ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ಶ್ರೀಧರ

Published 3 ಮಾರ್ಚ್ 2024, 4:43 IST
Last Updated 3 ಮಾರ್ಚ್ 2024, 4:43 IST
ಅಕ್ಷರ ಗಾತ್ರ

ಚಾಮರಾಜನಗರ: ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಅನ್ವಯ ಎಲ್ಲ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಮೆಗೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಧರ ಎಂ. ಶನಿವಾರ ಹೇಳಿದರು. 

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆ.ಡಿ.ಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದಲ್ಲಿ ಚಾಮರಾಜನಗರ ತಾಲ್ಲೂಕನ್ನು ಬಾಲಕಾರ್ಮಿಕ ಮುಕ್ತ ತಾಲ್ಲೂಕಾಗಿ ಘೋಷಿಸುವ ಸಂಬಂಧ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ತಿದ್ದುಪಡಿ 2016ರ ಬಗ್ಗೆ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಪದ್ಧತಿ ನಡೆಯುತ್ತಿದೆಯೇ ಎಂದು ಗಮನಹರಿಸಬೇಕು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಪತ್ತೆಯಾದ ಮಕ್ಕಳಿಗೆ ರಕ್ಷಣೆ ಮತ್ತು ಪುನರ್‌ವಸತಿ ಕಲ್ಪಿಸಬೇಕು’ ಎಂದರು.   

‘ಮಕ್ಕಳ ರಕ್ಷಣೆಗಾಗಿ 54ಕ್ಕೂ ಹೆಚ್ಚು ಮಕ್ಕಳ ಹಕ್ಕುಗಳನ್ನು ದೇಶದಲ್ಲಿ ಮಾನ್ಯ ಮಾಡಲಾಗಿದೆ. ವಿಶೇಷವಾಗಿ ಮಕ್ಕಳಿಗೆ ಬದುಕುವ, ಭಾಗವಹಿಸುವ, ವಿಕಾಸ ಹೊಂದುವ ಹಕ್ಕಿದೆ. ಬಾಲ ಕಾರ್ಮಿಕರು ದುಡಿಯುತ್ತಿರುವ ಬಗ್ಗೆ ಕಂಡು ಬಂದಲ್ಲಿ ಕೂಡಲೇ ತಿಳಿಸಬೇಕು. ಅಂತಹ ಬಾಲ ಕಾರ್ಮಿಕರನ್ನು ರಕ್ಷಿಸಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತವನ್ನಾಗಿ ಮಾಡಲು ಸಾಧ್ಯವಾಗಲಿದೆ. ಇದಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಯ ಪ್ರತಿನಿಧಿಗಳು, ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿಗಳ ಪಾತ್ರ ಮುಖ್ಯವಾಗಿದೆ’ ಎಂದು ಶ್ರೀಧರ ಅವರು ತಿಳಿಸಿದರು.

ತಹಶೀಲ್ದಾರ್ ಬಸವರಾಜು ಐ.ಇ ಬಸವರಾಜು ಮಾತನಾಡಿ, ‘ಪ್ರಜಾಸತ್ತಾತ್ಮಕ ಮೌಲ್ಯವನ್ನು ಅಳವಡಿಸಿಕೊಂಡು ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಪಡೆದು ಉತ್ತಮ ಸಮಾಜ ನಿರ್ಮಾಣ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ನಾವೆಲ್ಲರೂ ಕೆಲಸ ಮಾಡುವುದು ನಮ್ಮ ಸಮಾಜಕ್ಕಾಗಿ. ಇದನ್ನು ನಾವು ಅರಿಯಬೇಕು. ಉತ್ತಮ ಸಮಾಜ ಕಟ್ಟಬೇಕೆಂದರೆ ಮಕ್ಕಳಿಗೆ ಶಿಕ್ಷಣ ನೀಡಬೇಕು. ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕು’ ಎಂದರು.

ಸಂಪನ್ಮೂಲ ವ್ಯಕ್ತಿ ಬಿನುವರ್ಗಿಸ್ ಅವರು ಬಾಲ್ಯಾವಸ್ಥೆ ಮತ್ತು ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986, ತಿದ್ದುಪಡಿ 2016ರ ಬಗ್ಗೆ ಉಪನ್ಯಾಸ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಕಾರ್ಮಿಕ ನಿರೀಕ್ಷಕಿ ವೀಣಾ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕ ಮಹೇಶ್ ಪಾಲ್ಗೊಂಡಿದ್ದರು.

‘ಎಲ್ಲರ ಸಹಕಾರ ಅಗತ್ಯ’

ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಸವಿತ ಮಾತನಾಡಿ ‘ಮಕ್ಕಳು ಸಮಾಜದ ಸಂಪತ್ತು. ಬೌದ್ಧಿಕವಾಗಿ ಮಾನಸಿಕವಾಗಿ ದೈಹಿಕವಾಗಿ ಸದೃಢವಾಗಿ ಮಕ್ಕಳು ಬೆಳೆದು ದೇಶದ ಆಸ್ತಿಯಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಇಲಾಖೆಯಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಹಲವಾರು ಕಾರ್ಯಕ್ರಮಗಳು ಕಾರ್ಯಾಗಾರಗಳನ್ನು ಆಯೋಜಿಸುತ್ತಿದ್ದೇವೆ. ಬೀದಿ ನಾಟಕ ಪ್ರದರ್ಶನದ ಮೂಲಕವೂ ಬಾಲಕಾರ್ಮಿಕ ಪದ್ದತಿ ಹೋಗಲಾಡಿಸುವ ಉದ್ದೇಶದಿಂದ ಜಾಗೃತಿ ಮೂಡಿಸಲಾಗುತ್ತಿದೆ. ಗ್ರಾಮ ಮಟ್ಟದ ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT