ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌: ಚಾಮರಾಜನಗರಕ್ಕೆ ಪ್ರತ್ಯೇಕ ವಿ.ವಿ, ಸಂಚಾರಿ ಕ್ಲಿನಿಕ್‌

budget
Last Updated 4 ಮಾರ್ಚ್ 2022, 12:04 IST
ಅಕ್ಷರ ಗಾತ್ರ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್‌ನಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ದೊಡ್ಡ ಕೊಡುಗೆಗಳನ್ನು ನೀಡಿಲ್ಲ.

ಏಳು ಜಿಲ್ಲೆಗಳಲ್ಲಿ ವಿನೂತನ ಮಾದರಿಯ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೊಮ್ಮಾಯಿ ಅವರು ಘೋಷಿಸಿದ್ದು, ಈ ಜಿಲ್ಲೆಗಳ ಪಟ್ಟಿಯಲ್ಲಿ ಚಾಮರಾಜನಗರವೂ ಸೇರಿದೆ.

ಇದು ಸಾಂಪ್ರದಾಯಿಕ ವಿವಿಗಳಿಂದ ಭಿನ್ನವಾಗಿ, ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ ಹೆಚ್ಚುವರಿ ಮಾನವ ಸಂಪನ್ಮೂಲ ಉಪಯೋಗಿಸದೇ ಕಾರ್ಯನಿರ್ವಹಿಸಲಿದೆ. ಈಗಾಗಲೇ ಇರುವ ಸ್ನಾತಕೋತ್ತರ ಕೇಂದ್ರಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳಲಾಗುವುದು. ವಿವಿಗೆ ವಾರ್ಷಿಕ ₹2 ಕೋಟಿ ಆವರ್ತಕ ವೆಚ್ಚವನ್ನು ಬಳಸಿ ಕಾರ್ಯಾಚರಿಸಲಿದೆ ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.

ಹಾಗಾಗಿ, ಪ್ರತ್ಯೇಕ ಪೂರ್ಣ ಪ್ರಮಾಣದ ವಿಶ್ವವಿದ್ಯಾಲಯ ಜಿಲ್ಲೆಯಲ್ಲಿ ಸ್ಥಾಪನೆಯಾಗುವುದಿಲ್ಲ. ಈಗಿರುವ ಮೈಸೂರು ವಿವಿಯ ಡಾ.ಬಿ.ಆರ್‌.ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರಕ್ಕೆ ಹೆಚ್ಚಿನ ತಂತ್ರಜ್ಞಾನ ಅಳವಡಿಸಿ ಹೊಸ ವಿವಿ ಕಾರ್ಯನಿರ್ವಹಿಸಲಿದೆ.

ಮುಖ್ಯಮಂತ್ರಿ ಆರೋಗ್ಯ ವಾಹಿನಿ: ಗ್ರಾಮೀಣ ಪ್ರದೇಶಗಳಲ್ಲಿ ಮನೆ ಬಾಗಿಲಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವ ಸಲುವಾಗಿ ಮುಖ್ಯಮಂತ್ರಿ ಆರೋಗ್ಯ ವಾಹಿನಿ ಎಂಬ ಹೊಸ ಯೋಜನೆಯನ್ನು ಘೋಷಿಸಲಾಗಿದ್ದು, ಬೀದರ್‌, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ₹11 ಕೋಟಿ ವೆಚ್ಚದಲ್ಲಿ ಸಂಚಾರಿ ಕ್ಲಿನಿಕ್‌ಗಳನ್ನು ಸ್ಥಾಪಿಸುವ ಘೋಷಣೆಯನ್ನು ಬಜೆಟ್‌ನಲ್ಲಿ ಮಾಡಲಾಗಿದೆ.

ಜಿಲ್ಲೆಯ ಕಾಡಂಚಿನ ಪ್ರದೇಶಗಳಲ್ಲಿ ಜನರಿಗೆ ಆರೋಗ್ಯ ಸೇವೆ ಲಭ್ಯವಾಗುತ್ತಿಲ್ಲ. ಸಂಚಾರಿ ಕ್ಲಿನಿಕ್‌ಗಳ ಸ್ಥಾಪನೆಯಿಂದ ಅವರಿಗೆ ಅನುಕೂಲವಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಮಧ್ಯಪ್ರದೇಶದ ಮಾದರಿಯಲ್ಲಿ ಚಾಮರಾಜನಗರ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಮೆನ್‌ಸ್ಟ್ರುವಲ್‌ ಕಪ್‌ (ಮುಟ್ಟಿನ ಕಪ್‌) ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.

ಉಳಿದಂತೆ ಜಿಲ್ಲೆಗೆ ನಿರ್ದಿಷ್ಟವಾದ ಯಾವ ಘೋಷಣೆಗಳೂ ಇಲ್ಲ. ಏಳು ತಾಲ್ಲೂಕುಗಳ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆ ಆಸ್ಪತ್ರೆಗಳಿಗಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಹೇಳಲಾಗಿದೆ. ಇದರಲ್ಲಿ ಜಿಲ್ಲೆಯ ತಾಲ್ಲೂಕು ಇದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಯ ಬಗ್ಗೆಯೂ ಮುಖ್ಯಮಂತ್ರಿಯವರು ಪ್ರಸ್ತಾಪಿಸಿದ್ದಾರೆ. ಚಾಮರಾಜನಗರ ತಾಲ್ಲೂಕು ಹಿಂದುಳಿದ ತಾಲ್ಲೂಕುಗಳ ಪಟ್ಟಿಯಲ್ಲಿ ಸೇರಿದೆ. ಪ್ರತ್ಯೇಕ ತಾಲ್ಲೂಕು ಎಂದು ನಾಲ್ಕು ವರ್ಷಗಳ ಹಿಂದೆಯೇ ಘೋಷಣೆಯಾಗಿರುವ ಹನೂರು ತಾಲ್ಲೂಕು ಕೂಡ ಅಭಿವೃದ್ಧಿಯಾಗಬೇಕಾಗಿದೆ. ಹಾಗಾಗಿ, ಈ ಯೋಜನೆಯ ಅಡಿಯಲ್ಲಿ ಜಿಲ್ಲೆಗೆ ಅನುದಾನ ಬರಬಹುದು ಎಂದು ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT