ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಕಾರ್ಡ್ ತ್ವರಿತ ವಿತರಣೆಗೆ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ ಸೂಚನೆ

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ
Last Updated 4 ಜನವರಿ 2022, 15:25 IST
ಅಕ್ಷರ ಗಾತ್ರ

ಚಾಮರಾಜನಗರ: ‘ಜಿಲ್ಲೆಯಲ್ಲಿರುವ ಎಲ್ಲ ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಕಾರ್ಡ್ ವಿತರಿಸುವ ಪ್ರಕ್ರಿಯೆ ಚುರುಕುಗೊಳಿಸಿ’ ಎಂದು ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ ಅವರು ಸೂಚಿಸಿದರು.

ಆರೋಗ್ಯ ಕಾರ್ಡ್ ವಿತರಣೆ ಸಂಬಂಧ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳು ಹಾಗೂ ಸುವರ್ಣ ಆರೋಗ್ಯ ಟ್ರಸ್ಟ್ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಎಲ್ಲ ಬಿಪಿಎಲ್ ಕುಟುಂಬಗಳಿಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ₹ 5 ಲಕ್ಷಗಳವರೆಗೂ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಿದೆ. ಪ್ರತಿ ಬಡ ಕುಟುಂಬದ ಸದಸ್ಯರಿಗೂ ಆರೋಗ್ಯ ಕಾರ್ಡ್ ವಿತರಿಸಿ, ಉಚಿತ ಸೇವೆ ಒದಗಿಸುವುದೇ ಸರ್ಕಾರದ ಉದ್ದೇಶವಾಗಿದೆ. ಈ ಸೌಲಭ್ಯ ಪ್ರತಿ ಬಿಪಿಎಲ್ ಕುಟುಂಬಕ್ಕೂ ಲಭ್ಯವಾಗುವಂತೆ ವೈದ್ಯಾಧಿಕಾರಿಗಳು ನಿಗಾ ವಹಿಸಬೇಕು’ ಎಂದರು.

‘ಜಿಲ್ಲೆಯಲ್ಲಿ 10 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇದ್ದು, ಈ ಪೈಕಿ ಕೋವಿಡ್ ಅಲೆ ಆರಂಭಕ್ಕೂ ಮೊದಲು 2.60 ಲಕ್ಷದ ಜನರಿಗೆ ಆರೋಗ್ಯ ಕಾರ್ಡ್‌ ವಿತರಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಾರ್ಡ್ ವಿತರಣೆ ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ಆರೋಗ್ಯ ಕಾರ್ಡ್‌ಗಳ ವಿತರಣೆಯನ್ನು ಮರುಚಾಲನೆಗೊಳಿಸಬೇಕಾಗಿರುವ ನಿಟ್ಟಿನಲ್ಲಿ ಅವಶ್ಯಕ ಸಿದ್ಧತಾ ಕಾರ್ಯ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ.ನಾಗರಾಜು ಮಾತನಾಡಿ ‘ಕಾರ್ಡ್ ಹೊಂದಿರುವ ಬಿಪಿಎಲ್ ಕುಟುಂಬದವರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ನೇರವಾಗಿ ಆರೋಗ್ಯ ಸೌಲಭ್ಯ ಪಡೆಯಬಹುದು. ಆರೋಗ್ಯ ಕಾರ್ಡ್ ಇಲ್ಲದಿದ್ದರೂ ಬಿಪಿಎಲ್ ಕಾರ್ಡ್ ಆಧಾರದಲ್ಲಿ ಸೇವೆ ನೀಡಲಾಗುತ್ತಿದೆ. ಎ 4 ಅಳತೆಯ ಕಾರ್ಡ್ ಪಡೆಯಲು ₹ 10 ಹಾಗೂ ಪಿವಿಸಿ ಅಳತೆಯ ಕಾರ್ಡ್‌ಗಾಗಿ ₹ 35 ಶುಲ್ಕವನ್ನು ಬಿಪಿಎಲ್ ಕುಟುಂಬ ಸದಸ್ಯರು ಪಾವತಿಸಿ ಆರೋಗ್ಯ ಕಾರ್ಡ್ ಪಡೆಯಬೇಕು’ ಎಂದರು.

ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಶ್ರೀನಿವಾಸ, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ಮಹೇಶ್, ಸುವರ್ಣ ಆರೋಗ್ಯ ಟ್ರಸ್ಟ್ ಜಿಲ್ಲಾ ಸಂಯೋಜಕ ಡಾ.ನವೀನ್‌ಕುಮಾರ್, ಕೊಳ್ಳೇಗಾಲ ಉಪವಿಭಾಗ ಅಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜಶೇಖರ್, ಯಳಂದೂರು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಶ್ರೀಧರ್, ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಮಂಜುನಾಥ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶ್ರೀನಿವಾಸ್, ಡಾ.ಗೋಪಾಲ್, ಡಾ.ಮಂಜುನಾಥ್ ಇದ್ದರು.

ವಿವಿಧ ಕಡೆ ವಿತರಣೆ

‘ಆರೋಗ್ಯ ಕಾರ್ಡ್‌ಗಳನ್ನು ಜಿಲ್ಲಾಸ್ಪತ್ರೆ, ಎಲ್ಲ ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರ, ಸೇವಾಸಿಂಧು ಕೇಂದ್ರಗಳು ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ವಿತರಣೆ ಮಾಡಲಾಗುತ್ತದೆ. ಆರೋಗ್ಯ ಕಾರ್ಡ್ ಹೊಂದಿರುವ ಬಿಪಿಎಲ್ ಕುಟುಂಬಕ್ಕೆ ₹ 5 ಲಕ್ಷದವರೆಗೆ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರಿಗೆ ₹ 5 ಲಕ್ಷಗಳಲ್ಲಿ ಶೇ 30ರಷ್ಟು ಅಂದರೆ ₹ 1.50 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸೌಲಭ್ಯ ಪಡೆಯಬೇಕು’ ಎಂದು ಗಾಯತ್ರಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT