ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗಾರಿಕೆಗಳ ಬೆಳವಣಿಗೆಯಿಂದ ಉದ್ಯೋಗಾವಕಾಶ: ಎಡಿಸಿ

Last Updated 16 ಸೆಪ್ಟೆಂಬರ್ 2022, 15:35 IST
ಅಕ್ಷರ ಗಾತ್ರ

ಚಾಮರಾಜನಗರ: ಕೈಗಾರಿಕೆಗಳ ಬೆಳವಣಿಗೆಯಿಂದ ಉದ್ಯೋಗ ಅವಕಾಶಗಳು ಹೆಚ್ಚಾಗಲಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ ಶುಕ್ರವಾರ ತಿಳಿಸಿದರು.

ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಬದನಗುಪ್ಪೆ ಕೈಗಾರಿಕಾ ಪ್ರದೇಶದ ಕಲರ್ ಟೋನ್ ಟೆಕ್ಸ್‌ಟೈಲ್ಸ್ ಪ್ರೈ.ಲಿ. ಸಂಯುಕ್ತಾಶ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇರ ಸಂದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹಿಂದುಳಿದ ಜಿಲ್ಲೆಯಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಯಾಗುತ್ತದೆ. ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಬಹುದು. ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ’ ಎಂದರು.

‘ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಇದೇ ರೀತಿ ಹೆಚ್ಚಿನ ಇಂತಹ ನೇರ ಸಂದರ್ಶನ ಉದ್ಯೋಗ ಮೇಳಗಳನ್ನು ಹಮ್ಮಿಕೊಳ್ಳುವುದರಿಂದ ಜಿಲ್ಲೆಯ ನಿರುದ್ಯೋಗ ಸಮಸ್ಯೆಯನ್ನು ನೀಗಿಸಬಹುದು’ ಎಂದು ಅವರು ಹೇಳಿದರು.

ಜಿಲ್ಲಾ ಕೈಗಾರಿಕಾ ಕೇಂದ್ರ ಉಪ ನಿರ್ದೇಶಕ ಕೆ.ರಾಜೇಂದ್ರ ಪ್ರಸಾದ್ ಮಾತನಾಡಿ, ‘ಕಲರ್ ಟೋನ್ ಟೆಕ್ಸ್‌ಟೈಲ್ಸ್ ಸ್ಥಾಪನೆಯಿಂದಾಗಿ 3000ಕ್ಕಿಂತ ಹೆಚ್ಚು ಉದ್ಯೋಗಾವಕಾಶ ಲಭಿಸುತ್ತಿದೆ. ಜಿಲ್ಲೆಯ ಅಭ್ಯರ್ಥಿಗಳಿಗೆ ಉದ್ಯೋಗಿಗಳಾಗಲೂ ಒಳ್ಳೆಯ ಅವಕಾಶ ದೊರೆತಿದೆ‘ ಎಂದರು.

ಜವಳಿ ಮತ್ತು ಕೈಮಗ್ಗ ಇಲಾಖೆ ಉಪ ನಿರ್ದೇಶಕ ಪಿ.ಆರ್.ಯೋಗೀಶ್ ಮಾತನಾಡಿ, ‘ಕಲರ್ ಟೋನ್ ಟೆಕ್ಸ್‌ಟೈಲ್ಸ್ ಪ್ರೈ.ಲಿ. ₹250 ಕೋಟಿ ಬಂಡವಾಳ ಹೂಡಿಕೆ ಮಾಡಿ ಉದ್ಯಮ ಸ್ಥಾಪಿಸಿದೆ. ಜಿಲ್ಲೆಯ ಅಭಿವೃದ್ಧಿಗಾಗಿ ಇಂತಹ ಕೈಗಾರಿಕೆಗಳು ಮುಂದೆ ಬಂದಿರುವುದು ಸಂತಸ ತಂದಿದೆ’ ಎಂದರು.

ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೆ. ಪ್ರಭಾಕರ್ ಮಾತನಾಡಿ, ‘ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಯಿಂದ ಉದ್ಯೋಗ ಸೃಷ್ಟಿಯಾಗಿ ನಿರುದ್ಯೋಗ ನಿರ್ಮೂಲನೆಯಾಗುತ್ತದೆ. ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಅಳಿಸಿ ಹಾಕಲು ಕೈಗಾರಿಕೆಗಳು ಮುಂದೆ ಬಂದಿವೆ. ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ನಾವು ಕೂಡ ಸಹಕಾರ ನೀಡಲಿದ್ದೇವೆ’ ಎಂದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಉದ್ಯೋಗಾಧಿಕಾರಿ ಎ. ಮಹಮದ್ ಆಕ್ಬರ್, ಕಲರ್ ಟೋನ್ ಟೆಕ್ಸ್‌ಟೈಲ್ಸ್ ಉಪ ಜನರಲ್ ಮ್ಯಾನೇಜರ್ ಗೌರಿ ಪ್ರಕಾಶ್ ಇತರರು ಇದ್ದರು.

ಶುಕ್ರವಾರದ ನೇರ ಸಂದರ್ಶನದಲ್ಲಿ ಮಹಿಳಾ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು.106 ಜನರ ಪೈಕಿ 60 ಮಂದಿ ಸಂದರ್ಶನಕ್ಕೆ ಹಾಜರಾಗಿದ್ದಾರೆ. ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ ಎಂದು ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT