ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಲಕ್ಷಕ್ಕೂ ಹೆಚ್ಚು ಮತಗಳಿಂದ ಬೋಸ್‌ ಗೆಲುವು’

ಇಂದು ನಾಮಪತ್ರ ಸಲ್ಲಿಕೆ, ಸಿಎಂ ಸಿದ್ದರಾಮಯ್ಯ, ಸಚಿವರು ಭಾಗಿ
Published 3 ಏಪ್ರಿಲ್ 2024, 3:10 IST
Last Updated 3 ಏಪ್ರಿಲ್ 2024, 3:10 IST
ಅಕ್ಷರ ಗಾತ್ರ

ಚಾಮರಾಜನಗರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಮೀಸಲು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಸುನೀಲ್‌ ಬೋಸ್‌ ಅವರು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲಲಿದ್ದಾರೆ ಎಂದು ಕಾಂಗ್ರೆಸ್‌ ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು. 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷದ ಅಭ್ಯರ್ಥಿಯಾಗಿರುವ ಸುನೀಲ್ ಬೋಸ್ ಅವರು ಬುಧವಾರ (ಏ.3) ನಾಮಪತ್ರ ಸಲ್ಲಿಸಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಚ್‌.ಸಿ.ಮಹದೇವಪ್ಪ, ಕೆ.ವೆಂಕಟೇಶ್‌ ಜಾರಕಿಹೊಳಿ, ಜಿ.ಪರಮೇಶ್ವರ, ಶಾಸಕರು  ಸಚಿವರು ಭಾಗವಹಿಸಲಿದ್ದಾರೆ’ ಎಂದರು. 

‘ಬೆಳಿಗ್ಗೆ 11 ಗಂಟೆಗೆ ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಭುವನೇಶ್ವರಿ ವೃತ್ತದಿಂದ ತೆರೆದ ವಾಹನದಲ್ಲಿ ಜಿಲ್ಲಾಡಳಿತ ಭವನಕ್ಕೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು. ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು ಭಾಗವಹಿಸಲಿದ್ದಾರೆ’ ಎಂದರು. 

ನಾಮಪತ್ರ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಮತ್ತು ಸಚಿವರು ತೆರೆದ ವಾಹನದಲ್ಲಿ ನಿಂತುಕೊಂಡೇ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  ಕ್ಷೇತ್ರ ವ್ಯಾಪ್ತಿಯಿಂದ 10 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕರ್ತರು ಭೇಟಿ ನೀಡುವ ನಿರೀಕ್ಷೆ ಇದೆ. ಈಗಾಗಲೇ ಒಂದು ಸುತ್ತಿನ ಕಾರ್ಯಕರ್ತರ ಸಭೆ ನಡೆಸಿದ್ದೇವೆ’ ಎಂದರು. 

‘ಸುನೀಲ್‌ ಬೋಸ್‌ ಅವರು 2008ರಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಅವರು ನಿಷ್ಠೆಯಿಂದ ಮಾಡಿದ ಪಕ್ಷದ ಕೆಲಸಗಳನ್ನು ಗಮನಿಸಿ ವರಿಷ್ಠರು ಟಿಕೆಟ್‌ ನೀಡಿದ್ದಾರೆ. ಅವರ ಗೆಲುವು ಖಚಿತ’ ಎಂದರು. 

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದ್ದು, 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 20 ಸ್ಥಾನಗಳಲ್ಲಿ ಪಕ್ಷ ಗೆಲ್ಲಲಿದೆ. ಚಾಮರಾಜನಗರ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಶಾಸಕರು ಇದ್ದಾರೆ. ಹಾಗಾಗಿ, ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ನಾವು ಗೆಲ್ಲುತ್ತೇವೆ’ ಎಂದು ಮರಿಸ್ವಾಮಿ ಹೇಳಿದರು. 

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ, ಆರ್.ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರು, ಮಹಮ್ಮದ್ ಅಸ್ಗರ್, ಪತ್ರಿಕಾ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT