ಶನಿವಾರ, ಜುಲೈ 24, 2021
25 °C
ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯ, ಸ್ಥಳಕ್ಕೆ ಭೇಟಿ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ

ಉಡಿಗಾಲ: ರೈತರ ಕಾನೂನು ಭಂಗ ಚಳವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ತಾಲ್ಲೂಕಿನ ಉಡಿಗಾಲ, ಉಗನೇದಹುಂಡಿ, ಬಡಗಲಪುರ, ಕಟ್ನವಾಡಿ, ಕೊತ್ತಲವಾಡಿ, ತಮ್ಮಡಹಳ್ಳಿ, ಸಾಣೇಗಾಲ, ಬೊಕ್ಕೆಪುರ, ನಿಜಲಿಂಗೆನಪುರಗಳ ಗ್ರಾಮಸ್ಥರ ಹಾಗೂ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಉಡಿಗಾಲ ಗ್ರಾಮದ ವೃತ್ತದಲ್ಲಿ ಸೋಮವಾರ ಕಾನೂನು ಭಂಗ ಚಳವಳಿ ನಡೆಸಿದರು. 

ಚಾಮರಾಜನಗರ ಹಾಗೂ ಗುಂಡ್ಲುಪೇಟೆಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಧರಣಿ ಕುಳಿತ ಪ್ರತಿಭಟನಾನಿರತರರು ವಾಹನಗಳ ಸಂಚಾರವನ್ನು ತಡೆದರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ವಾಹನಗಳ ಸಂಚಾರ ಅಸ್ತವ್ಯಸ್ತವಾಯಿತು. ಸ್ಥಳಕ್ಕೆ ವಿವಿಧ ಇಲಾಖೆಗಳ ಎಲ್ಲ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟನಕಾರರು ಪಟ್ಟು ಹಿಡಿದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌, ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.

ಸುಮಾರು ವರ್ಷಗಳಿಂದ ಹಾಳಾಗಿರುವ ಉಡಿಗಾಲ–ಉಗನೇದಹುಂಡಿ–ಕಟ್ನವಾಡಿ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕು. ಸುತ್ತಮುತ್ತಲ ಹಳ್ಳಿಗಳಲ್ಲಿ ಹೆಚ್ಚಾಗಿರುವ ಚಿರತೆ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ಅಕ್ರಮ ಗಣಿಗಾರಿಕೆ ಹಾಗೂ ಭಾರಿ ವಾಹನಗಳ ಓಡಾಟದಿಂದ ಸ್ಥಳೀಯರಿಗೆ ತೀವ್ರ ತೊಂದರೆಯಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು. 

‘ಎರಡು ವರ್ಷಗಳಾದರೂ ಹಲವು ರೈತರಿಗೆ ಬೆಳೆ ವಿಮೆ ಬಂದಿಲ್ಲ. ಅದನ್ನು ತಕ್ಷಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಇ.ಸಿ. ಹಾಗೂ ಇ–ಸ್ವತ್ತುಗಳನ್ನು ಸಮಯಕ್ಕೆ ಸರಿಯಾಗಿ ನೀಡಬೇಕು. ರೈತರ ಬ್ಯಾಂಕ್‌ ಸಾಲ ಮನ್ನಾ ಮಾಡಬೇಕು. ಕೃಷಿ ಹಾಗೂ ತೋಟಗಾರಿಕಾ ಇಲಾಖೆಗಳ ಯೋಜನೆಗಳ ಬಗ್ಗೆ ರೈತರಿಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಅನುದಾನವೂ ಸರಿಯಾಗಿ ಬರುತ್ತಿಲ್ಲ. ಈ ಬಗ್ಗೆ ಗಮನ ಹರಿಸಬೇಕು’ ಎಂದು ಆಗ್ರಹಿಸಿದರು. 

ಪ್ರಸ್ತಾವಿತ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್‌ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಒತ್ತಾಯಿಸಿದರು. 

ಗಣಿ ಇಲಾಖೆ, ಅರಣ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ಭರವಸೆ ನೀಡಿದರು. ಆ ಬಳಿಕ ರೈತರು ಪ್ರತಿಭಟನೆಯನ್ನು ಕೈಬಿಟ್ಟರು. 

ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್‌, ರಾಜ್ಯ ಕಾರ್ಯದರ್ಶಿ ಗುರುಪ್ರಸಾದ್‌, ಮುಖಂಡರಾದ ಹೊನ್ನೂರು ಬಸವಣ್ಣ, ಹೆಗ್ಗೊಠಾರ ವಿಜಯಕುಮಾರ್‌, ಕಡುಬೂರು ಮಂಜು, ಛತ್ರಹಳ್ಳಿ ಮಹದೇವಪ್ಪ, ಮಹೇಶ್‌, ಮಹದೇವಸ್ವಾಮಿ, ಪೃಥ್ವಿ, ಸಂಪತ್‌ ಸೇರಿದಂತೆ ಸುತ್ತಮುತ್ತಲಿನ ರೈತರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು