು ಹೆಚ್ಚಿಸಬೇಕು. ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ ನೇಮಕಾತಿ ಮೀಸಲಾತಿಯನ್ನು ಅನುಸರಿಸಬೇಕು. ಎಲ್ಲ ಯೋಜನೆಗಳನ್ನು ಜಾರಿಗೊಳಿಸಲು ಏಕಗವಾಕ್ಷಿ ಯೋಜನೆಯನ್ನು ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಎಲ್ಲ ನಿಗಮ ಮಂಡಳಿಗಳಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಎಲ್ಲ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಬೇಕು. ಸರ್ಕಾರಿ ಭೂಮಿಯಲ್ಲಿ ಅಕ್ರಮ ಸಾಗುವಳಿದಾರರು ಫಾರಂ-57 ರಲ್ಲಿ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ಕಂದಾಯ ಇಲಾಖೆ ಅವಕಾಶ ನೀಡಬೇಕು. 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿ ಪಾಠ-7 ಹೊಸ ಧರ್ಮಗಳ ಉದಯ ಬೋಧನೆ-ಕಲಿಕೆ/ಮೌಲ್ಯಮಾಪನಕ್ಕೆ ಪರಿಗಣಿಸದಿರುವ ಬಗ್ಗೆ ಶಿಕ್ಷಣ ಸಚಿವರು ಆದೇಶಿಸಿರುವ ಸುತ್ತೋಲೆಯನ್ನು ರದ್ದುಪಡಿಸಬೇಕು’ ಎಂದು ಪ್ರತಿಭಟನನಿರತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ಯಳಂದೂರು ತಾಲ್ಲೂಕು ಸಂಚಾಲಕ ನಂಜುಂಡಸ್ವಾಮಿ, ಪದಾಧಿಕಾರಿಗಳಾದ ನಿಂಗರಾಜು, ಇಂದ್ರಮೂರ್ತಿ, ಕೃಷ್ಣಯ್ಯ, ನಳಿನಕುಮಾರಿ, ಕೆ.ಮಂಜುಳ, ಭಾಗ್ಯ, ಗೀತಾ, ಶಾಂತಮ್ಮ, ವೀರಭದ್ರಯ್ಯ, ಪ್ರಕಾಶ್, ಶಂಕರಮೂರ್ತಿ, ಮಹೇಂದ್ರ, ಶೋಭಾ, ಗೌರಮ್ಮ, ಪ್ರೇಮ, ವಸಂತ, ಗೀತಾ, ಮಂಜುಳಾ, ಭಾಗ್ಯ, ವಿಜಯಲಕ್ಷ್ಮೀ, ಜಯಸುಂದ್ರಮ್ಮ, ಶಿವಮ್ಮ, ರಾಜಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT