ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಕೆಗೆ ಗ್ರಾಮ ಲೆಕ್ಕಾಧಿಕಾರಿಗಳ ಮನವಿ

Last Updated 18 ಜುಲೈ 2019, 6:05 IST
ಅಕ್ಷರ ಗಾತ್ರ

ಚಾಮರಾಜನಗರ:ಮುಂಬಡ್ತಿಯಲ್ಲಿ ಉಂಟಾಗುತ್ತಿರುವ ಅನ್ಯಾಯವನ್ನು ಸರಿಪಡಿಸುವುದು, ಅನ್ಯ ಇಲಾಖೆಯ ಕೆಲಸದ ಒತ್ತಡವನ್ನು ಹೇರದಿರುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಭವನದ ಮುಂದೆ ಧರಣಿ ಕುಳಿತ ಗ್ರಾಮ ಲೆಕ್ಕಾಧಿಕಾರಿಗಳು ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಅವರಿಗೆ ಮನವಿ ಮಾಡಿದರು.

ಗ್ರಾಮ ಲೆಕ್ಕಾಧಿಕಾರಿಗಳು ಎದುರಿಸುತ್ತಿರುವ ಕುಂದುಕೊರತೆ ಹಾಗೂ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಈ ಹಿಂದೆ ಕಂದಾಯ ಸಚಿವರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿತ್ತು. ಆದರೆ ಇದುವರೆಗೆ ಸರ್ಕಾರ ಸ್ಪಂದಿಸಿಲ್ಲ ಎಂದು ದೂರಿದರು.

‘ಬೇಡಿಕೆ ಈಡೇರಿಸದಿದ್ದರೆ ರಾಜ್ಯದಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ರಾಜ್ಯಮಟ್ಟದ ಸಂಘ ತೀರ್ಮಾನಿಸಿತ್ತು. ಅದರಂತೆ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ್‌ ತಿಳಿಸಿದರು.

‘ಗ್ರಾಮ ಲೆಕ್ಕಾಧಿಕಾರಿಗಳ ಮುಂಬಡ್ತಿಯಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ. ಇದನ್ನು ಸರಿಪಡಿಸಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರ ಹಾಗೂ ಗ್ರಾಮ ಲೆಕ್ಕಿಗರ ಜೇಷ್ಠತೆಗಳನ್ನು ಒಟ್ಟುಗೂಡಿಸಿ ಹುದ್ದೆ ನವೀಕರಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

‘ಗ್ರಾಮ ಲೆಕ್ಕಾಧಿಕಾರಿಗಳ ಪ್ರಯಾಣ ಭತ್ಯೆಯನ್ನು ₹ 1,000ಕ್ಕೆ ಹೆಚ್ಚಿಸಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತೀರ್ಮಾನಿಸಿದ್ದರೂ ₹ 300ರಿಂದ ₹ 400ಕ್ಕೆ ಹೆಚ್ಚಿಸಲಾಗಿದೆ. ತಕ್ಷಣವೇ ಮೊತ್ತವನ್ನು ₹ 1,000ಕ್ಕೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.

‘ಪರಿಷ್ಕೃತ ಕೆಲಸದ ನಕ್ಷೆ (ಜಾಬ್‌ ಚಾರ್ಟ್‌) ನೀಡಲು ಕ್ರಮ ಕೈಗೊಳ್ಳಬೇಕು. ಮರಳು ದಂಧೆಕೋರರ ದುಷ್ಕೃತ್ಯಕ್ಕೆ ಬಲಿಯಾಗಿದ್ದ ಗ್ರಾಮ ಲೆಕ್ಕಾಧಿಕಾರಿ ಸಾಹೇಬ ಪಾಟೀಲ ಅವರ ಕುಟುಂಬಕ್ಕೆ ತಕ್ಷಣವೇ ₹ 20 ಲಕ್ಷ ಪರಿಹಾರವನ್ನು ಮಂಜೂರು ಮಾಡಬೇಕು. ಗ್ರಾಮ ಸಹಾಯಕರ ಹುದ್ದೆಗಳನ್ನು ಕಾಯಂಗೊಳಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್‌, ಉಪಾಧ್ಯಕ್ಷರಾದ ಬಸವರಾಜು, ವಿನಯಕುಮಾರ್‌, ಶಿವಕುಮಾರ್‌ ಅಂಜಲಿ, ಚಾಮರಾಜನಗರ ತಾಲ್ಲೂಕು ಘಟಕದ ಅಧ್ಯಕ್ಷ ರೇವಣ್ಣ ಎನ್‌., ಗುಂಡ್ಲುಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಮಹದೇವಪ್ಪ, ಕೊಳ್ಳೇಗಾಲ ತಾಲ್ಲೂಕು ಘಟಕದ ಅಧ್ಯಕ್ಷ ನಟೇಶ್‌, ಯಳಂದೂರು ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ್‌, ಗ್ರಾಮ ಸಹಾಯಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಣ್ಣ, ಎಲ್ಲ ಗ್ರಾಮ ಪಂಚಾಯಿತಿಗಳ ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT