ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಜೆಟ್‌: ಚಾಮರಾಜನಗರ ಜಿಲ್ಲೆಗೆ ವಿಶೇಷ ಅನುದಾನಕ್ಕೆ ಆಗ್ರಹ

Published 8 ಫೆಬ್ರುವರಿ 2024, 15:57 IST
Last Updated 8 ಫೆಬ್ರುವರಿ 2024, 15:57 IST
ಅಕ್ಷರ ಗಾತ್ರ

ಚಾಮರಾಜನಗರ: ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ವಿಶೇಷ ಅನುದಾನ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಒತ್ತಾಯಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಘದ ಜಿಲ್ಲಾ ಅಧ್ಯಕ್ಷ ಹೊನ್ನೂರು ಬಸವಣ್ಣ, ‘ಜಿಲ್ಲೆಯು ಆರ್ಥಿಕವಾಗಿ ಹಿಂದುಳಿದಿದ್ದು, ಅಭಿವೃದ್ಧಿ ದೃಷ್ಟಿಯಿಂದ ವಿಶೇಷ ಅನುದಾನ ಘೋಷಣೆ ಮಾಡಿದರೆ ಅನುಕೂಲವಾಗುತ್ತದೆ’ ಎಂದರು. 

‘ಬರ ಪರಿಸ್ಥಿತಿ ಇರುವುದರಿಂದ ಈ ತಿಂಗಳ ಕೊನೆಯಲ್ಲಿಯೇ ಪ್ರತಿ ಗ್ರಾಮಪಂಚಾಯಿತಿಗಳಲ್ಲೂ ಗೋಶಾಲೆಗಳನ್ನು ತೆರೆಯಲು ಜಿಲ್ಲಾಡಳಿತ ಮುಂದಾಗಬೇಕು’ ಎಂದು ಒತ್ತಾಯಿಸಿದರು. 

‘2022–23ನೇ ಸಾಲಿನಲ್ಲಿ ರೈತರಿಗೆ ಬರಬೇಕಾದ ಪರಿಹಾರ ಹಣ ಹಾಗೂ 2023–24ನೇ ಸಾಲಿನಲ್ಲಿ ಬೆಳೆ ವಿಮೆ ಹಣ ಕೊಡಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಹೆಚ್ಚಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಒಂದು ವಾರದೊಳಗೆ ಜಿಲ್ಲಾಡಳಿತ ಸೂಕ್ತ ಕ್ರಮವಹಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಎಚ್ಚರಿಸಿದರು.

‘ಜಿಲ್ಲೆಯಲ್ಲಿ ಸರ್ಕಾರಿ ಗೋಮಾಳ ಉಳಿಸಬೇಕು. ಅಲ್ಲದೆ, ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು. ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ರೈತರಿಗೆ ಪರಿಹಾರ ಬೇಡ, ನಷ್ಟ ತುಂಬಿ ಕೊಡಬೇಕು. ಗ್ರಾಮೀಣ ರಸ್ತೆಗಳು ಹಾಳಾಗಿದ್ದು ಅಭಿವೃದ್ಧಿಪಡಿಸಲು ಕ್ರಮವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆಗೆ ಭೇಟಿ ಕೊಟ್ಟಾಗ ಕಪ್ಪುಬಟ್ಟೆ ಪ್ರದರ್ಶಿಸಲಾಗುವುದು’ ಎಂದು ಬಸವಣ್ಣ ಹೇಳಿದರು. 

ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೆಗ್ಗೋಠಾರ ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಮೇಲಾಜಿಪುರ ಕುಮಾರ್, ಉಪಾಧ್ಯಕ್ಷ ಶಿವಮೂರ್ತಿ, ತಾಲ್ಲೂಕು ಉಪಾಧ್ಯಕ್ಷ ಮೂರ್ತಿ, ಕೊಳ್ಳೇಗಾಲ ಅಧ್ಯಕ್ಷ ವಿಷಕಂಠಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT