ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮತ ಎಣಿಕೆ ಜಾಗರೂಕತೆಯಿಂದ ನಡೆಸಿ: ಎಡಿಸಿ

Published 31 ಮೇ 2024, 6:14 IST
Last Updated 31 ಮೇ 2024, 6:14 IST
ಅಕ್ಷರ ಗಾತ್ರ

ಚಾಮರಾಜನಗರ: ಲೋಕಸಭಾ ಚುನಾವಣೆಯ ಮತ ಎಣಿಕೆಯು ಜೂನ್ 4ರಂದು ನಡೆಯಲಿದ್ದು, ಮತ ಎಣಿಕೆ ಕಾರ್ಯವನ್ನು ಜಾಗರೂಕತೆ ಹಾಗೂ ಜವಾಬ್ದಾರಿಯಿಂದ ನಿರ್ವಹಿಸುವಂತೆ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅಧಿಕಾರಿ ಹಾಗೂ ಸಿಬ್ಬಂದಿಗೆ ಗುರುವಾರ ಸೂಚಿಸಿದರು.

ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮತ ಎಣಿಕೆಗೆ ಸಂಬಂಧಿಸಿದಂತೆ ಸೂಕ್ಷ್ಮ ವೀಕ್ಷಕರು ಹಾಗೂ ಮತ ಎಣಿಕೆ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಚುನಾವಣಾ ಮತ ಎಣಿಕೆ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಮತ ಎಣಿಕೆಯು ನಗರದ ನಂಜನಗೂಡು ರಸ್ತೆಯಲ್ಲಿರುವ ಬೇಡರಪುರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ನಿಗದಿತ ಸಮಯಕ್ಕೆ ಸರಿಯಾಗಿ ಚುನಾವಣಾಧಿಕಾರಿಗಳ ಕಚೇರಿಯಿಂದ ನೀಡಿರುವ ಗುರುತಿನ ಚೀಟಿಯೊಂದಿಗೆ ಮತ ಎಣಿಕೆ ಕೇಂದ್ರಕ್ಕೆ ಹಾಜರಾಗಬೇಕು. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್ ಹಾಗೂ ಸ್ಮಾರ್ಟ್ ವಾಚ್‍ಗಳನ್ನು ಮತ ಎಣಿಕೆ ಕೇಂದ್ರಕ್ಕೆ ತರುವಂತಿಲ್ಲ’ ಎಂದು ತಿಳಿಸಿದರು.

‘ಮತ ಎಣಿಕೆ ಕೇಂದ್ರದ ಕಾರ್ಯನಿರ್ವಹಣೆಗೆ ನಿಯೋಜಿಸಲಾಗಿರುವ ಮಾಸ್ಟರ್ ಟ್ರೈನರ್‌ಗಳನ್ನು, ಮತ ಎಣಿಕೆ ಅಧಿಕಾರಿ, ಸಿಬ್ಬಂದಿ ಎಣಿಕೆ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಮತ ಎಣಿಕೆಯು ಸುಸೂತ್ರವಾಗಿ ನಡೆಯಲು ಕಾರ್ಯೋನ್ಮುಖರಾಗಬೇಕು’ ಎಂದು ಗೀತಾ ಹುಡೇದ ತಿಳಿಸಿದರು.

ತರಬೇತಿ ನೋಡೆಲ್ ಅಧಿಕಾರಿ ಲಿಂಗರಾಜೇ ಅರಸ್ ಅವರು ಪವರ್ ಪಾಯಿಂಟ್ ಮೂಲಕ ಮತ ಎಣಿಕೆಯ ಕಾರ್ಯ ಚಟುವಟಿಕೆಗಳನ್ನು ವಿವರಿಸಿ ಮಾತನಾಡಿ, ‘ವಿದ್ಯುನ್ಮಾನ ಮತ ಯಂತ್ರದ ಮತ ಎಣಿಕೆ ಕಾರ್ಯವು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ. ಮತ ಎಣಿಕೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ತರಬೇತಿಯಲ್ಲಿ ಸರಿಯಾದ ಸಲಹೆ ಹಾಗೂ ಮಾರ್ಗದರ್ಶನವನ್ನು ಪಡೆದು ಕರ್ತವ್ಯ ನಿರ್ವಹಿಸಬೇಕು. ಚುನಾವಣೆಯಲ್ಲಿ ಮತದಾನ ಮತ್ತು ಮತ ಎಣಿಕೆ ಕಾರ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಮತ ಎಣಿಕೆ ಕಾರ್ಯದಲ್ಲಿ ಪಾಲ್ಗೊಳ್ಳಬೇಕು’ ಎಂದರು.

ನಗರದ ಸರ್ಕಾರಿ ಕಾಲೇಜಿನ ಉಪನ್ಯಾಸಕರು ಹಾಗೂ ಸಂಪನ್ಮೂಲ ವ್ಯಕ್ತಿ ಸವೀನ, ಮಾಸ್ಟರ್ ಟ್ರೈನರ್ ಗಳು, ಅಧಿಕಾರಿಗಳು, ಇತರರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT