ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೇಮರಹಳ್ಳಿ: ಪ್ರತ್ಯೇಕ ವಾರ್ಡ್, ಜನ ಜಾಗೃತಿಗೆ ಒತ್ತು

ಸಂತೇಮರಹಳ್ಳಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸಮುದಾಯ ಆರೋಗ್ಯ ಕೇಂದ್ರದಲ್ಲೂ ಸಿದ್ಧತೆ
Last Updated 8 ಏಪ್ರಿಲ್ 2020, 20:00 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ವೈರಸ್‌ ಸೋಂಕು ಕಾಣಿಸಿಕೊಳ್ಳದಿದ್ದರೂ, ಸರ್ಕಾರದ ಸೂಚನೆಯಂತೆ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಪ್ರತ್ಯೇಕ ವಾರ್ಡ್‌ನ ವ್ಯವಸ್ಥೆ ಮಾಡಲಾಗಿದೆ.

ಇದರ ಜೊತೆಗೆ, ಗ್ರಾಮೀಣ ಜನರಲ್ಲಿ ವೈರಸ್‌ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಸಿಬ್ಬಂದಿ ಶ್ರಮಿಸುತ್ತಿದ್ದಾರೆ.

ತಾಲ್ಲೂಕಿನ ಸಂತೇಮರಹಳ್ಳಿ ಹೋಬಳಿ ಕೇಂದ್ರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಂಕು ಪೀಡಿತರ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಎರಡು ಹಾಸಿಗೆಗಳ ಪ್ರತ್ಯೇಕ ಕೊಠಡಿಯ ಜೊತೆಗೆ 10 ಹಾಸಿಗೆಗಳ ವಿಶೇಷ ವಾರ್ಡ್‌ ಅನ್ನು ಸಜ್ಜುಗೊಳಿಸಲಾಗಿದೆ.

ಚಿಕಿತ್ಸೆ ನೀಡಲಿರುವ ವೈದ್ಯರು, ನರ್ಸ್‌ಗಳಿಗೆ ಬೇಕಾದ ಸಲಕರಣೆಗಳನ್ನು ಲಭ್ಯವಿರುವಂತೆ ನೋಡಿಕೊಳ್ಳಲಾಗಿದೆ. ಕೈಗವುಸು, ಮುಖಗವುಸುಗಳು ಸ್ಯಾನಿಟೈಸರ್‌, ಪಿಪಿಇ ಕಿಟ್‌ಗಳ ವ್ಯವಸ್ಥೆ ಮಾಡಲಾಗಿದೆ.

ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿ ಹೇಳಲಾಗುತ್ತಿದೆ. ರೋಗಿಗಳು ತಪಾಸಣೆಗೆ ಬಂದಾಗ, ಕೋವಿಡ್‌–19ರ ರೋಗ ಲಕ್ಷಣಗಳು ಕಂಡು ಬಂದರೆ ಅಂತಹವರನ್ನು ಚಾಮರಾಜನಗರದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ.

ತರಬೇತಿ, ಜಾಗೃತಿ: ಹೋಬಳಿ ವ್ಯಾಪ್ತಿಯ ಜನರಲ್ಲಿ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಹೆಚ್ಚು ಒತ್ತು ನೀಡಲಾಗುತ್ತಿದೆ.

ಆಸ್ಪತ್ರೆಯಲ್ಲಿ ಹಿರಿಯ, ಕಿರಿಯ ಹಾಗೂ ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಸೋಂಕಿನ ಬಗ್ಗೆ ವಿಶೇಷ ತರಬೇತಿ ನೀಡಲಾಗಿದೆ. ಗ್ರಾಮೀಣ ಭಾಗಗಳಿಗೆ ತೆರಳಿ ಜನ ಸಾಮಾನ್ಯರಿಗೆ ಕೊರೊನಾ ವೈರಸ್ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಜ್ವರ, ತಲೆನೋವು, ಕೆಮ್ಮ, ನೆಗಡಿ ಹಾಗೂ ಉಸಿರಾಟದ ತೊಂದರೆ ಕಂಡು ಬಂದಾಗ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಬರುವ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಹೊರಗಡೆಯಿಂದ ಬಂದಂತಹ ವ್ಯಕ್ತಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ.

ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಒಳಪಟ್ಟ ಎಲ್ಲ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸುವ ಆರೋಗ್ಯ ಹಾಗೂ ಆಶಾ ಕಾರ್ಯಕರ್ತೆಯರಿಗೆ ಪ್ರತಿ ದಿನ ಆಸ್ಪತ್ರೆಗೆ ವರದಿ ನೀಡಬೇಕು ಸೂಚಿಸಲಾಗಿದ್ದು, ಅದರಂತೆ ನಿತ್ಯವೂ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

‘ಇದುವರೆಗೂ ಹೋಬಳಿ ವ್ಯಾಪ್ತಿಯಲ್ಲಿ ಕೊರೊನಾ ಶಂಕಿತ ಪ್ರಕರಣ ಕಂಡು ಬಂದಿಲ್ಲ. ಜನರು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಂಡರೆ, ಸಾಮಾಜಿಕ ಅಂತರ ಕಾಪಾಡಿಕೊಂಡರೆ ಈ ಸೋಂಕನ್ನು ದೂರ ಇಡಬಹುದು. ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ’ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದೇವರಾಜು ‘ಪ್ರಜಾವಾಣಿ’ಗೆ ತಿಳಿಸಿದರು.

ಶೀಘ್ರ ಸ್ಪಂದನೆಗೆ ಕಾರ್ಯಪಡೆ
ವೈದ್ಯಾಧಿಕಾರಿಗಳ ತಂಡವೂ ಗ್ರಾಮಗಳಿಗೆ ತೆರಳಿ ಅಲ್ಲಿನ ಜನರಿಗೆ,ಸಾಮಾಜಿಕ ಅಂತರ ಕಾಪಾಡಿಕೊಂಡು ವೈಯಕ್ತಿಕ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ತಿಳಿ ಹೇಳಿದೆ.

ಸೋಂಕಿತ ಹಾಗೂ ಶಂಕಿತ ವ್ಯಕ್ತಿಗಳು ಕಂಡು ಬಂದಾಗ ಅವರ ಚಿಕಿತ್ಸೆಗಾಗಿ 4 ವೈದ್ಯರ ತಂಡ, 6 ಮಂದಿ ನರ್ಸ್‌ಗಳು ಸೇರಿದಂತೆ 10ಕ್ಕೂ ಹೆಚ್ಚು ವೈದ್ಯ ಸಿಬ್ಬಂದಿ ಸಜ್ಜುಗೊಂಡಿದ್ದಾರೆ. ಜತೆಗೆ ಪ್ರಕರಣದ ಸಂದರ್ಭದಲ್ಲಿ ಶೀಘ್ರವಾಗಿ ಸ್ಪಂದಿಸುವ ಉದ್ದೇಶದಿಂದ ಕಾರ್ಯಪಡೆಯೊಂದನ್ನೂ ರ‌ಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT