ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಒಪಿಡಿ ಆರಂಭಿಸಲು ಎಸ್‌ಡಿಪಿಐ ಆಗ್ರಹ

Last Updated 19 ನವೆಂಬರ್ 2021, 16:16 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗವನ್ನು (ಒಪಿಡಿ) ಆರಂಭಿಸುವಂತೆ ಆಗ್ರಹಿಸಿಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾದ (ಎಸ್‌ಡಿಪಿಐ) ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿದರು.

ಡೀವಿಯೇಷನ್‌ ರಸ್ತೆಯಲ್ಲಿರುವ ಲಾರಿ ನಿಲ್ದಾಣದಲ್ಲಿ ಸೇರಿದ ಪ್ರತಿಭಟನಕಾರರು, ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಡೀವಿಯೇಷನ್‌ ರಸ್ತೆ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನದವರೆಗೆ ಮರವಣಿಗೆಯಲ್ಲಿ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿದೇವಿ ಅವರಿಗೆ ಮನವಿ ಸಲ್ಲಿಸಿದರು.

‘1930ರಲ್ಲಿ ಆರಂಭಗೊಂಡಿದ್ದ ಆಸ್ಪತ್ರೆಯು ಹಂತ ಹಂತವಾಗಿ ಬೆಳೆದು ಉತ್ತಮ ಜಿಲ್ಲಾಸ್ಪತ್ರೆಯಾಗಿ ಪರಿವರ್ತನೆಯಾಗಿತ್ತು. ಆಸ್ಪತ್ರೆಯಲ್ಲಿ ಹೊರ ಮತ್ತು ಒಳ ರೋಗಿಗಳಿಗೆ ಚಿಕಿತ್ಸೆ, ಮಹಿಳಾ ಮತ್ತು ಮಕ್ಕಳ ಚಿಕಿತ್ಸಾ ಘಟಕ, ಆಪರೇಷನ್‌ ಥಿಯೇಟರ್‌ ಕೂಡ ಇತ್ತು. ಇದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗಿತ್ತು. ಅದರಲ್ಲೂ ವಿಶೇಷವಾಗಿ ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿರುವ ಜನರಿಗೆ ಮತ್ತು ಸಮೀಪದ ಹಳ್ಳಿ ಪ್ರದೇಶದ ಜನರಿಗೂ ಚಿಕಿತ್ಸೆ ಸುಲಭವಾಗಿ ಲಭ್ಯವಾಗುತ್ತಿತ್ತು. ಆದರೆ, ಜಿಲ್ಲಾ ಆಸ್ಪತ್ರೆಯನ್ನು ಹೆರಿಗೆ ಮತ್ತು ಮಕ್ಕಳ ವಿಭಾಗಕ್ಕೆ ಮಾತ್ರ ಸೀಮಿತಗೊಳಿಸಿ ಹೊರ ವಲಯದಲ್ಲಿರುವ ಬೋಧನಾ ಆಸ್ಪತ್ರೆಗೆ ಸ್ಥಳಾಂತರಿಸಿರುವುದು ಸರಿಯಲ್ಲ’ ಎಂದು ಕಿಡಿ ಕಾರಿದರು.

‘‘ನಗರದಿಂದ ಎಂಟು ಕಿ.ಮೀ ದೂರದಲ್ಲಿರುವ ವೈದ್ಯಕೀಯ ಕಾಲೇಜಿನ ಬೋಧನಾ ಆಸ್ಪತ್ರೆಗೆ ಜಿಲ್ಲಾಸ್ಪತ್ರೆಯ ಎಲ್ಲ ಸೌಲಭ್ಯಗಳನ್ನು ಸ್ಥಳಾಂತರಿಸಿರುವುದು ಅವೈಜ್ಞಾನಿಕ ನಿರ್ಧಾರ. ಇದು ಜನವಿರೋಧಿ ನೀತಿಗಳ ಮುಂದುವರಿದ ಭಾಗವಾಗಿದೆ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಜಿಲ್ಲಾಸ್ಪತ್ರೆಯಲ್ಲಿ ತಕ್ಷಣವೇ ಹೊರರೋಗಿಗಳ ವಿಭಾಗವನ್ನುಕೂಡಲೇ ಆರಂಭಿಸಬೇಕು’ ಎಂದು ಆಗ್ರಹಿಸಿದರು.

ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಅಬ್ರಾರ್ ಅಹಮದ್, ಉಪಾಧ್ಯಕ್ಷ ಸೈಯದ್ ಆರೀಫ್.ಸಿ.ಎಸ್, ಪ್ರಧಾನ ಕಾರ್ಯದರ್ಶಿ ಮಹೇಶ್, ಖಜಾಂಚಿ ಸೈಯದ್ ಇರ್ಫಾನ್, ನಗರಸಭಾ ಸದಸ್ಯರಾದ ಖಲೀಲ್ ಉಲ್ಲಾ, ಮೊಹಮ್ಮದ್ ಅಮೀಖ್, ದಸಂಸ ಮುಖಂಡರಾದ ಸಿ.ಎಂ.ಶಿವಣ್ಣ, ಕಂದಹಳ್ಳಿ ನಾರಾಯಣ, ಸಂಘಸೇನಾ, ಬಂಗಾರಸ್ವಾಮಿ, ಜಿಲ್ಲಾ ಸಮಿತಿ ಸದಸ್ಯರಾದ ಜಾಕೀರ್ ಅಹಮದ್, ಸಿ.ಕೆ.ನಯಾಜ್ ಉಲ್ಲಾ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT