ಶುಕ್ರವಾರ, ಮಾರ್ಚ್ 5, 2021
30 °C
ಜಿಲ್ಲೆಯಾದ್ಯಂತ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ

ಸರಳ ಆಚರಣೆ: ಕೊರೊನಾ ವಾರಿಯರ್‌ಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಕೋವಿಡ್ ಕಾರಣದಿಂದಾಗಿ ಜಿಲ್ಲೆಯಾದ್ಯಂತ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಮಂಗಳವಾರ ಸರಳವಾಗಿ ಆಚರಿಸಲಾಯಿತು.

ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ತೆರೆದ ವಾಹನದಲ್ಲಿ ಸಾಗಿ ಗೌರವ ವಂದನೆ ಸ್ವೀಕರಿಸಿದರು.

ಕೋವಿಡ್ ಕಾರಣದಿಂದಾಗಿ ಈ ಬಾರಿ ಶಾಲಾ ಮಕ್ಕಳು ಪಥಸಂಚಲನದಲ್ಲಿ ಭಾಗವಹಿಸಿರಲಿಲ್ಲ. ಪೊಲೀಸ್, ಗೃಹರಕ್ಷಕ ದಳ ಹಾಗೂ ಅರಣ್ಯ ರಕ್ಷಕ ದಳದ ಸಿಬ್ಬಂದಿಯೇ ಪಥಸಂಚಲನ ನಡೆಸಿ ಗೌರವ ವಂದನೆ ಸಲ್ಲಿಸಿದರು.

ಎಸ್. ಸುರೇಶ್ ಕುಮಾರ್ ಮಾತನಾಡಿ, ‘ಬ್ರಿಟಿಷರ ಆಳ್ವಿಕೆಯಿಂದ ಬಿಡುಗಡೆಗೊಂಡ ಸ್ವತಂತ್ರ ಭಾರತಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರು ಉತ್ತಮ ಸಂವಿಧಾನ ರೂಪಿಸಿಕೊಟ್ಟರು’ ಎಂದು ಹೇಳಿದರು.

‘ಚಾಮರಾಜನಗರ ಜಿಲ್ಲೆಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಗಡಿಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಈ ನಡುವೆ ಜಿಲ್ಲೆಯೂ ವಿವಿಧ ಕ್ಷೇತ್ರದಲ್ಲಿ ತನ್ನದೇ ಆದ ಸಾಧನೆ ಮಾಡುವ ಮೂಲಕ ರಾಜ್ಯದ ಗಮನ ಸೆಳೆದಿದೆ. ಕೋವಿಡ್ ಸಂದರ್ಭದಲ್ಲಿ ಹಲವು ತಿಂಗಳು ದಕ್ಷಿಣ ಭಾರತದ ಏಕೈಕ ಕೊರೊನಾ ಮುಕ್ತ ಜಿಲ್ಲೆಯಾಗಿ ದೇಶದ ಗಮನ ಸೆಳೆದಿತ್ತು’ ಎಂದು ತಿಳಿಸಿದರು.

‘ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಜಿಲ್ಲೆಗೆ ನಿಗದಿಪಡಿಸಿದ್ದ 34.86 ಲಕ್ಷ ಮಾನವ ದಿನಗಳಿಗೆ 33.85 ಲಕ್ಷ ಮಾನವ ದಿನಗಳನ್ನು ಸೃಜಿಸಿದೆ. ₹169.36 ಕೋಟಿಗೆ ನಿಗದಿಪಡಿಸಿದ್ದ ಅನುದಾನದಲ್ಲಿ ₹132.42 ಕೋಟಿ ವೆಚ್ಚ ಭರಿಸಿ ಆರ್ಥಿಕ ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲೇ 5 ನೇ ಸ್ಥಾನ ಪಡೆದಿದೆ’ ಎಂದು ಹೇಳಿದರು.

‘ಪುಣಜನೂರು ಹಾಗೂ ಬಿಳಿಗಿರಿರಂಗನಬೆಟ್ಟ ವ್ಯಾಪ್ತಿಯ ಬುಡಕಟ್ಟು ಜನರಿಗೆ ನರೇಗಾ ಯೋಜನೆಯಡಿ ಕಾಫಿ ಬೆಳೆಯಲು ಅವಕಾಶ ಕಲ್ಪಿಸಿ ಈವರೆಗೆ 165 ಕುಟುಂಬಗಳು ಪ್ರಯೋಜನ ಪಡೆದುಕೊಂಡಿವೆ. ಕೋವಿಡ್ ಸಂದರ್ಭದಲ್ಲಿ 34,738 ಕುಟುಂಬಗಳ 72,132 ಕಾರ್ಮಿಕರಿಗೆ ಹೊಸದಾಗಿ ಉದ್ಯೋಗ ಚೀಟಿ ಮತ್ತು 94,561 ಕುಟುಂಬಗಳ 1,64,358 ಜನರಿಗೆ ಉದ್ಯೋಗ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.

‘ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಹನೂರು ಕ್ಷೇತ್ರ ವ್ಯಾಪ್ತಿಯ 291 ಗ್ರಾಮಗಳಿಗೆ ₹427.25 ಕೋಟಿ ಮಂಜುರಾಗಿದೆ. ಇದರಲ್ಲಿ 98 ಗ್ರಾಮಗಳಿಗೆ ₹192 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆದು ಮೊದಲ ಹಂತದಲ್ಲಿ ₹57.47 ಕೋಟಿ ಅನುದಾನ ಬಳಸಲಾಗಿದೆ. ಕೊಳ್ಳೇಗಾಲ 20 ಹಾಗೂ ಯಳಂದೂರಿನ 45 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ₹116 ಕೋಟಿ ಮಂಜುರಾಗಿದೆ. ಇದುವೆರೆಗ ₹48.85 ಕೋಟಿ ವೆಚ್ಚ ಮಾಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ’ ಎಂದರು.

81 ಸಾವಿರ ಸಸಿ ವಿತರಣೆ: ‘ಹಸಿರು ಕರ್ನಾಟಕ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಅನುಕೂಲವಾ ಗುವಂತೆ 25 ಹೆಕ್ಟೇರ್ ಪ್ರದೇಶದಲ್ಲಿ ತಾಲ್ಲೂಕಿಗೊಂದು ಕಿರು ಅರಣ್ಯ ಹಾಗೂ ಊರಿಗೊಂದು ವನ ಸೇರಿದಂತೆ 352.64 ಹೆಕ್ಟೇರ್ ಪ್ರದೇಶದಲ್ಲಿ 29,870 ಸಸಿ ನೆಟ್ಟು ನೆಡು ತೋಪು ಬೆಳೆಸಲಾಗಿದೆ. ಇದನ್ನು ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸುವ ಸಲುವಾಗಿ ರೈತರು ಮತ್ತು ಸಾರ್ವಜನಿಕರಿಗೆ 81.500 ಸಸಿಗಳನ್ನು ವಿತರಿಸಲಾಗಿದೆ’ ಎಂದರು.

ಶಾಸಕ ಸಿ. ಪುಟ್ಟರಂಗಶೆಟ್ಟಿ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ. ರಾಮಚಂದ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಬಿ ಶಾಂತಮೂರ್ತಿ ಕುಲಗಾಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎಂ. ಅಶ್ವಿನಿ, ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಬಿ ನಾರಾಯಣರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್ ಆನಂದ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು