ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆಗೆ ಮಾರ್ಗದರ್ಶನ

ಗುಂಡ್ಲುಪೇಟೆ: ಮಕ್ಕಳ ಮನೆ ಮನೆಗೆ ಭೇಟಿ ನೀಡುತ್ತಿರುವ ಶಿಕ್ಷಕರು, ಅಧಿಕಾರಿಗಳು
Last Updated 26 ಮೇ 2020, 1:27 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಈ ಬಾರಿ ತಾಲ್ಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಪಣತೊಟ್ಟಿರುವ ಗುಂಡ್ಲುಪೇಟೆಯ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು, ಜೂನ್‌ 25ರಿಂದ ಆರಂಭವಾಗಲಿರುವ ಪರೀಕ್ಷೆಗೆ ಮಕ್ಕಳನ್ನು ಸಜ್ಜುಗೊಳಿಸಲು ಆರಂಭಿಸಿದ್ದಾರೆ.

ವಿದ್ಯಾರ್ಥಿಗಳ ಮನೆ ಮನೆಗೆ ಭೇಟಿ ನೀಡುತ್ತಿರುವ ಶಿಕ್ಷಕರು ಹಾಗೂ ಅಧಿಕಾರಿಗಳು, ಮಕ್ಕಳಿಗೆ ತರಬೇತಿ ನೀಡುವುದರ ಜೊತೆಗೆ ಪರೀಕ್ಷೆಗೆ ತಯಾರಾಗುವಂತೆ ಸೂಚನೆ ನೀಡುತ್ತಿದ್ದಾರೆ.

ಲಾಕ್‌ಡೌನ್‌ ಜಾರಿಯ ನಡುವೆಯೇ ವಿದ್ಯಾರ್ಥಿಗಳ/ಪೋಷಕರ ಮೊಬೈಲ್‌ ಸಂಖ್ಯೆಯನ್ನು ಪಡೆದು ವಾಟ್ಸ್‌ಆ್ಯಪ್‌ ಮೂಲಕ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕಳುಹಿಸಿ ಉತ್ತರ ಬರೆಯುವಂತೆ ಪ್ರೇರೇಪಿಸುತ್ತಿದ್ದಾರೆ. ಅವರು ಬರೆದ ಉತ್ತರಗಳನ್ನು ಪಡೆದು, ಅದರಲ್ಲಿ ತಪ್ಪುಗಳಿದ್ದರೆ ತಿಳಿಸಿ ಹೇಳುತ್ತಿದ್ದಾರೆ.

ಕೆಲವು ಮಕ್ಕಳು/ಪೋಷಕರ ಬಳಿ ಸ್ಮಾರ್ಟ್‌ಫೋನ್‌ ಇಲ್ಲದಿರುವುದರಿಂದ, ಆ ಗ್ರಾಮದಲ್ಲಿರುವ ವಿದ್ಯಾರ್ಥಿಗಳು ಒಟ್ಟು ಸೇರುವಂತೆ ಮಾಡಿ, ಅವರೊಲ್ಲಬ್ಬ ನಾಯಕ/ನಾಯಕಿಯನ್ನು ಆಯ್ಕೆ ಮಾಡಿ ಅವರಿಗೆ ಪ್ರಶ್ನೆಗಳನ್ನು ಕಳುಹಿಸಿ, ಎಲ್ಲರೊಂದಿಗೂ ಹಂಚಿಕೊಳ್ಳುವಂತೆ ತಿಳಿಸಲಾಗುತ್ತಿದೆ.

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಗಮನ ನೀಡಲಾಗುತ್ತಿದೆ. ಶಿಕ್ಷಕರು ಅಂತಹ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಉತ್ತೀರ್ಣವಾಗಲು ಬೇಕಾದ ಕನಿಷ್ಠ ಅಂಕಗಳನ್ನು ಅವರು ಪಡೆಯುವ ನಿಟ್ಟಿನಲ್ಲಿ ತರಬೇತಿ ನೀಡುತ್ತಿದ್ದಾರೆ.

ಕೊನೆಯ ಸ್ಥಾನ: ಗುಂಡ್ಲುಪೇಟೆ ಶೈಕ್ಷಣಿಕ ವಲಯವು ಸತತ ನಾಲ್ಕು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಫಲಿತಾಂಶ ಉತ್ತಮವಾಗಿದ್ದರೂ ಅನುದಾನಿತ ಶಾಲೆ ಸಾಧನೆ ಹೇಳಿಕೊಳ್ಳುವಷ್ಟಿಲ್ಲ. ಇದು ಇಡೀ ತಾಲ್ಲೂಕಿನ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ.

ಈ ವರ್ಷ ತಾಲ್ಲೂಕಿನಲ್ಲಿ 2,503 ಮಕ್ಕಳು ಪರೀಕ್ಷೆ ಬರೆಯುತ್ತಿದ್ದು, ಉತ್ತಮ ಫಲಿತಾಂಶ ಪಡೆಯುವುದಕ್ಕಾಗಿ ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ.

ಅನುದಾನ ಪಡೆಯುತ್ತಿರುವ ಶಾಲೆಗಳ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರಿಗಳೊಂದಿಗೆ ಸಭೆ ನಡೆಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ ಅವರು, ‘ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಬೇಕು. ಕಳಪೆ ಸಾಧನೆ ಮಾಡಿದರೆ ನೋಟಿಸ್‌ ನೀಡಲಾಗುವುದು’ ಎಂಬ ಎಚ್ಚರಿಕೆಯನ್ನೂ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT