ಮಂಗಳವಾರ, ಸೆಪ್ಟೆಂಬರ್ 28, 2021
22 °C

‘ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದು ಪೋಷಕರ ಕರ್ತವ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ‘ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಪೌಷ್ಟಿಕ ಆಹಾರ ನೀಡುವುದು ಎಲ್ಲ ಪೋಷಕರ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್ ಅವರು ಬುಧವಾರ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಗಳ ಸಹಯೋಗದೊಂದಿಗೆ ನಗರದ ರಾಮಸಮುದ್ರ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪೌಷ್ಟಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳಿರುವ ಮನೆಗೆ ಸರ್ಕಾರದಿಂದ ಸಿಗುವ ಪೌಷ್ಟಿಕಾಂಶವುಳ್ಳ ಆಹಾರ ಪದಾರ್ಥ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮುಖ್ಯವಾಗಿದೆ. ರಾಷ್ಟ್ರೀಯ ಕುಟುಂಬ ಸೇವಾ ವರದಿಯ ಪ್ರಕಾರ ಶೇ 6.4ರಷ್ಟು ಜನರ ದೈಹಿಕ ಬೆಳವಣಿಗೆ ಕುಂಠಿತವಾಗಿದ್ದು, ಅಪೌಷ್ಟಿಕತೆಯೇ ಇದಕ್ಕೆ ಕಾರಣ. ಅಪೌಷ್ಟಿಕತೆಯಿಂದ ಮಕ್ಕಳ ಸ್ನಾಯು ದುರ್ಬಲವಾಗುವುದಲ್ಲದೆ, ಬೆಳವಣಿಗೆ ಕುಂಠಿತವಾಗುತ್ತದೆ’ ಎಂದರು. 

‘ಹೆಣ್ಣು ಮಕ್ಕಳಿಗೆ ಹದಿಹರೆಯದ ವಯಸ್ಸಿನಲ್ಲಿ ಮದುವೆ ಮಾಡಬಾರದು. ಇದರಿಂದ ತಾಯಿ ಹಾಗೂ ಮಗುವಿನ ಆರೋಗ್ಯ ಸ್ಥಿತಿ ದುರ್ಬಲವಾಗುವ ಸಂಭವ ಹೆಚ್ಚು. ಬಾಲ್ಯ ವಿವಾಹಗಳನ್ನು ತಡೆಗಟ್ಟಿ, ಜನರಿಗೆ ಆರೋಗ್ಯ, ಕಾನೂನುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು’ ಎಂದು ಅವರು ಸಲಹೆ ನೀಡಿದರು.

ನಗರಸಭಾ ಉಪಾಧ್ಯಕ್ಷೆ  ಸುಧಾ ಅವರು ಮಾತನಾಡಿ, ‘ಮಾತೃ ವಂದನಾ ಸಪ್ತಾಹ ಕಾರ್ಯಕ್ರಮದಡಿ ಮೊದಲನೇ ಗರ್ಭಿಣಿಯರಿಗೆ ಕೇಂದ್ರ ಸರ್ಕಾರದ ವತಿಯಿಂದ ₹5,000 ನೀಡಲಾಗುತ್ತಿದ್ದು, ಇದರ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಜನರಿಗೆ ಮಾಹಿತಿ ನೀಡಬೇಕು’ ಎಂದರು. 

ವೈದ್ಯಕೀಯ ಕಾಲೇಜಿನ ದಂತ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಗಾಯತ್ರಿ ಅವರು ಮಾತನಾಡಿ, ‘ಗ್ರಾಮೀಣ ಪ್ರದೇಶಗಳಲ್ಲಿ ಕಬ್ಬಿಣಾಂಶ, ನಾರಿನ ಅಂಶವುಳ್ಳ ಹಣ್ಣು, ತರಕಾರಿಗಳು ಸ್ಥಳೀಯವಾಗಿ ದೊರೆಯುತ್ತವೆ. ಇದನ್ನು ಸಮರ್ಪಕವಾಗಿ ದಿನನಿತ್ಯದ ಆಹಾರ ಸೇವನೆಯಲ್ಲಿ ಬಳಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು’ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗೋವಿಂದ, ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಶಿವಸ್ವಾಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೊಹಮ್ಮದ್ ಮುಖ್ತಾರ್, ಜಿಲ್ಲಾ ನಿರೂಪಣಾಧಿಕಾರಿ ಸುರೇಶ್, ಬಾಲನ್ಯಾಯ ಮಂಡಳಿಯ ಸದಸ್ಯರಾದ ಟಿ.ಜೆ. ಸುರೇಶ್ ಇತರರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು