ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಿಂದ ಮಾಹಿತಿ ಪಡೆದು ಕ್ರಮದ ಭರವಸೆ

ವಿದ್ಯಾಗಮ ಕಾರ್ಯಕ್ರಮದಲ್ಲಿ ಅಸ್ಪೃಶ್ಯತೆ ಆಚರಣೆ; ಮುಖಂಡರೊಂದಿಗೆ ಅಧಿಕಾರಿಗಳ ಸಭೆ
Last Updated 5 ಅಕ್ಟೋಬರ್ 2020, 15:30 IST
ಅಕ್ಷರ ಗಾತ್ರ

ಗುಂಡ್ಲುಪೇಟೆ:ತಾಲ್ಲೂಕಿನ ಚಿಕ್ಕಾಟಿ ಗ್ರಾಮದಲ್ಲಿ ವಿದ್ಯಾಗಮ ಕಾರ್ಯಕ್ರಮದಲ್ಲಿ ಅಸ್ಪೃಶ್ಯತೆ ಆಚರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸೋಮವಾರ ತಹಶೀಲ್ದಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಗ್ರಾಮದ ಪರಿಶಿಷ್ಟ ಜಾತಿಯ ಮುಖಂಡರ ಸಭೆ ನಡೆಸಿದರು.

ಸ್ಥಳ ಪರಿಶೀಲನೆ ನಡೆಸಿ ಮಕ್ಕಳಿಂದ ಮಾಹಿತಿ ಪಡೆದು ನಂತರ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್‌ ನಂಜುಂಡಯ್ಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ ಅವರು ಸಭೆಗೆ ಭರವಸೆ ನೀಡಿದರು.

ಸಭೆಯಲ್ಲಿ ಮಾತನಾಡಿದ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಉಮೇಶ್‌ ಅವರು, ‘ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮಾತನಾಡಿಸಿದ್ದೇನೆ. ಇದೊಂದು ಹೀನ ಕೃತ್ಯ. ಚಿಕ್ಕಾಟಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟು ಶಿಕ್ಷಕರಿದ್ದಾರೆ. ಮುಸ್ಲಿಂ ಸಮುದಾಯದ ಶಿಕ್ಷಕಿಯೊಬ್ಬರನ್ನು ಬಿಟ್ಟು ಉಳಿದವರು ಯಾರೂ ವಿದ್ಯಾಗಮ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮಕ್ಕಳಿಗೆ ಪಾಠ ಮಾಡಿಲ್ಲ. ಇದರ ಬಗ್ಗೆ ಮುಖ್ಯ ಶಿಕ್ಷಕರು ಗಮನ ನೀಡಿಲ್ಲ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವರದಿ ನೀಡಿಲ್ಲ’ ಎಂದು ದೂರಿದರು.

‘ಪರಿಶಿಷ್ಟ ಜಾತಿಗೆ ಸೇರಿದ ಮಕ್ಕಳನ್ನು ಪ್ರತ್ಯೇಕವಾಗಿಟ್ಟು ಪಾಠ ಮಾಡುವಂತೆ ಸರ್ಕಾರದ ಸುತ್ತೋಲೆ ಏನಾದರೂ ಇದೆಯಾ? ಈ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದೇ ಹೋದರೆ ಇದು ರಾಜ್ಯದ ಸಮಸ್ಯೆಯಾಗಿ ಬದಲಾಗುತ್ತದೆ. ಶಿಕ್ಷಣ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ. ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದರು.

ತಹಶೀಲ್ದಾರ್ ನಂಜುಂಡಯ್ಯ ಅವರು ಮಾತನಾಡಿ, ‘ಮಂಗಳವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ, ವಾಸ್ತವ ವರದಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಬೇಗೂರು ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ರಾಧ, ಪರಿಶಿಷ್ಟ ಜಾತಿ ಮುಖಂಡರಾದ ನಾಗೇಂದ್ರ,ಮುತ್ತು, ಪಾಪಣ್ಣ, ನಾಗರಾಜು, ಸುರೇಶ್ ಮೌರ್ಯ ಇದ್ದರು.

ವರದಿ ಕೇಳಿದ ಜಿಲ್ಲಾಧಿಕಾರಿ

ಚಾಮರಾಜನಗರ: ವಿದ್ಯಾಗಮ ಕಾರ್ಯಕ್ರಮದಲ್ಲಿ ಅಸ್ಪೃಶ್ಯತೆ ಆಚರಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಸೂಚಿಸಿದ್ದಾರೆ.

ಶಿಕ್ಷಕರಿಗೆ ನೋಟಿಸ್‌: ‘ಘಟನೆಗೆ ಸಂಬಂಧಿಸಿಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ ಅವರು ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದು, ಚಿಕ್ಕಾಟಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. ನೋಟಿಸ್‌ಗೆ ಉತ್ತರ ನೀಡಿದ ನಂತರ ನಿಯಮಾನುಸಾರ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ. ಈ ಘಟನೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಶಿಕ್ಷಕರು ತಪ್ಪಿತಸ್ಥರು ಎಂದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು’ ಎಂದು ಡಿಡಿಪಿಐ ಜವರೇಗೌಡ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT