ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೇಮರಹಳ್ಳಿ: ಆಸ್ಪತ್ರೆ ಮೂಲ ಸೌಲಭ್ಯಕ್ಕಾಗಿ ಪ್ರತಿಭಟನೆ ಎಚ್ಚರಿಕೆ

Published 27 ಫೆಬ್ರುವರಿ 2024, 13:59 IST
Last Updated 27 ಫೆಬ್ರುವರಿ 2024, 13:59 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ‘ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲ ಸೌಕರ್ಯ ಇಲ್ಲದೇ ರೋಗಿಗಳು ಪರದಾಡುವಂತಾಗಿದೆ. ತಕ್ಷಣ ಆರೋಗ್ಯ ಇಲಾಖೆ ಎಚ್ಚೆತ್ತು ಬಗೆ ಹರಿಸದಿದ್ದರೇ ಪ್ರತಿಭಟನೆ ನಡೆಸಲಾಗುವುದು’ ಎಂದು ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಬಸವಣ್ಣ ತಿಳಿಸಿದರು.

ಇಲ್ಲಿನ ಜಿಲ್ಲಾ ರೈತಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ರೈತರ ಸಭೆಯಲ್ಲಿ ಮಾತನಾಡಿದರು.
‘ರೈತಸಂಘ ರೈತರ ಕಷ್ಟಗಳಲ್ಲದೇ ಸಾರ್ವಜನಿಕರ ಸಮಸ್ಯೆಗಳಿಗೂ ಸ್ಪಂದಿಸುತ್ತಿದೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಮೂಲ ಸೌಕರ್ಯ ಕಲ್ಪಿಸಿಲ್ಲ. ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸೌಲಭ್ಯವೇ ಇಲ್ಲದಂತಾಗಿದೆ. ಖಾಸಗಿಯಾಗಿ ಟ್ಯಾಂಕರ್‌ನಲ್ಲಿ ಪಡೆಯುತ್ತಿದ್ದಾರೆ. ಜತೆಗೆ ಬಿಸಿನೀರಿನ ವ್ಯವಸ್ಥೆ ಇಲ್ಲದಂತಾಗಿ ರೋಗಿಗಳು ಹಾಗೂ ಗರ್ಭಿಣಿ, ಬಾಣಂತಿಯರಿಗೆ ತೊಂದರೆಯಾಗಿದೆ. ಮನೆಗಳಿಂದ ಮತ್ತು ಹೋಟೆಲ್‌ಗಳಲ್ಲಿ ರೋಗಿಗಳು ಬಿಸಿ ನೀರನ್ನು ಆಶ್ರಯಿಸಬೇಕಾಗಿದೆ’ ಎಂದು ದೂರಿದರು.

‘ವೈದ್ಯಾಧಿಕಾರಿಗಳು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಹಾಜರಾಗುತ್ತಿಲ್ಲ. ರಾತ್ರಿ ಸಮಯದಲ್ಲಿ ವೈದ್ಯಾಧಿಕಾರಿಗಳು ಉಳಿಯುತ್ತಿಲ್ಲ. ಇದರಿಂದ ರೋಗಿಗಳಿಗೆ ತುಂಬಾ ತೊಂದರೆಯಾಗಿದೆ. ತುರ್ತು ಹಾಗೂ ಅಪಘಾತ ಸಂದರ್ಭಗಳಲ್ಲಿ ದೂರದ ಆಸ್ಪತ್ರೆಗಳಿಗೆ ಅಲೆಯುವ ಪರಿಸ್ಥಿತಿ ಉಂಟಾಗಿದೆ. ಕೋಟ್ಯಾಂತರ ಹಣ ಖರ್ಚು ಮಾಡಿ ಆಸ್ಪತ್ರೆ ನಿರ್ಮಿಸಿದ್ದರೂ ರೋಗಿಗಳ ಉಪಯೋಗಕ್ಕೆ ಬರುತ್ತಿಲ್ಲ. ಈ ಬಗ್ಗೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಒಂದು ವಾರದೊಳಗೆ ಆಸ್ಪತ್ರೆ ಸಮಸ್ಯೆ ಬಗೆಹರಿಸದಿದ್ದರೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು’ ಎಂದು ಎಚ್ಚರಿಸಿದರು.

ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಹೊನ್ನೂರು ಮಹದೇವಸ್ವಾಮಿ, ತಾಲ್ಲೂಕು ಅಧ್ಯಕ್ಷ ಹೆಗ್ಗವಾಡಿಪುರ ಮಹದೇವಸ್ವಾಮಿ, ಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT