ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆಗಳಿಗೆ ಜಿಲ್ಲಾಧಿಕಾರಿ ಸೂಚನೆ

ಅಧಿಕಾರಿಗಳೊಂದಿಗೆ ಸಭೆ: ಮುಂಜಾಗ್ರತಾ ಕ್ರಮಗಳ ಪಾಲನೆ ಕಡ್ಡಾಯ
Last Updated 6 ಜೂನ್ 2020, 16:05 IST
ಅಕ್ಷರ ಗಾತ್ರ

ಚಾಮರಾಜನಗರ: ಕೋವಿಡ್‌–19 ಹರಡದಂತೆ ತಡೆಯಲು ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಲು ಅಗತ್ಯ ಸಿದ್ಧತೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷಾ ತಯಾರಿ ಸಂಬಂಧ ನಡೆಸ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಪರೀಕ್ಷೆ ನಡೆಸುವ ಸಂಬಂಧ ನಿಗದಿಪಡಿಸಿರುವ ಪ್ರಮಾಣಿತ ಕಾರ್ಯಾಚರಣಾ ವಿಧಾನದಲ್ಲಿ ಸೂಚಿಸಿರುವ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರೀಕ್ಷಾ ಪ್ರಕ್ರಿಯೆಯಲ್ಲಿ ಗೊಂದಲಕ್ಕೆ ಅವಕಾಶವಾಗದ ಹಾಗೆ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾಗುವ ಅಧಿಕಾರಿ ಸಿಬ್ಬಂದಿಯವರಿಗೆ ಆರೋಗ್ಯ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಖಾತರಿಪಡಿಸಿಕೊಳ್ಳಲು ಅವಶ್ಯವಿರುವ ಎಲ್ಲ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಜಿಲ್ಲೆಯಲ್ಲಿ ಗುರುತಿಸಲಾಗಿರುವ 54 ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆಗೆ ಮೂರು ದಿನಗಳ ಮೊದಲು ಸೋಂಕು ನಿವಾರಕಗಳನ್ನು ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಪ್ರತಿ ಪರೀಕ್ಷೆ ನಂತರ ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿಗಳು ಹಾಗೂ ಪೀಠೋಪಕರಣಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು’ ಎಂದು ತಿಳಿಸಿದರು.

‘ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಒಳಗೆ ಪ್ರವೇಶಿಸುವ ಪ್ರದೇಶದಲ್ಲಿ ಹಾಗೂ ಪರೀಕ್ಷಾ ಕೊಠಡಿಗಳಲ್ಲಿ ಅಂತರ ಕಾಯ್ದುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ಕೊಠಡಿಯಲ್ಲಿ ಗರಿಷ್ಠ 18ರಿಂದ 20 ಮಕ್ಕಳು ಪರೀಕ್ಷೆ ಬರೆಯಲು ಆಸನ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ತಮ್ಮದೇ ಆದ ನೀರಿನ ಬಾಟಲಿಗಳನ್ನು ತರಲು ಅವಕಾಶ ನೀಡಬೇಕು’ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

‘ಪರೀಕ್ಷಾ ಕೇಂದ್ರದ ಮುಖ್ಯ ಪ್ರವೇಶದ್ವಾರದಲ್ಲೇ ಆರೋಗ್ಯ ತಪಾಸಣಾ ಕೌಂಟರ್ ಇರಬೇಕು. ವೈದ್ಯಕೀಯ ಸಿಬ್ಬಂದಿ, ಶಿಕ್ಷಕರು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಇಬ್ಬರು ಸ್ವಯಂಸೇವಕರನ್ನು ನಿಯೋಜಿಸಬೇಕು. ಥರ್ಮಲ್ ಸ್ಕ್ರೀನರ್‌, ಇತರೆ ಚಿಕಿತ್ಸಾ ಸಾಧನಗಳೊಂದಿಗೆ ವೈದ್ಯಕೀಯ ಸಿಬ್ಬಂದಿ ಪರೀಕ್ಷಾ ದಿನಗಳಂದು ಹಾಜರಿರಬೇಕು’ ಎಂದು ಸೂಚಿಸಿದರು.

ಮಾಸ್ಕ್‌ ಕಡ್ಡಾಯ:‘ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸುವ ಪ್ರತಿ ವಿದ್ಯಾರ್ಥಿ ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾಗುವ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸ್ಯಾನಿಟೈಸರ್‌ಗಳನ್ನು ಪರೀಕ್ಷಾ ಕೇಂದ್ರದಲ್ಲಿರಿಸಿ ವಿದ್ಯಾರ್ಥಿ, ಅಧಿಕಾರಿ ಸಿಬ್ಬಂದಿಗೆ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಮಾಸ್ಕ್, ಸ್ಯಾನಿಟೈಸರ್ ವಿತರಣೆಗಾಗಿ ಅವಶ್ಯವಿರುವ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನರ್‌‌ಗಳನ್ನು ಅಗತ್ಯಕ್ಕೆ ಅನುಸಾರವಾಗಿ ಇಟ್ಟುಕೊಂಡಿರಬೇಕು’ ಎಂದರು.

‘ಹಾಸ್ಟೆಲ್, ವಸತಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ಊಟ, ಉಪಹಾರ ಸೇರಿದಂತೆ ಇತರೆ ಅಗತ್ಯ ವ್ಯವಸ್ಥೆಗಳನ್ನು ಒದಗಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ನಾರಾಯಣರಾವ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್‌.ಟಿ.ಜವರೇಗೌಡ, ನೋಡೆಲ್ ಅಧಿಕಾರಿ ಮಲ್ಲಿಕಾರ್ಜುನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಸಿ.ರವಿ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಡಾ. ಸಂಜೀವ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ. ಸುರೇಶ್, ಜಿಲ್ಲೆಯ ಎಲ್ಲಾ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದ್ದರು.

ತರಬೇತಿ ನೀಡಿ

‘ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಲಾಗುತ್ತಿರುವ ಅಧಿಕಾರಿ, ಸಿಬ್ಬಂದಿಗೆ ತರಬೇತಿ, ಸಭೆ ಮೂಲಕ ಮಾರ್ಗದರ್ಶನ ಮಾಡಬೇಕು. ತಹಶೀಲ್ದಾರರು ಸಾರಿಗೆ ಸೌಲಭ್ಯ ಸೇರಿದಂತೆ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಅನುಕೂಲಗಳನ್ನು ಕಲ್ಪಿಸಲಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಹಾಗೆಯೇ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಆಯಾ ತಾಲ್ಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆಗೆ ಸೂಕ್ತ ವ್ಯವಸ್ಥೆ ಮಾಡುವ ಪೂರ್ಣ ಹೊಣೆಗಾರಿಕೆ ನಿರ್ವಹಿಸಬೇಕು’ ಎಂದು ಡಾ.ರವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಿ

ಪರೀಕ್ಷೆಗೆ ಹಾಜರಾಗಲು ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳನ್ನು ಸಂಪರ್ಕಿಸಬೇಕು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬರುವ ಮಾರ್ಗಗಳಲ್ಲಿ ಕೆಎಸ್ಆರ್‌ಟಿಸಿ ಅಥವಾ ಖಾಸಗಿ ಬಸ್‌ಗಳ ಸಂಚಾರ ಇದೆಯೇ ಎಂದು ಖಾತರಿಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಸಾರಿಗೆ ವ್ಯವಸ್ಥೆಯನ್ನು ಕಡ್ಡಾಯವಾಗಿ ಕಲ್ಪಿಸಲೇಬೇಕಾಗುತ್ತದೆ. ಪರೀಕ್ಷೆಯಿಂದ ಯಾವ ವಿದ್ಯಾರ್ಥಿಯು ವಂಚಿತರಾಗದಂತೆ ಅತ್ಯಂತ ನಿಗಾವಹಿಸಿ ಎಲ್ಲ ಸಾರಿಗೆ ಪೂರ್ವಸಿದ್ದತೆಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಹೇಳಿದರು.

ಸಾಧ್ಯವಿರುವ ಎಲ್ಲ ಕಡೆ ಕೆಎಸ್ಆರ್‌ಟಿಸಿ ಬಸ್‌ಗಳು ಪರೀಕ್ಷಾ ದಿನಗಳಂದು ಕಾರ್ಯಾಚರಣೆ ಮಾಡಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದು ಪುನಃ ಅವರ ಊರು, ಮನೆಗಳಿಗೆ ತೆರಳಲು ಟ್ರಿಪ್ಪುಗಳನ್ನು ಏರ್ಪಡಿಸಬೇಕು. ಇನ್ನೂ ಅಗತ್ಯವಿರುವ ಪ್ರದೇಶಗಳಿಂದ ವಿದ್ಯಾರ್ಥಿಗಳನ್ನು ಕರೆತರಲು ಖಾಸಗಿ, ಅನುದಾನಿತ ಶಾಲೆಗಳ ಬಸ್‌, ಇತರೆ ವಾಹನಗಳನ್ನು ಬೇಡಿಕೆಗೆ ಅನುಗುಣವಾಗಿ ಬಳಸಿಕೊಳ್ಳಲು ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT