ಮಂಗಳವಾರ, ಅಕ್ಟೋಬರ್ 4, 2022
26 °C
ಪೀಠ ತ್ಯಾಗಕ್ಕೆ ಪ್ರಗತಿಪರ ಮತ್ತು ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯ

ಮುರುಘಾ ಶ್ರೀ ಪ್ರಕರಣ: ನ್ಯಾಯಾಂಗ ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಚಿತ್ರದುರ್ಗದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಮತ್ತು ದಲಿತ  ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. 

ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಸೇರಿದ ಪ್ರತಿಭಟನಕಾರರು  ಮುರುಘಾ ಶ್ರೀಗಳು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಸ್ವಾಮೀಜಿಯವರು ತಮ್ಮದೇ ಮಠದ ಹಾಸ್ಟೆಲ್‌ನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ಕೆಲಸ. ಇದರ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ  ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ದೌರ್ಜನ್ಯ ತಡೆ ಕಾಯ್ದೆ ಅನ್ವಯ ದೂರು ದಾಖಲಾಗಿದೆ. ಹಾಗಿದ್ದರೂ ಚಿತ್ರದುರ್ಗದ ಜಿಲ್ಲಾ ಪೊಲೀಸರು ಆರೋಪಿಗೆ ಅನುಕೂಲ ಮಾಡಿಕೊಡುವ ದುರುದ್ದೇಶದಿಂದ ಸಂತ್ರಸ್ತ ಬಾಲಕಿಯರಿಂದ ಸೆಕ್ಷನ್ 164 ರ ಅಡಿಯಲ್ಲಿ ಹೇಳಿಕೆ ದಾಖಲಿಸಿ ಆರೋಪಿಯನ್ನು ಬಂಧಿಸುವಲ್ಲಿ ವಿಳಂಬ ಮಾಡಿದ್ದಾರೆ’ ಎಂದು ಪ್ರತಿಭಟನಾನಿರತರು ಆರೋಪಿಸಿದರು.

‘ದೂರು ನೀಡಿದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಬೇಕಾಗಿತ್ತು. ಚಿತ್ರದುರ್ಗ ಜಿಲ್ಲಾ ಎಸ್‌ಪಿ ಪ್ರಕರಣದ ಬಗ್ಗೆ ಅಗತ್ಯ ಸಾಕ್ಷ್ಯಾಧಾರ ಸಿಕ್ಕಿದ ನಂತರ ಬಂಧಿಸುವುದಾಗಿ ಹೇಳಿಕೆ ನೀಡಿ ಆರೋಪಿಯ ರಕ್ಷಣೆಗೆ ಪಿತೂರಿ ನಡೆಸಿರುವುದು ಮೇಲ್ನೊಟಕ್ಕೆ ಸ್ಪಷ್ಟವಾಗಿದೆ. ಈ ಪ್ರಕರಣ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆಗಳು ಹೆಚ್ಚಾದ ಬಳಿಕ, ದೂರು ದಾಖಲಾಗಿ ವಾರದ ನಂತರ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ದೂರಿದರು. 

‘ಸಮಾಜವನ್ನು ತಿದ್ದಿ ಸನ್ಮಾರ್ಗದಲ್ಲಿ ನಡೆಸಬೇಕಾದ ಸ್ವಾಮೀಜಿಯವರು ಇಂತಹ ಕೆಲಸ ಮಾಡಿರುವುದು ಸರಿಯಲ್ಲ  ಕೂಡಲೇ  ಶ್ರೀಗಳು ಪೀಠ ತ್ಯಾಗ ಮಾಡಬೇಕು. ಹೈಕೋರ್ಟ್ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ನಡೆಸಬೇಕು. ಕರ್ತವ್ಯಲೋಪ ಎಸಗಿರುವ ಚಿತ್ರದುರ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪರಶುರಾಮ್ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

ಒಕ್ಕೂಟದ ಸಿ.ಎಂ.ಕೃಷ್ಣಮೂರ್ತಿ, ಸಿ.ಎಂ.ಶಿವಣ್ಣ, ದೊಡ್ಡಿಂದುವಾಡಿ ಸಿದ್ದರಾಜು, ಕೆ.ಎಂ.ನಾಗರಾಜು, ರಾಮಸಮುದ್ರ ಸುರೇಶ್, ಯರಿಯೂರು ರಾಜಣ್ಣ, ಜಿ.ಎಂ.ಗಾಡ್ಕರ್, ಸೋಮಣ್ಣ, ಸಿ.ಎಸ್.ಸೈಯದ್ ಆರೀಫ್‌, ನಂಜುಂಡಸ್ವಾಮಿ, ಸೋಮಣ್ಣ, ಮಹದೇವಸ್ವಾಮಿ, ಶಿವಣ್ಣ ಇತರರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು