ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ವಿಶ್ವ ತಂಬಾಕು ರಹಿತ ದಿನ: ಜಾಗೃತಿ ಜಾಥಾ

Published 31 ಮೇ 2024, 16:02 IST
Last Updated 31 ಮೇ 2024, 16:02 IST
ಅಕ್ಷರ ಗಾತ್ರ

ಚಾಮರಾಜನಗರ: ತಂಬಾಕು ಸೇವನೆ ಹಾಗೂ ಮದ್ಯಪಾನ ಇನ್ನಿತರ ದುಶ್ಚಟಗಳಿಂದ ಆರೋಗ್ಯದ ಮೇಲೆ ಉಂಟಾಗುವ ಗಂಭೀರ ಪರಿಣಾಮದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್‌ ಶುಕ್ರವಾರ ಹೇಳಿದರು. 

ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಲ್ನಡಿಗೆ ಜಾಥಾಕ್ಕೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು. 

‘ಸಾರ್ವಜನಿಕರು ದುಶ್ಚಟಗಳಿಂದ ಹೊರಬಂದು ಕುಟುಂಬದ ಪೋಷಣೆ ಕಡೆ ಗಮನಹರಿಸಿ ಉತ್ತಮ ಜೀವನ ನಡೆಸಬೇಕು. ತಂಬಾಕು ಸೇವನೆ ದುಷ್ಪರಿಣಾಮದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮಾತನಾಡಿ, ‘ವಿಶ್ವಸಂಸ್ಥೆಯು ವಿಶ್ವ ತಂಬಾಕು ರಹಿತ ದಿನವನ್ನು 1988ರ ಮೇ 31 ರಂದು ಮೊದಲ ಬಾರಿಗೆ ಆಚರಿಸಿತು. ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸಬೇಕು. ಈ ದಿನಗಳಲ್ಲಿ 13-14 ವರ್ಷದ ಮಕ್ಕಳು ಕೂಡ ಈ ಚಟಕ್ಕೆ ಒಳಗಾಗುತ್ತಿರುವುದು ಆಘಾತಕಾರಿ. ಮಕ್ಕಳು ಬೇಗನೆ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಶಾಲೆ ಕಾಲೇಜಿನ ಮಕ್ಕಳಿಗೂ ಇದರ ಬಗ್ಗೆ ಅರಿವು ಮೂಡಿಸುವುದು ಉತ್ತಮ. ‘ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು’ ಎಂಬುದು ಈ ವರ್ಷದ ಘೋಷವಾಕ್ಯ’ ಎಂದು ಹೇಳಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಿದಂಬರ ಮಾತನಾಡಿ, ‘ತಂಬಾಕಿನಲ್ಲಿರುವ ನಿಕೋಟಿನ್ ಅಂಶವು ಮತ್ತೆ ಮತ್ತೆ ತಂಬಾಕು ಬಳಸಲು ಜನರನ್ನು ಪ್ರೇರೇಪಿಸಲಿದೆ. ಪುರುಷರಲ್ಲಿ ತಂಬಾಕು ಸೇವನೆ ಸಾಮಾನ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳು ಸಹ ತಂಬಾಕು ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಪರ್ಯಾಸ’ ಎಂದರು.

ಹೆಚ್ಚುವರಿ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶ ಎ.ಕೃಷ್ಣ, ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿ ಡಾ. ರಾಜೇಶ್‍ಕುಮಾರ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಮಂಜುನಾಥ್, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಆರೋಗ್ಯ ಶಿಕ್ಷಣ ಅಧಿಕಾರಿ ದೊರೆಸ್ವಾಮಿ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚೆಲುವರಾಜು, ತಂಬಾಕು ಸಲಹೆಗಾರರಾದ ಪ್ರಶಾಂತ್, ಸರ್ಕಾರಿ ನರ್ಸಿಂಗ್‌ ಶಾಲೆಯ ಬೋಧಕರಾದ ಗಂಗಮ್ಮ, ನರ್ಸಿಂಗ್‌ ಶಾಲೆಯ ವಿದ್ಯಾರ್ಥಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಇತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಚಾಮರಾಜೇಶ್ವರ ಸ್ವಾಮಿ ದೇವಾಲಯದ ಮುಂಭಾಗದಿಂದ ಆರಂಭಗೊಂಡ ಜಾಥಾ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಸಾಗಿ ಜಿಲ್ಲಾಡಳಿತ ಭವನದಲ್ಲಿ ಮುಕ್ತಾಯ ಕಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT