ಗುರುವಾರ , ಆಗಸ್ಟ್ 11, 2022
28 °C
ಕಾರ್ಯಾಗಾರದಲ್ಲಿ ಪೊಲೀಸರಿಗೆ ಸಲಹೆ ನೀಡಿದ ನ್ಯಾಯಾಧೀಶ ಎಂ.ಶ್ರೀಧರ

ಮಕ್ಕಳ ದೌರ್ಜನ್ಯ: ದೂರುಗಳಿಗೆ ತ್ವರಿತ ಸ್ಪಂದನೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಬಾಲ್ಯವಿವಾಹ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ವಿರುದ್ದ ಅರಿವು ಮೂಡಿಸುವುದರ ಜೊತೆಗೆ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿತ ದೂರುಗಳು ಬಂದಲ್ಲಿ ಪೊಲೀಸರು ತ್ವರಿತವಾಗಿ ಸ್ಪಂದಿಸಬೇಕು ಎಂದು ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ ಅವರು ಬುಧವಾರ ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ವಿಶೇಷ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಬಾಲನ್ಯಾಯ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಕ್ಕಳ ಸಾಗಣೆ ವಿರುದ್ಧ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಮಕ್ಕಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ ಹಾಗೂ ಅರಿವು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. 

‘ಬಾಲ್ಯ ವಿವಾಹ ನಿಷೇಧ ಸೇರಿದಂತೆ ಮಕ್ಕಳ ರಕ್ಷಣೆ ಸಂಬಂಧಿತ ಕಾಯ್ದೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪೊಲೀಸರು ಸಂಪೂರ್ಣ ಮಾಹಿತಿ ಹೊಂದಿರಬೇಕು. ಪೋಕ್ಸೊ, ಬಾಲ್ಯ ವಿವಾಹ ಅಪರಾಧಗಳಿಗೆ ವಿಧಿಸುವ ಶಿಕ್ಷೆಗಳ ಬಗ್ಗೆ ಸಾರ್ವಜನಿಕರಿಗೆ ಮನದಟ್ಟು ಮಾಡಬೇಕು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಮಾತನಾಡಿ, ‘ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕಲು ಪೊಲೀಸ್ ಇಲಾಖೆ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸುತ್ತಿದೆ. ಮಕ್ಕಳಿಗೆ ಸಂಬಂಧಿಸಿದ ದೂರುಗಳು ಬಂದಲ್ಲಿ ತಕ್ಷಣ ಸ್ಪಂದಿಸಿ ದೂರು ದಾಖಲಿಸಿ ವಿಚಾರಣೆ ನಡೆಸುವಂತೆ ಠಾಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ಠಾಣೆಗಳಲ್ಲಿಯೂ ಈ ಕುರಿತು ಅರಿವು ಮೂಡಿಸಲಾಗುತ್ತಿದೆ’ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಗೀತಾಲಕ್ಷ್ಮಿ ಮಾತನಾಡಿ, ‘ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ಮಕ್ಕಳ ದೌರ್ಜನ್ಯ ಸಂಬಂಧಿತ ದೂರುಗಳು ದಾಖಲಾಗುತ್ತಿವೆ. ಇಲಾಖೆ ವತಿಯಿಂದ ಅತಿ ಹೆಚ್ಚು ಬಾಲ್ಯವಿವಾಹ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಕಂಡು ಬರುವ ಪ್ರದೇಶ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಅಗತ್ಯ’ ಎಂದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸರಸ್ವತಿ ಮಾತನಾಡಿದರು. 

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣಿಕೊಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗೋವಿಂದ, ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಮಹೇಶ್, ಸಂಪನ್ಮೂಲ ವ್ಯಕ್ತಿಗಳಾದ ಮೈಸೂರಿನ ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಜಿ.ಎಸ್.ಪ್ರಸನ್ನಕುಮಾರ್, ಬೆಂಗಳೂರಿನ ಡಿ.ಜಿ.ಪಿ ತರಬೇತಿ ಕಚೇರಿಯ ಪೊಲೀಸ್ ತರಬೇತುದಾರರಾದ ಸಿ.ಜಿ.ರೋಹಿತ್ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು