ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

23ಕ್ಕೆ ಪಲ್ಸ್‌ ಪೋಲಿಯೋ: 68,380 ಮಕ್ಕಳಿಗೆ ಲಸಿಕೆ

ಐದು ವರ್ಷದವರೆಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್
Last Updated 12 ಜನವರಿ 2022, 17:13 IST
ಅಕ್ಷರ ಗಾತ್ರ

ಚಾಮರಾಜನಗರ:ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಇದೇ 23ರಂದು ಪಲ್ಸ್‌ ಪೋಲಿಯೋ ಅಭಿಯಾನ ನಡೆಯಲಿದ್ದು, ಜಿಲ್ಲೆಯಲ್ಲಿ 68,380 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ.

ನವಜಾತ ಶಿಶುವಿನಿಂದ ಹಿಡಿದು ಐದು ವರ್ಷದವರೆಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುತ್ತದೆ.

ಚಾಮರಾಜನಗರ ತಾಲ್ಲೂಕಿನಲ್ಲಿ 23,456, ಗುಂಡ್ಲುಪೇಟೆಯಲ್ಲಿ 13,656, ಕೊಳ್ಳೇಗಾಲ 11,472, ಹನೂರು 13,692 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 6,004 ಮಕ್ಕಳಿಗೆ ಲಸಿಕೆ ಹಾಕಲು ಜಿಲ್ಲಾಡಳಿತದ ಸಿದ್ಧತೆ ನಡೆಸಿದೆ.

ಪ್ರತಿ ತಾಲ್ಲೂಕಿನಲ್ಲೂ ತಹಶೀಲ್ದಾರ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಜಿಲ್ಲೆಯಲ್ಲಿ 624 ಬೂತ್‌ ತೆರೆಯಲಾಗುತ್ತಿದೆ. ನಗರ ಪ್ರದೇಶಗಳಲ್ಲಿ 96 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 528 ಬೂತ್‌ಗಳು ಕಾರ್ಯ ನಿರ್ವಹಿಸಲಿವೆ.

ಚಾಮರಾಜನಗರ ತಾಲ್ಲೂಕಿನಲ್ಲಿ 194, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 158, ಕೊಳ್ಳೇಗಾಲದಲ್ಲಿ 90, ಹನೂರಿನಲ್ಲಿ 138 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 44 ಬೂತ್‌ಗಳನ್ನು ತೆರೆಯಲಾಗುತ್ತಿದೆ.

124 ಮೇಲ್ವಿಚಾರಕರು, 2,582 ಲಸಿಕಾ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ. 22 ಟ್ರಾನ್ಸಿಟ್ ಬೂತ್‌ಗಳು ಹಾಗೂ ಏಳು ಮೊಬೈಲ್ ಬೂತ್‌ಗಳನ್ನು ಸಹ ತೆರೆಯಲಾಗುತ್ತದೆ.

ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 23ರಂದು ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಗ್ರಾಮಾಂತರ ಪ್ರದೇಶಗಳಲ್ಲಿ ಎರಡನೇ ಮತ್ತು ಮೂರನೇ ದಿನ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಾಗುತ್ತದೆ. ಪಟ್ಟಣ ಪ್ರದೇಶದಲ್ಲಿ ಎರಡನೇ, ಮೂರನೇ ಹಾಗೂ ನಾಲ್ಕನೇ ದಿನವೂ ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಹನಿ ನೀಡಲಾಗುತ್ತದೆ.

ಪಟ್ಟಣ ಪ್ರದೇಶದಲ್ಲಿ 41,593, ಗ್ರಾಮಾಂತರ ಪ್ರದೇಶದಲ್ಲಿ 1,98,079 ಮನೆಗಳಿಗೆ ಕಾರ್ಯಕರ್ತರು ಭೇಟಿ ನೀಡಲಿದ್ದಾರೆ.

ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ; 5 ವರ್ಷದವರೆಗಿನ ಎಲ್ಲ ಮಕ್ಕಳಿಗೂ ತಪ್ಪದೇ ಲಸಿಕೆ ಹಾಕಿಸಬೇಕು. ಎಲ್ಲ ಪೋಷಕರು, ಚುನಾಯಿತ ಪ್ರತಿನಿಧಿಗಳು, ಧಾರ್ಮಿಕ ಮತ್ತು ಸಮುದಾಯದ ಮುಖಂಡರು, ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಘ ಸಂಸ್ಧೆಯ ಪದಾಧಿಕಾರಿಗಳು ಸಹಕಾರ ನೀಡಿ, ಆಯಾ ಪ್ರದೇಶಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮನವಿ ಮಾಡಿದ್ದಾರೆ.

ಅಗತ್ಯ ಸಿದ್ಧತೆಗೆ ಸೂಚನೆ

ಈ ಮಧ್ಯೆ ಪೋಲಿಯೋ ಲಸಿಕೆ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನು ಮಂಗಳವಾರ ನಡೆಸಿದ ಅವರು, ‘ಇದು ರಾಷ್ಟ್ರೀಯ ಕಾರ್ಯಕ್ರಮವಾಗಿರುವುದರಿಂದ ಐದು ವರ್ಷದವರೆಗಿನ ಯಾವುದೇ ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು’ ಎಂದರು.

‘ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಕೋವಿಡ್ ನಿರ್ದೇಶನ, ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿದೆ.ಆಶ್ರಮ ಶಾಲೆಗಳು ಹಾಗೂ ಕಾಡಂಚಿನ ಗ್ರಾಮದ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಆದ್ಯತೆ ನೀಡಬೇಕು. ಅರಣ್ಯದೊಳಗಿನ ಪ್ರದೇಶಗಳಲ್ಲಿ ಲಸಿಕಾ ಸಾಗಣೆ ವಾಹನಗಳ ಸುಗಮ ಸಂಚಾರಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಹಾಗೂ ಹೆಚ್ಚುವರಿ ವಾಹನಗಳಿಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಿರ್ವಹಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ, ವಿಶ್ವ ಆರೋಗ್ಯ ಸಂಸ್ಥೆಯ ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ.ಸುಧೀರ್‌ನಾಯಕ್, ಆರ್‌ಸಿಎಚ್ ಅಧಿಕಾರಿ ಡಾ.ಅಂಕಪ್ಪ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT