ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ: ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಮಹಿಳಾ ಕಾಂಗ್ರೆಸ್‌ ಪ್ರತಿಭಟನೆ

Last Updated 6 ಸೆಪ್ಟೆಂಬರ್ 2021, 11:30 IST
ಅಕ್ಷರ ಗಾತ್ರ

ಚಾಮರಾಜನಗರ: ಅಡುಗೆ ಅನಿಲ, ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸೇರಿದ ಪ್ರತಿಭಟನಕಾರರು ಅಲ್ಲಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ತೆರಳಿ, ಸ್ವಲ್ಪ ಹೊತ್ತು ರಸ್ತೆ ತಡೆ ನಡೆಸಿದರು. ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆ ಲತಾ ರಾಜಶೇಖರ ಜತ್ತಿ ಮಾ ಅವರು ಮಾತನಾಡಿ, ‘ಕೋವಿಡ್ ಸಂಕಷ್ಟದ ಸಮಯದಲ್ಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಅಗತ್ಯ ದಿನಬಳಕೆಯ ವಸ್ತುಗಳ ಬೆಲೆಯನ್ನು ಹೆಚ್ಚಿಸುತ್ತಿದೆ. ಇದರಿಂದ ಜನ ಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ದೂರಿದರು.

‘ಕಾಂಗ್ರೆಸ್ ಸರ್ಕಾರವಿದ್ದ ಸಂದರ್ಭದಲ್ಲಿ ಪೆಟ್ರೋಲ್ ಬೆಲೆಯಲ್ಲಿ ₹6 ಹೆಚ್ಚಳವಾಗಿದ್ದಕ್ಕೆ ಈಗ ಸಚಿವರಾಗಿರುವ ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ ಹಾಗೂ ಇತರರು ಬೀದಿ ಬೀದಿಗಳಲ್ಲಿ ಬೊಬ್ಬೆ ಹೊಡೆದಿದ್ದರು. ಈಗ ಅವರದೇ ಸರ್ಕಾರದಲ್ಲಿ ಬೆಲೆ ಹೆಚ್ಚಿರುವ ಬಗ್ಗೆ ಪ್ರಶ್ನಿಸಿದರೆ, ಯಾವುದೇ ನಾಚಿಕೆ ಇಲ್ಲದೇ ಸಮರ್ಥನೆ ಕೊಡುತ್ತಿದ್ದಾರೆ’ ಎಂದು ದೂರಿದರು.

ಹೊರದೇಶಗಳಲ್ಲಿಟ್ಟಿರುವ ಕಪ್ಪುಹಣ ತಂದು ಜನರ ಖಾತೆಗೆ ₹15 ಲಕ್ಷಹಾಕುವುದಾಗಿ ಹೇಳಿದ ನರೇಂದ್ರ ಮೋದಿ ನಯಾಪೈಸೆ ನೀಡಿಲ್ಲ. ದೇಶದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ನೀಡಿರುವ ಭರವಸೆ ಹುಸಿಯಾಗಿದೆ. ಇರುವ ಉದ್ಯೋಗಗಳನ್ನೇ ಕಿತ್ತುಕೊಂಡು ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಲತಾ ಅವರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪದ್ಮಾ, ಮಹಿಳಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ನಾಗರತ್ನ, ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಕುಂತಲಾ, ನಗರಸಭಾ ಸದಸ್ಯರಾದ ಕಲಾವತಿ, ಭಾಗ್ಯಮ್ಮ, ಮುಖಂಡರಾದ ರೇಣುಕಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT