ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಒ ವರ್ಗಾವಣೆ ಖಂಡಿಸಿ ಪ್ರತಿಭಟನೆ

Last Updated 10 ಸೆಪ್ಟೆಂಬರ್ 2019, 7:14 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ (ಸಿಇಒ) ಕೆ.ಎಸ್.ಲತಾಕುಮಾರಿ ಅವರನ್ನು ವರ್ಗಾವಣೆ ಮಾಡಿರುವುದನ್ನು ಖಂಡಿಸಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪ‍ದಾಧಿಕಾರಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಭುವನೇಶ್ವರಿ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಕೆಲ ಹೊತ್ತು ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್‌ ಅವರು, ‘ಲತಾಕುಮಾರಿ ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದರು. ಜಿಲ್ಲೆಯ ಕುಗ್ರಾಮಗಳಿಗೂ ಭೇಟಿ ನೀಡಿ ಸರ್ಕಾರದ ಸೌಲಭ್ಯವನ್ನು ತಲುಪಿಸಲು ಯತ್ನಿಸಿದ್ದರು. ರೈತರ ಪರವಾಗಿ ಕೆಲಸ ಮಾಡಿದ್ದರು. ಆರು ತಿಂಗಳಲ್ಲಿ ಅವರನ್ನು ವರ್ಗಾವಣೆ ಮಾಡಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಜಿಲ್ಲಾಧಿಕಾರಿ, ಸಿಇಒ, ಎಸ್‌ಪಿಯಾಗಿ ನಿಯೋಜನೆಗೊಂಡವರು ಒಂದು ಜಿಲ್ಲೆಯಲ್ಲಿ ಕನಿಷ್ಠ ಮೂರು ವರ್ಷಗಳಾದರೂ ಕೆಲಸ ಮಾಡಲು ಅವಕಾಶ ಕೊಡಬೇಕು. ಜಿಲ್ಲೆಯ ಬಗ್ಗೆ ಅರಿಯಲು ಆರು ತಿಂಗಳ ಕಾಲಾವಕಾಶ ಬೇಕು. ರಾಜ್ಯ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿರುವ ಲತಾಕುಮಾರಿಯಂತಹವರನ್ನು ವರ್ಗಾವಣೆ ಮಾಡುತ್ತದೆ. ಆದರೆ, ರೈತರ ವಿರುದ್ಧವಾಗಿ ಕೆಲಸ ಮಾಡುತ್ತಿರುವ ಅಪ್ರಾಮಾಣಿಕ ಅಧಿಕಾರಿಯಾಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಅವರನ್ನು ಹುದ್ದೆಯಲ್ಲಿ ಮುಂದುವರಿಸಲಾಗಿದೆ. ತಕ್ಷಣವೇ ಸರ್ಕಾರ, ಲತಾಕುಮಾರಿ ಅವರ ವರ್ಗಾವಣೆಯನ್ನು ರದ್ದುಗೊಳಿಸಬೇಕು’ ಎಂದು ಒತ್ತಾಯಿಸಿದರು.

ನಂತರ ಪ್ರತಿಭಟನಾಕಾರರು ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ಸಾಗಿ ಶಿರಸ್ತೇದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್‌, ಮುಖಂಡರಾದ ಪೃಥ್ವಿ, ಅಂಬಳೆ ಚಿನ್ನಸ್ವಾಮಿ, ಶಂಭುಲಿಂಗಪ್ಪ, ಶಿವಕುಮಾರ್‌, ಮಹೇಶ್‌, ಬೆಳ್ಳಶೆಟ್ಟಿ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT