ಶುಕ್ರವಾರ, ಜೂನ್ 25, 2021
29 °C
ಮಲೆ ಮಹದೇಶ್ವರ ಬೆಟ್ಟ, ಗೋಪಿನಾಥಂಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ಕೋವಿಡ್ ನಿಯಂತ್ರಣ ಕ್ರಮಗಳ ಪರಿಶೀಲನೆ

ಗಂಟಲು ದ್ರವ ಪರೀಕ್ಷೆ ಸಂಖ್ಯೆ ಹೆಚ್ಚಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗಂಟಲು ದ್ರವ ಪರೀಕ್ಷೆ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು ಎಂದು  ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್‍ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಹಾಗೂ ಗೋಪಿನಾಥಂಗೆ ಶುಕ್ರವಾರ ಭೇಟಿ ನೀಡಿ ಆ ಭಾಗದ ಸುತ್ತಮುತ್ತಲ ಪ್ರದೇಶಗಳಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸುವ ವೇಳೆ ಈ ಸೂಚನೆ ನೀಡಿದರು.

ಗಂಟಲು ದ್ರವ ಪರೀಕ್ಷೆಯನ್ನು ಹೆಚ್ಚಿಸುವುದರಿಂದ ಕೊರೊನಾ ಸೋಂಕು ಪತ್ತೆಯಾಗಿ ಮತ್ತಷ್ಟು ಹರಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಲಿದೆ. ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಗ್ರಾಮಗಳ ಜನರಿಗೆ ಕೋವಿಡ್ ಮಾರ್ಗಸೂಚಿಗಳ ಕುರಿತು ಅರಿವು ಮೂಡಿಸಬೇಕು. ಸೋಂಕು ಹರಡದಂತೆ ವಹಿಸಬೇಕಿರುವ ಮುನ್ನಚ್ಚರಿಕೆಯ ಕ್ರಮಗಳನ್ನು ಪಾಲಿಸಲು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಕೊರೊನಾ ಮೊದಲನೆ ಅಲೆಯಲ್ಲಿ ಗ್ರಾಮೀಣ ಪ್ರದೇಶಗಳಿಗಿಂತ ನಗರ ಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿತ್ತು. ಆದರೆ, ಎರಡನೇ ಅಲೆಯ ಪ್ರಸ್ತುತ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೋವಿಡ್ ಸಂಬಂಧ ನಿಗಾ ವಹಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಕಾರ್ಯಪಡೆ ಸಮಿತಿಯನ್ನು ರಚಿಸಲಾಗಿದೆ. ಸೋಂಕಿತರನ್ನು ಹೋಮ್ ಐಸೋಲೇಷನ್‍ಗೆ ಕಳುಹಿಸುವ ಬದಲು ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲಿಸಬೇಕು ಎಂದು ತಿಳಿಸಿದರು.

ಸಭೆಯ ಬಳಿಕ ಗೋಪಿನಾಥಂ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅವರಣದಲ್ಲಿ ಮುಖಂಡರೊಂದಿಗೆ ಸುರೇಶ್‌ಕುಮಾರ್ ಮಾತನಾಡಿದರು.

ಇದಕ್ಕೂ ಮುನ್ನ ಅವರು ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಮಲೆ ಮಹದೇಶ್ವರ ಬೆಟ್ಟ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಕೋವಿಡ್ ಪರಿಸ್ಥಿತಿ ಸಂಬಂಧ ಪರಾಮರ್ಶೆ ನಡೆಸಿದರು.

ಸಾಲೂರು ಮಠದ ಸ್ವಾಮೀಜಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಜಿಲ್ಲಾಧಿಕಾರಿ ಎಂ.ಆರ್. ರವಿ, ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ಡಿವೈಎಸ್ಪಿ ನಾಗರಾಜು, ತಹಶೀಲ್ದಾರ್ ನಾಗರಾಜು, ತಾಲ್ಲೂಕು ಆರೋಗ್ಯ ಅಧಿಕಾರಿ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್, ಇನ್‌ಸ್ಪೆಕ್ಟರ್ ರಮೇಶ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.