ಶನಿವಾರ, ಜುಲೈ 24, 2021
27 °C
ಶಿಕ್ಷಣ ಅಧಿಕಾರಿಗಳೊಂದಿಗೆ ನಡೆಸಿದ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಸಲಹೆ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಮೂಡಿಸಿ- ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕಾರ್ಯವನ್ನು ಹಗುರವಾಗಿ ಪರಿಗಣಿಸದೆ, ಪರೀಕ್ಷಾ ಪಾವಿತ್ರ್ಯ ಕಾಪಾಡುವ ಜೊತೆಗೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತ್ಮಸ್ಥೈರ್ಯ ಮೂಡಿಸಬೇಕು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಸೋಮವಾರ ಸಲಹೆ ಮಾಡಿದರು.

ಇದೇ 19 ಮತ್ತು 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಸೂಪರಿಂಟೆಂಡೆಂಟ್‌, ಮಾರ್ಗಾಧಿಕಾರಿಗಳು, ನೋಡೆಲ್ ಅಧಿಕಾರಿಗಳು ಹಾಗೂ ಸಹಭಾಗಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಈ ಬಾರಿಯ ಪರೀಕ್ಷೆ ಬಹು ಆಯ್ಕೆ ಮಾದರಿ ಉತ್ತರದ ಪ್ರಶ್ನೆಗಳನ್ನು ಒಳಗೊಂಡಿದೆ. ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ವಿನೂತನ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಯಾವುದೇ ಗೊಂದಲ ಆತಂಕಕ್ಕೆ ಅವಕಾಶವಾಗದ ಹಾಗೆ ಯಶಸ್ವಿಯಾಗಿ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕಾಗಿದೆ’ ಎಂದರು.

ನಿಯಮ ಪಾಲನೆ ಕಡ್ಡಾಯ: ‘ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಂಬಂಧ ಹೊರಡಿಸಿರುವ ಮಾರ್ಗಸೂಚಿಗಳನ್ನು  ಕಡ್ಡಾಯವಾಗಿ ಪಾಲನೆ ಮಾಡಬೇಕು. ಪರೀಕ್ಷಾ ಕೇಂದ್ರ ಕಟ್ಟಡದ ಪ್ರತಿ ಕೊಠಡಿಗೂ ಪರೀಕ್ಷೆ ಮುನ್ನಾ ಹಾಗೂ ನಂತರ ಸೋಂಕು ನಿವಾರಕ ಸಿಂಪಡಿಸಬೇಕು. ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ಕನಿಷ್ಠ ಎರಡು ವಿಶೇಷ ಕೊಠಡಿಗಳು ಇರಬೇಕು’ ಎಂದರು. 

‘ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್ ಇತರೆ ಅವಶ್ಯ ಸಾಧನಗಳೊಂದಿಗೆ ಆರೋಗ್ಯ ಸಿಬ್ಬಂದಿಯನ್ನು ನೇಮಿಸಬೇಕು. ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪ್ರತಿ ತಾಲ್ಲೂಕಿಗೂ ತುರ್ತು ಚಿಕಿತ್ಸಾ ವಾಹನ ನಿಯೋಜಿಸಿರಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿರುವ ಎಲ್ಲ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕೋವಿಡ್ ಲಸಿಕೆ ಪಡೆದಿರಬೇಕು’ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ.ರವಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಮಲ್ಲಿಕಾರ್ಜುನ್ ಇತರರು ಇದ್ದರು. 

‘ವಾಹನ ವ್ಯವಸ್ಥೆ ಕಲ್ಪಿಸಿ’

‘ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಕೆಎಸ್ಆರ್‌ಟಿಸಿ ಬಸ್‌ಗಳನ್ನು ಅಗತ್ಯಕ್ಕೆ ಅನುಗುಣವಾಗಿ ನಿಗದಿತ ಸಮಯಕ್ಕೆ ವ್ಯವಸ್ಥೆ ಮಾಡಬೇಕು. ಅಗತ್ಯ ಬಿದ್ದಲ್ಲಿ ಇತರೆ ಸರ್ಕಾರಿ ವಾಹನಗಳನ್ನು ಬಳಕೆ ಮಾಡಿಕೊಳ್ಳಬೇಕು. ಯಾವುದೇ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ವಾಹನ ನಿಯೋಜನೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಡಾ.ಎಂ.ಆರ್‌.ರವಿ ಅವರು ನಿರ್ದೇಶನ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು