ಭಾನುವಾರ, ಅಕ್ಟೋಬರ್ 25, 2020
22 °C
ಕಲೆ, ವಾಸ್ತುಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರ : ಪಿ.ಬಿ.ಶಾಂತಮೂರ್ತಿ

ವಿಶ್ವಕರ್ಮ ಜಯಂತಿ ಸರಳ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ (ಚುಡಾ) ಪಿ.ಬಿ.ಶಾಂತಮೂರ್ತಿ ಅವರು ತಿಳಿಸಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸರಳ ಹಾಗೂ ಸಾಂಕೇತಿಕವಾಗಿ ನಡೆದ ವಿಶ್ವಕರ್ಮರ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

‘ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ’ ಎಂದರು.

‘ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಿದಲ್ಲಿ ಸಮುದಾಯವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಶಾಂತಮೂರ್ತಿ ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಅವರು ಮಾತನಾಡಿ, ‘ಯಾವುದೇ ಕಾಲಗಟ್ಟದ ಇತಿಹಾಸವನ್ನು ಆ ಪ್ರದೇಶದ ವಾಸ್ತುಶಿಲ್ಪ ಕಲೆಗಳನ್ನು ಅಭ್ಯಾಸ ಮಾಡುವುದರ ಮೂಲಕ ಅರಿಯಬಹುದು. ವಿಶ್ವಕರ್ಮರ ಚಿತ್ರಪಟಗಳ ಕೆತ್ತನೆ ಹೆಚ್ಚು ಶ್ರೀಮಂತಿಕೆಯಿಂದ ಕೂಡಿರುವುದು ಕಂಡುಬರುತ್ತದೆ’ ಎಂದರು.

‘ವಿಶ್ವಕರ್ಮರ ಕೆತ್ತನೆ ಕಾರ್ಯಗಳ ಕಲೆಯು ಇಂದಿನ ಸಮಾಜಕ್ಕೆ ಕೊಡುಗೆ ನೀಡಿರುವುದನ್ನು ನಾವೆಲ್ಲರೂ ಸ್ಮರಿಸಬೇಕಾಗಿದೆ. ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರದಲ್ಲಿ ಅಮರ ಶಿಲ್ಪಿ ಜಕ್ಕಣಾಚಾರಿ ಅವರು ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ’ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್.ವಿನಯ್ ಅವರು ಮಾತನಾಡಿ, ‘ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದ್ದು, ಅನೇಕ ಗುಡಿ, ದೇವಸ್ಥಾನ, ಪ್ರಾಚೀನ ಸ್ಮಾರಕಗಳ ನಿರ್ಮಾಣದಿಂದಾಗಿ ಸಮುದಾಯದ ಕಲೆ, ಸಂಸ್ಕೃತಿ ಪ್ರಸಿದ್ಧಿ ಪಡೆದಿವೆ’ಎಂದು ತಿಳಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಧರಣೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಮಹದೇವಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಗಿರೀಶ್, ಸಮಾಜದ ಮುಖಂಡರಾದ ಮಧು, ಬಿ.ಕೆ ಶ್ರೀನಿವಾಸ್ ಮೂರ್ತಿ, ಕನ್ನಡಪರ ಸಂಘಟನೆಯ ಸದಸ್ಯರು, ಲಲಿತಾ ಕಲಾ ಅಕಾಡೆಮಿಯ ಸದಸ್ಯರು ಹಾಗೂ ಇತರ ಸಂಘ ಸಂಸ್ಥೆಯ ಮುಖಂಡರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು