ಮಂಗಳವಾರ, ಆಗಸ್ಟ್ 16, 2022
29 °C
ಪಕ್ಷ ಸಂಘನೆಗೆ ಕಾರ್ಯಕರ್ತರು, ಮುಖಂಡರಿಗೆ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಸಲಹೆ

ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲೇಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೀವು ಸುಮ್ಮನಿದ್ದರೂ, ನಾನು ಸುಮ್ಮನಿರುವುದಿಲ್ಲ. ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲೇ ಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. 

ನಗರದ ನಂದಿ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಮೈಸೂರು ಭಾಗದಲ್ಲಿ ಅದರಲ್ಲೂ ಚಾಮರಾಜನಗರ ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಪ್ರಬಲವಾಗಿ ಸಂಘಟಿಸಬೇಕು. ದಲಿತ, ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದಕ್ಕಾಗಿ ಪಕ್ಷದ ಮುಖಂಡರು, ಕಾರ್ಯಕರ್ತರು ದಲಿತ ಕೇರಿಗಳಿಗೆ ಹೋಗಬೇಕು, ಹಿಂದುಳಿದ ವರ್ಗಗಳ ಕೇರಿಗೆ ಹೋಗಬೇಕು. ಬಡವರ ಬಳಿಗೆ ತೆರಳಬೇಕು’ ಎಂದು ಹೇಳಿದರು.   

‘ಜಿಲ್ಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಒಮ್ಮತದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚು ಗೆಲ್ಲಿಸುವ ಮೂಲಕ ಬಿಜೆಪಿ ಶಕ್ತಿ ತುಂಬಬೇಕು’ ಎಂದರು. 

‘ಕಾರ್ಯಕರ್ತರು ಪಕ್ಷಕ್ಕಾಗಿ ತನು–ಮನ–ಧನದಿಂದ ದುಡಿಯುತ್ತಾರೆ. ಪಕ್ಷದ ಮುಖಂಡರು ಕಾರ್ಯಕರ್ತರ ಹೆಗಲಿಗೆ ಹೆಗಲು ಕೊಟ್ಟು ದುಡಿಯಬೇಕು. ಅವರ ಕಷ್ಟಗಳಿಗೆ ಸ್ಪಂದಿಸಬೇಕು. ಹಿಂದುಳಿದ ವರ್ಗಗಳ ಮೋರ್ಚಾ, ಪರಿಶಿಷ್ಟ ಜಾತಿ ಮೋರ್ಚಾ, ಪರಿಶಿಷ್ಟ ಪಂಗಡ ಮೋರ್ಚಾ, ಮಹಿಳಾ ಮೋರ್ಚಾ ಸೇರಿದಂತೆ ಪಕ್ಷದ ಎಲ್ಲ ಸಂಘಟನೆಗಳು ಒಟ್ಟಾಗಿ ಕೆಲಸ ಮಾಡಬೇಕು’ ಎಂದು ಹೇಳಿದರು. 

‘ಉಪಾಧ್ಯಕ್ಷನಾಗಿದ್ದರೂ ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ, ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷದ ಸಂಘಟಿಸುವ ಕಾರ್ಯದಲ್ಲಿ ನಿರತನಾಗುತ್ತೇನೆ’ ಎಂದರು.  

ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಜಿಲ್ಲಾ  ಘಟಕದ ಅಧ್ಯಕ್ಷ ಆರ್.ಸುಂದರ್, ಶಾಸಕ ಸಿ.ಎಸ್.ನಿರಂಜನ ‌ಕುಮಾರ್, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಮಾತನಾಡಿದರು.

ನಿರಂಜನ ಕುಮಾರ್‌ ಹಾಗೂ ಜಿ.ಎನ್‌.ನಂಜುಂಡಸ್ವಾಮಿ ಅವರು, ‘ವಿಜಯೇಂದ್ರ ಅವರು ರಾಜ್ಯದ ಮುಖ್ಯಮಂತ್ರಿ ಆಗಲಿ’ ಎಂದೂ ಆಶಿಸಿದರು. 

ಸಭೆಯಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎಂ.ರಾಮಚಂದ್ರ, ರಾಜ್ಯ ಕಾರ್ಯದರ್ಶಿ ಕೆಲ್ಲಂಬಳ್ಳಿ ಸೋಮನಾಯಕ, ರೈತ ಮುಖಂಡ ಮಲ್ಲೇಶ್, ಚುಡಾ ಅಧ್ಯಕ್ಷ ಪಿ.ಬಿ.ಶಾಂತಮೂರ್ತಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರವೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಾರಾಯಣ ಪ್ರಸಾದ್, ಮಂಗಲ ಶಿವಕುಮಾರ್, ಗ್ರಾಮಾಂತರ ಮಂಡಲ ಅಧ್ಯಕ್ಷ ಜಿ.ಪ್ರಶಾಂತ್, ಪ್ರಧಾನ ಕಾರ್ಯದರ್ಶಿಗಳಾದ ಅರಕಲವಾಡಿ ಮಹೇಶ್, ಶೇಷಪ್ಪ ಪಾಸ್ವಾನ್, ನಗರ ಮಂಡಲ ಅಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್, ಶಿವು, ಮುಖಂಡರಾದ ನಿಜಗುಣರಾಜು, ಡಾ.ಎ.ಆರ್.ಬಾಬು, ಜಿಲ್ಲಾ ಪಂಚಾಯಿತಿ ಸದಸ್ಯರಾದ ಎ.ಆರ್.ಬಾಲರಾಜ್, ಸಿ.ಎನ್‌.ಬಾಲರಾಜು ಮತ್ತಿತರರು ಇದ್ದರು. 

ಇದಕ್ಕೂ ಮೊದಲು, ವಿಜಯೇಂದ್ರ ಅವರು, ಕೆರೆಹಳ್ಳಿ ಕೆರೆಗೆ ಭೇಟಿ ನೀಡಿ ನೀರು ತುಂಬಿರುವುದನ್ನು ಪರಿಶೀಲಿಸಿದರು. ನಂತರ ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಸಿ.ಗುರುಸ್ವಾಮಿ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. 

‘ಕಾರ್ಯಕರ್ತರು ತಲೆತಗ್ಗಿಸುವ ಕೆಲಸ ಮಾಡಲಾರೆ’

‘ವಿರೋಧ ಪಕ್ಷದ ಮುಖಂಡರಿಗೆ ಈಗ ನನ್ನ ಮೇಲೆ ಪ್ರೀತಿ ಬಂದಿದೆ. ಎಲ್ಲದಕ್ಕೂ ವಿಜಯೇಂದ್ರ, ವಿಜಯೇಂದ್ರ ಎಂದು ಹೇಳುತ್ತಿದ್ದಾರೆ. ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಪಕ್ಷದ ಕಾರ್ಯಕರ್ತನಾಗಿ ನನ್ನ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಕಾರ್ಯಕರ್ತರು ತಲೆ ತಗ್ಗಿಸುವ ಕೆಲಸವನ್ನು ಯಾವತ್ತೂ ಮಾಡಲಾರೆ’ ಎಂದು ಹೇಳಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು