ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಹರಂ, ಗಣೇಶ ಚತುರ್ಥಿ: ಮಾರ್ಗಸೂಚಿ ಪಾಲನೆಗೆ ಸೂಚನೆ

Last Updated 19 ಆಗಸ್ಟ್ 2021, 16:35 IST
ಅಕ್ಷರ ಗಾತ್ರ

ಚಾಮರಾಜನಗರ: ಕೋವಿಡ್‌ ಹರಡುವಿಕೆ ತಡೆಯುವ ಉದ್ದೇಶದಿಂದ ಮೊಹರಂ ಹಾಗೂ ಗಣೇಶ ಚತುರ್ಥಿ ಹಬ್ಬಗಳ ಆಚರಣೆಯ ವೇಳೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದಿವ್ಯಾ ಸಾರಾಥಾಮಸ್‌ ಅವರು ಹೇಳಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಆಲಂಗಳನ್ನು ಅಥವಾ ಪಂಜಾವನ್ನು ಸ್ಥಾಪಿಸುವುದು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ. ಶುಕ್ರವಾರದವರೆಗೆ (ಆ.20) ಎಲ್ಲ ಕಡೆ ಮೊಹರಂ ಪ್ರಾರ್ಥನ ಸಭೆ ಮತ್ತು ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಆಚರಣೆಗಳಲ್ಲಿ ಭಾಗವಹಿಸುವವರು ಸುರಕ್ಷಿತ ಅಂತರ ಕಾಪಾಡಿಕೊಂಡು ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು. ಪಂಜ, ಆಲಂ ಮತ್ತು ತಾಜಿಯಾತ್‌ಗಳನ್ನು ಸಾರ್ವಜನಿಕರು ಮುಟ್ಟದೆ ದೂರದಿಂದ ನೋಡಬೇಕು. ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಸಭೆ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ. ಖಬರಸ್ಥಾನ್‌ಗಳಿಗೆ ಕೇವಲ ದಫನ ಮಾಡಲು ಮಾತ್ರ ಅನುಮತಿ ಇದೆ.

ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ೬೦ ವರ್ಷಕ್ಕಿಂತ ಮೇಲ್ಟಟ್ಟವರು ಹಾಗೂ ೧೦ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು. ಕೋವಿಡ್‌ ಶಿಷ್ಟಾಚಾರದಂತೆ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಬೇಕು. ಒಂದು ವೇಳೆ ಹೆಚ್ಚು ಜನರು ಆಗಮಿಸಿದಲ್ಲಿ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಬಹುದು.

ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ಮನೆಗಳಿಂದ ಮುಸಲ್ಲಾವನ್ನು (ಜಾಯನಮಾಜ್) ಕಡ್ಡಾಯವಾಗಿ ತರಬೇಕು. ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ. ಮಸೀದಿಗಳನ್ನು ಬಿಟ್ಟು ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ ಸಭಾಂಗಣ, ಸಮುದಾಯ ಭವನ, ಶಾದಿಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಿಸುವಂತಿಲ್ಲ. ಮೊಹರಂ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಆಯೋಜಿಸುವಂತಿಲ್ಲ.

ಕೋವಿಡ್ ನಿರ್ವಹಣೆ ಕ್ರಮಗಳನ್ನು ಮತ್ತು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ವ್ಯಕ್ತಿಯ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ‌ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅವರು ತಿಳಿಸಿದ್ದಾರೆ.

ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ

ಗಣೇಶ ಹಬ್ಬವನ್ನು ಆಚರಿಸುವ ಸಂಬಂಧ ಕೂಡ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ಮನೆಗಳಲ್ಲಿ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್, ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಬಾರದು.

ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಮೆರವಣಿಗೆ ಮನೋರಂಜನೆ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಪಾರಂಪರಿಕ ಗೌರಿ ಗಣೇಶ ಮೂರ್ತಿಯನ್ನು ಪೂಜಿಸುವವರು ಮನೆಯಲ್ಲಿಯೇ ವಿಸರ್ಜಿಸಬೇಕು ಅಥವಾ ಮೂರ್ತಿಗಳನ್ನು ಅತಿ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಜಿಲ್ಲಾಡಳಿತ, ಹತ್ತಿರದ ಸ್ಥಳಿಯ ಸಂಸ್ಥೆಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಿರ್ಮಿಸಲಾದ ಹೊಂಡ, ಕಲ್ಯಾಣಿ, ಮೊಬೈಲ್ ಟ್ಯಾಂಕ್ ಅಥವಾ ಕೃತಕ ವಿಸರ್ಜನ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು.

ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಬೇಕು. ದರ್ಶನಕ್ಕಾಗಿ ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕನಿಷ್ಠ 6 ಅಡಿ ಅಂತರವನ್ನು ಪಾಲಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT