ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ಉಪ್ಪಾರ ಜನಾಂಗಕ್ಕೆ ₹100 ಕೋಟಿ ಅನುದಾನಕ್ಕೆ ಒತ್ತಾಯ

Published 28 ಮೇ 2024, 14:31 IST
Last Updated 28 ಮೇ 2024, 14:31 IST
ಅಕ್ಷರ ಗಾತ್ರ

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಪ್ಪಾರ ಸಮುದಾಯದ ಅಭಿವೃದ್ಧಿಗಾಗಿ ₹100 ಅನುದಾನ ನೀಡಬೇಕು ಮತ್ತು ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ತಾಲ್ಲೂಕು ಉಪ್ಪಾರ ಸಂಘ ಆಗ್ರಹಿಸಿದೆ. 

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪಿ.ಲಿಂಗರಾಜು, ‘ರಾಜ್ಯದಲ್ಲಿ 30 ಲಕ್ಷದಷ್ಟು ಜನರು ಇದ್ದೇವೆ. ಸಮುದಾಯವು ಪ್ರವರ್ಗ-1ರಲ್ಲಿ ಬರುತ್ತಿದ್ದು, ರಾಜಕೀಯ , ಶೈಕ್ಷಣಿಕ , ಆರ್ಥಿಕವಾಗಿ ತೀರ ಹಿಂದುಳಿದ್ದೇವೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಉಪ್ಪಾರರು ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದೇವೆ’ ಎಂದರು. 

‘ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಉಪ್ಪಾರ ಸಮುದಾಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ರಾಜಕೀಯ ಪ್ರಾಧಾನ್ಯ, ಉಪ್ಪಾರ ಅಭಿವೃದ್ಧಿ ನಿಗಮ ಸೇರಿದಂತೆ ಸಮಾಜವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ವಿವಿಧ ಕ್ರಮಕೈಗೊಂಡಿದೆ. ಸಮುದಾಯವನ್ನು ಎಸ್‌ಟಿ ವ್ಯಾಪ್ತಿಗೆ ಸೇರಿಸಬೇಕು ಎಂದು 15 ವರ್ಷಗಳಿಂದ ಒತ್ತಾಯಿಸುತ್ತಾ ಬಂದಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದರು.

‘ಚಾಮರಾಜನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ್ಪಾರ ಮತದಾರರು ಸುಮಾರು 1.50 ಲಕ್ಷದಷ್ಟಿದ್ದು, ತೀರಾ ಬಡತನ, ನಿರುದ್ಯೋಗದಿಂದ ಜೀವನ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಉಪ್ಪಾರರು ವಾಸಿಸುವ ಗ್ರಾಮ, ಪಟ್ಟಣಗಳಿಗೆ ಸರ್ಕಾರ ಮೂಲ ಸೌಕರ್ಯಕ್ಕೆ ₹100 ಕೋಟಿ ವಿಶೇಷ ಅನುದಾನ ಮಂಜೂರು ಮಾಡಬೇಕು’ ಎಂದು ಪಿ.ಲಿಂಗರಾಜು ಒತ್ತಾಯಿಸಿದರು.

ರಾಜ್ಯದಲ್ಲಿ ಉಪ್ಪಾರ ನಿಗಮಕ್ಕೆ ತಕ್ಷಣ ಅಧ್ಯಕ್ಷರ ನೇಮಕ ಮಾಡಬೇಕು. ₹100 ಕೋಟಿ ಅನುದಾನ ಮೀಸಲಿಟ್ಟು, ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ನೀಡಬೇಕು.   ಸ್ಥಳೀಯ ಸಂಸ್ಥೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಉಪ್ಪಾರರಿಗೆ ಹೆಚ್ಚಿನ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು. 

ಸಂಘದ ಉಪಾಧ್ಯಕ್ಷ ಆರ್.ಮಹದೇವಶೆಟ್ಟಿ, ಪ್ರಧಾನ ಕಾರ್ಯದರ್ಶಿ ಎನ್.ಮಹದೇವಸ್ವಾಮಿ, ನಿರ್ದೇಶಕ ಕೆಂಪನಪುರ ಮಹದೇವಶೆಟ್ಟಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT