ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ ಸರ್ಕಾರದಿಂದ ಅಭಿವೃದ್ಧಿ ಶೂನ್ಯ: ನಿರಂಜನ್‌ಕುಮಾರ್‌

Published 21 ಮೇ 2024, 6:33 IST
Last Updated 21 ಮೇ 2024, 6:33 IST
ಅಕ್ಷರ ಗಾತ್ರ

ಚಾಮರಾಜನಗರ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಕಾಂಗ್ರೆಸ್ ಸರ್ಕಾರ ಮಾಡಿರುವ ಅಭಿವೃದ್ಧಿ ಶೂನ್ಯ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಸೋಮವಾರ ಟೀಕಿಸಿದರು. 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಮಾಡುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ಹೇಳಿದರು. 

11 ತಿಂಗಳಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರ ಮೇಲೆ ದೌರ್ಜನ್ಯ, ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದೆ. ಗೃಹ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಗೃಹ ಸಚಿವ ಜಿ.ಪರಮೇಶ್ವರ ವಿಫಲರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಕೈಯಲ್ಲಿ ರಾಜ್ಯ ಸುರಕ್ಷಿತವಾಗಿಲ್ಲ. ಕಾನೂನು ಸುವ್ಯವಸ್ಥೆ ನಿಭಾಯಿಸದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಪಕ್ಷವು ರಾಜ್ಯದಾದ್ಯಂತ ಹೋರಾಟ ಮಾಡಲಿದೆ’ ಎಂದರು. 

‘ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ. ರೈತರಿಗೆ ಕೃಷಿ ಬ್ಯಾಂಕ್‌ಗಳು ಸಾಲ ನೀಡದ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕೊಡುವಲ್ಲಿ ವಿಳಂಬ ಮಾಡುತ್ತಿದೆ. ಯುವನಿಧಿ ಯೋಜನೆ ಯುವಕರಿಗೆ ಸರಿಯಾಗಿ ತಲುಪಿಲ್ಲ. ಇದರಿಂದಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯುವಕರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.

‘ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವಲ್ಲಿ ಸರ್ಕಾರ ವಿಫಲವಾಗಿದೆ. ಗ್ಯಾರಂಟಿಗಳಿಂದಾಗಿ ಪ್ರತಿ ವ್ಯಕ್ತಿಯ ಮೇಲೆ ಸಾಲದ ಹೊರೆ ಹೆಚ್ಚಾಗಿದೆ. ನೋಂದಣಿ ಶುಲ್ಕ ಮತ್ತು ಆರ್‌ಟಿಸಿ ಶುಲ್ಕ ಹೆಚ್ಚಳವಾಗಿದೆ’ ಎಂದರು.

ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿಸಿ ಸದಸ್ಯ ನೂರೊಂದುಶೆಟ್ಟಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವೃಷಬೇಂದ್ರಪ್ಪ, ವೇಣುಗೋಪಾಲ್, ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್, ಮಾಧ್ಯಮ ಸಂಚಾಲಕ ವೀರೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT