ಬುಧವಾರ, ಮೇ 18, 2022
23 °C
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ, ವರ್ಷದ ಬಳಿಕ ಜಾತ್ರೆಗೆ ಅನುಮತಿ

ಮಾದಪ್ಪನ ಶಿವರಾತ್ರಿ, ಯುಗಾದಿ ಜಾತ್ರೆಗೆ ಹಸಿರು ನಿಶಾನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಕೋವಿಡ್‌ ಹಾವಳಿ ಆರಂಭವಾದ ಬಳಿಕ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಸ್ಥಗಿತಗೊಂಡಿದ್ದ ಜಾತ್ರೆಗಳು ಇನ್ನು ಆರಂಭವಾಗಲಿದೆ.

ವರ್ಷದ ಬಳಿಕ ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರೆಗಳನ್ನು ಎಂದಿನಂತೆ ನಡೆಸಲು ಜಿಲ್ಲಾಡಳಿತ ಹಾಗೂ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ತೀರ್ಮಾನಿಸಿದೆ. ಕಳೆದ ವರ್ಷ ಮಹಾಶಿವರಾತ್ರಿ ಜಾತ್ರೆಯ ನಂತರ ಬೆಟ್ಟದಲ್ಲಿ ಎಲ್ಲ ಜಾತ್ರೆಗಳನ್ನು ರದ್ದುಗೊಳಿಸಲಾಗಿತ್ತು. ಜಾತ್ರಾ ದಿನಗಳಲ್ಲಿ ಭಕ್ತರ ಅನುಪಸ್ಥಿತಿಯಲ್ಲಿ ಸಾಂಪ್ರದಾಯಿಕ ಪೂಜೆ ಪುನಸ್ಕಾರಗಳನ್ನು ಮಾತ್ರ ಮಾಡಲಾಗುತ್ತಿತ್ತು. 

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರ ನೇತೃತ್ವದಲ್ಲಿ ಜಾತ್ರೆಗಳನ್ನು ನಡೆಸುವ ಸಂಬಂಧ ಸೋಮವಾರ ನಗರದಲ್ಲಿ ಅಧಿಕಾರಿಗಳ ಸಭೆ ನಡೆದಿದ್ದು, ಜಾತ್ರೆಗಳಿಗೆ ಅಗತ್ಯ ಸಿದ್ಧತೆ ನಡೆಸುವಂತೆ ಸೂಚನೆ ನೀಡಿದ್ದಾರೆ. 

‘ಮಾರ್ಚ್ 10ರಿಂದ 14ರವರೆಗೆ ಮಹಾಶಿವರಾತ್ರಿ ಜಾತ್ರೆ ಪ್ರಾರಂಭವಾಗಲಿದೆ. 14ರಂದು ಮಹಾರಥೋತ್ಸವ ನಡೆಯಲಿದೆ. ಏಪ್ರಿಲ್ 9ರಿಂದ 13ರವರೆಗೆ ಯುಗಾದಿ ಜಾತ್ರೆ ನಡೆಯಲಿದ್ದು, 13ರಂದು ಯುಗಾದಿ ಮಹಾರಥೋತ್ಸವ ನಡೆಯಲಿದೆ. ಹೀಗಾಗಿ ಈ ಎರಡು ಜಾತ್ರೆಗಳಿಗೆ ಅವಶ್ಯವಾದ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಉಸ್ತುವಾರಿ ಸಚಿವರು ತಿಳಿಸಿದರು.

‘ಮೂಲ ಸೌಕರ್ಯಗಳು ಸಮರ್ಪಕವಾಗಿ ಇರಬೇಕು. ಕ್ಷೇತ್ರದಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಇದಕ್ಕಾಗಿ ಹೆಚ್ಚುವರಿ ಸ್ವಚ್ಚತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಶೌಚಾಲಯ, ಕುಡಿಯುವ ನೀರು ಇನ್ನಿತರ ಅಗತ್ಯ ವ್ಯವಸ್ಥೆಗಳಿಗೆ ಕೊರತೆಯಾಗಬಾರದು’ ಎಂದರು.

‘ಪ್ರತಿ ವರ್ಷದಂತೆ ಅವಶ್ಯವಿರುವ ಎಲ್ಲೆಡೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಬೇಕು. ಜಾತ್ರೆಗಳ ಅವಧಿಯಲ್ಲಿ ವಿದ್ಯುತ್ ಅಡಚಣೆಯಾಗದಂತೆ ಸುಗಮವಾಗಿ ವಿದ್ಯುತ್ ಸರಬರಾಜಿಗೆ ಅನುಕೂಲ ಕಲ್ಪಿಸಬೇಕು’ ಎಂದು ಸಚಿವರು ತಿಳಿಸಿದರು.

ಶಾಸಕ ಆರ್.ನರೇಂದ್ರ ಅವರು ಮಾತನಾಡಿ, ‘ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ವತಿಯಿಂದ ಜಾತ್ರಾ ಸಂಬಂಧ ಎಲ್ಲಾ ಅಗತ್ಯ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಆಯಾ ಇಲಾಖೆಗಳ ಅಧಿಕಾರಿಗಳು ಕೈಗೊಳ್ಳಬೇಕಿರುವ ಕೆಲಸ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ನಿರ್ವಹಿಸಬೇಕು’ ಎಂದು ತಿಳಿಸಿದರು.

ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಜಯವಿಭವಸ್ವಾಮಿ ಅವರು ಜಾತ್ರಾ ಸಿದ್ಧತೆಗೆ ಸಂಬಂಧಿಸಿದಂತೆ ಕೈಗೊಳ್ಳಲಾಗುವ  ಕ್ರಮಗಳ ಬಗ್ಗೆ ಸಭೆಯಲ್ಲಿ ವಿವರಿಸಿದರು. 

ಸಾಲೂರು ಮಠದ ಶ್ರೀಗಳು, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಉಪವಿಭಾಗಾಧಿಕಾರಿ ಡಾ.ಗಿರೀಶ್ ದಿಲೀಪ್ ಬದೋಲೆ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಬಿ. ಹದ್ದಣ್ಣವರ್, ತಹಶೀಲ್ದಾರರಾದ ನಾಗರಾಜು, ಕೆ. ಕುನಾಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಧರಣೇಶ್, ಮಲೆ ಮಹದೇಶ್ವರ ವನ್ಯಧಾಮದ ಉಪ ಸಂರಕ್ಷಣಾಧಿಕಾರಿ ಏಡುಕುಂಡಲು, ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಕೆ. ಸುರೇಶ್ ಇತರೆ ಇಲಾಖೆಗಳ ಅಧಿಕಾರಿಗಳು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು