ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ

ಜಿಲ್ಲೆಯಲ್ಲಿ 45 ಪರೀಕ್ಷಾ ಕೇಂದ್ರಗಳು, 12,403 ವಿದ್ಯಾರ್ಥಿಗಳು
Published 25 ಮಾರ್ಚ್ 2024, 5:23 IST
Last Updated 25 ಮಾರ್ಚ್ 2024, 5:23 IST
ಅಕ್ಷರ ಗಾತ್ರ

ಚಾಮರಾಜನಗರ: 2023–24ನೇ ಸಾಲಿನ ವಾರ್ಷಿಕ ಪರೀಕ್ಷೆ ಸೋಮವಾರದಿಂದ (ಮಾರ್ಚ್‌ 25) ಆರಂಭವಾಗಲಿದೆ. 

ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿದೆ. ಮೊದಲ ದಿನ ಪ್ರಥಮ ಭಾಷೆ (ಕನ್ನಡ) ವಿಷಯದ ಪರೀಕ್ಷೆ ನಡೆಯಲಿದೆ. 

ಜಿಲ್ಲೆಯಲ್ಲಿ 45 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 12,403 ವಿದ್ಯಾರ್ಥಿಗಳು ‍ಪರೀಕ್ಷೆ ಬರೆಯಲಿದ್ದಾರೆ. 

ಚಾಮರಾಜನಗರ ತಾಲ್ಲೂಕಿನಲ್ಲಿ 15 ಪರೀಕ್ಷಾ ಕೇಂದ್ರಗಳು, ಗುಂಡ್ಲುಪೇಟೆ ಮತ್ತು ಹನೂರಿನಲ್ಲಿ ತಲಾ 9, ಕೊಳ್ಳೇಗಾಲದಲ್ಲಿ ಎಂಟು ಹಾಗೂ ಯಳಂದೂರು ತಾಲ್ಲೂಕಿನಲ್ಲಿ 4 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 

ಚಾಮರಾಜನಗರ ತಾಲ್ಲೂಕಿನಲ್ಲಿ 4,019, ಗುಂಡ್ಲುಪೇಟೆಯಲ್ಲಿ 2,722, ಹನೂರು 2,507, ಕೊಳ್ಳೇಗಾಲ 2,180 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 975 ಮಂದಿ ಪರೀಕ್ಷೆ ಬರೆಯಲಿದ್ದಾರೆ. 

ಪರೀಕ್ಷೆಯನ್ನು ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ನಡೆಸುವುದಕ್ಕಾಗಿ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆಯು 45 ಪ‍ರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಕೇಂದ್ರದ ಸುತ್ತ ನಿಷೇಧಾಜ್ಞೆ, ಜೆರಾಕ್ಸ್‌ ಅಂಗಡಿಗಳು ಬಂದ್‌ ಮಾಡುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ. 

ಗಿರಿಜನ ಮಕ್ಕಳಿಗೆ ಶುಭ ಹಾರೈಕೆ: ಈ ಮಧ್ಯೆ, ಎಸ್‌ಎಸ್‌ಎಲ್‌ಸಿಯನ್ನು ಅರ್ಧದಲ್ಲೇ ಮೊಟಕುಗೊಳಿಸಿರುವ ಬುಡಕಟ್ಟು ಸಮುದಾಯದ 30 ಮಕ್ಕಳಿಗೆ ಜಿಲ್ಲಾಡಳಿತ ವಿಶೇಷ ಪುನಶ್ಚೇತನ ತರಬೇತಿ ನೀಡಿದ್ದು, ಅವರೆಲ್ಲರೂ ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರಿನ ರೋಟರಿ ಪಂಚಶೀಲ ಸಂಸ್ಥೆಯ ಸಹಯೋಗದಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ತಾಲ್ಲೂಕಿನ ಹರದನಹಳ್ಳಿಯ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 30 ವಿದ್ಯಾರ್ಥಿಗಳಿಗೆ ವಿಶೇಷ ಶಿಬಿರ ನಡೆಸಲಾಗಿದೆ. 

ಊಟ, ವಸತಿ ಸಹಿತ ಶಿಬಿರದಲ್ಲಿ 15 ಮಂದಿ ಶಿಕ್ಷಕರು ವಿವಿಧ ವಿಷಯಗಳನ್ನು ಬೋಧಿಸಿ ಬುಡಕಟ್ಟು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಿದ್ದಾರೆ. ಜಿಲ್ಲಾಧಿಕಾರಿ ಶಿಲ್ಪಾನಾಗ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್‌ ಪ್ರಕಾಶ್‌ ಮೀನಾ ಹಾಗೂ ಇತರರು ಇತ್ತೀಚೆಗೆ ಹಾಸ್ಟೆಲ್‌ಗೆ ಭೇಟಿ ನೀಡಿ ಮಕ್ಕಳಿಗೆ ಶುಭ ಹಾರೈಸಿದರು. 

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳ, ರೋಟರಿ ಪಂಚಶೀಲ ಸಂಸ್ಥೆಯ ಕಿರಣ್ ರಾಬರ್ಟ್, ಬೆಂಜಮಿನ್, ಇತರರು ಭಾಗವಹಿಸಿದ್ದರು. 

ಈ ಬಗ್ಗೆ ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಅವರು, ‘ರಾಜ್ಯದಲ್ಲೇ ಮೊದಲ ಬಾರಿಗೆ ಈ ಪ್ರಯತ್ನ ಮಾಡಲಾಗಿದೆ. ಮಕ್ಕಳು ಶಿಬಿರಕ್ಕೆ ಚೆನ್ನಾಗಿ ಸ್ಪ‍ಂದಿಸಿದ್ದಾರೆ. ಅಭ್ಯಾಸವನ್ನೂ ಮಾಡಿದ್ದಾರೆ. ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುವ ವಿಶ್ವಾಸವಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭದಿಂದಲೇ ಇಂತಹ ಮಕ್ಕಳನ್ನು ಗುರುತಿಸಿ ಅವರಿಗೆ ತರಬೇತಿ ನೀಡಲಾಗುವುದು’ ಎಂದು ಹೇಳಿದರು. 

'ತರಬೇತಿ ಪಡೆದ ಮಕ್ಕಳನ್ನು ಪರೀಕ್ಷೆ ಕೇಂದ್ರಗಳಿಗೆ ಕರೆತರುವ ವ್ಯವಸ್ಥೆಯನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮಾಡಲಿದೆ’ ಎಂದು ಹೇಳಿದರು. 

ವಿಶೇಷ ಪುನಶ್ಚೇತನ ಶಿಬಿರದಲ್ಲಿ ಭಾಗವಹಿಸಿದ್ದ ಬುಡಕಟ್ಟು ಸಮುದಾಯದ ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸಿಇಒ ಆನಂದ್‌ ಪ್ರಕಾಶ್‌ ಮೀನಾ ಅಧಿಕಾರಿಗಳು ಬೋಧಕರು
ವಿಶೇಷ ಪುನಶ್ಚೇತನ ಶಿಬಿರದಲ್ಲಿ ಭಾಗವಹಿಸಿದ್ದ ಬುಡಕಟ್ಟು ಸಮುದಾಯದ ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸಿಇಒ ಆನಂದ್‌ ಪ್ರಕಾಶ್‌ ಮೀನಾ ಅಧಿಕಾರಿಗಳು ಬೋಧಕರು

ಜಿಲ್ಲೆಯಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಯಲು ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿದೆ. ಮಕ್ಕಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು- ಸಿ.ಟಿ.ಶಿಲ್ಪಾನಾಗ್‌ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT