ಚಾಮರಾಜನಗರ: ಸಮಾಜದಲ್ಲಿ ನಡೆಯುವ ದೌರ್ಜನ್ಯ ಪ್ರಕರಣಗಳ ಬಗ್ಗೆ ಯಾರೂ ಮೌನ ವಹಿಸಬಾರದು. ಮುಕ್ತವಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳನ್ನು ಭೇಟಿ ನೀಡಿ ಕಾನೂನಿನ ಸೌಲಭ್ಯ ಪಡೆಯಬಹುದು. ಪೋಷಕರು ಮಕ್ಕಳ ಮೇಲಿನ ದೌರ್ಜನ್ಯಗಳ ಬಗ್ಗೆ ಜಾಗೃತರಾಗಿರಬೇಕು’ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಗುರುವಾರ ತಿಳಿಸಿದರು.
ರಾಷ್ಟ್ರೀಯ ಕಾನೂನು ಸೇವಾ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆಯ ಕೆ.ಡಿ.ಪಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
‘ಬಾಲ್ಯವಿವಾಹದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವ ಮೂಲಕ ಅಧಿಕಾರಿಗಳು ಬಾಲ್ಯವಿವಾಹ ತಡೆಗಟ್ಟಲು ಮುಂದಾಗಬೇಕು. ಈ ಅನಿಷ್ಟ ಪದ್ಧತಿಯಿಂದ ಆಗುವ ದುಷ್ಪರಿಣಾಮ ಹಾಗೂ ಕಾಯ್ದೆಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಜಿಲ್ಲೆಯಲ್ಲಿ ಬಾಲ್ಯ ವಿವಾಹವು ಹೆಚ್ಚಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಧರ ಎಂ. ಮಾತನಾಡಿ, ‘ಜನರಿಗೆ ಕಾನೂನಿನ ಸಾಮಾನ್ಯ ಅರಿವು ಅಗತ್ಯ. ಕಾನೂನಿನ ಅರಿವು ಮತ್ತು ನೆರವು ಸಂಪೂರ್ಣ ಮಾಹಿತಿಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಒದಗಿಸುತ್ತದೆ. ಪರಿಶಿಷ್ಟ ಜಾತಿ, ಪಂಗಡ, ಮಹಿಳೆಯರು, ಮಕ್ಕಳು ಹಾಗೂ ₹3 ಲಕ್ಷಕ್ಕಿಂತ ಆದಾಯ ಕಡಿಮೆ ಇರುವ ಎಲ್ಲ ವರ್ಗದ ಜನರಿಗೆ ಕಾನೂನು ಪ್ರಾಧಿಕಾರ ನೆರವು ನೀಡುತ್ತದೆ’ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮಾತನಾಡಿ, ‘ಮಕ್ಕಳಿಗೆ ಮದುವೆ ಮಾಡಿದ ಮಾತ್ರಕ್ಕೆ ಪೋಷಕರ ಜವಾಬ್ದಾರಿ ಮುಗಿಯುವುದಿಲ್ಲ. ಮಕ್ಕಳಿಗೆ ಶಿಕ್ಷಣ ಪಡೆಯಲು ಉತ್ತೇಜನ ನೀಡಬೇಕು. ಬಾಲ್ಯ ವಿವಾಹದಿಂದ ಬಾಲಕಿಯರ ಮೇಲಾಗುವ ಗಂಭೀರ ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು’ ಎಂದರು.
ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ಕಿರಣ್ ಪಡ್ನೇಕರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ಲಕ್ಷ್ಮೀಪ್ರಸನ್ನ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆಗಳು, ಬಾಲ್ಯವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚೆಲುವರಾಜು. ಕೊಳ್ಳೇಗಾಲದ ಪಿ.ಎಂ.ಎಸ್.ಆರ್. ಸಂಸ್ಥೆಯ ನಿರ್ದೇಶಕ ಆರ್ಡಿಸ್ ಅರ್ನಾಲ್ಡ್, ಬೆಂಗಳೂರಿನ ಚೈಲ್ಡ್ ರೈಟ್ಸ್ ಟ್ರಸ್ಟ್, ಕರ್ನಾಟಕ ಬಾಲ್ಯವಿವಾಹ ವಿರೋಧ ವೇದಿಕೆ ಸಂಯೋಜಕ, ಅಡ್ವೋಕೇಸಿ ವೆಂಕಟೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.