ನಾಳೆ ‘ಹಸಿರು ಕರ್ನಾಟಕ’ಕ್ಕೆ ಚಾಲನೆ

7
ಸಾಮಾಜಿಕ ಅರಣ್ಯ ಅಭಿವೃದ್ಧಿಗೆ ಒತ್ತು: ವಿಜಯಲಾಲ್‌ ಮೀನಾ

ನಾಳೆ ‘ಹಸಿರು ಕರ್ನಾಟಕ’ಕ್ಕೆ ಚಾಲನೆ

Published:
Updated:

ಚಾಮರಾಜನಗರ: ‘ಅರಣ್ಯ ಪ್ರದೇಶಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗಿರುವ ಮಹತ್ವಾಕಾಂಕ್ಷೆಯ ‘ಹಸಿರು ಕರ್ನಾಟಕ’ ಯೋಜನೆಗೆ ಬುಧವಾರ (ಆಗಸ್ಟ್‌ 15) ರಾಜ್ಯದಾದ್ಯಂತ ಚಾಲನೆ ಸಿಗಲಿದೆ ಎಂದು ಪ್ರಾದೇಶಿಕ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯಲಾಲ್‌ ಮೀನಾ ಸೋಮವಾರ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವುದರಿಂದ ಚಾಮರಾಜನಗರ ಮತ್ತು ಕೊಳ್ಳೇಗಾಲ ಬಿಟ್ಟು, ಉಳಿದ ಎಲ್ಲ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ದಿನದ ಕಾರ್ಯಕ್ರಮದೊಂದಿಗೆ ಇದರ ಉದ್ಘಾಟನಾ ಕಾರ್ಯಕ್ರಮವೂ ನಡೆಯಲಿದೆ’ ಎಂದು ತಿಳಿಸಿದರು.

‘ರಾಷ್ಟ್ರೀಯ ಅರಣ್ಯ ನೀತಿಯ ಪ್ರಕಾರ, ಒಟ್ಟು ಭೂ ಪ್ರದೇಶದ ಶೇ 33ರಷ್ಟು ಪ್ರದೇಶ ಮರಗಿಡಗಳಿಂದ ಕೂಡಿರಬೇಕು. ಆದ್ದರಿಂದ ಅರಣ್ಯ ಇಲಾಖೆಯ ನಿರ್ದೇಶನದ ಮೇರೆಗೆ ಅಂದು ರಾಜ್ಯದ ಎಲ್ಲ ಜಿಲ್ಲೆಗಳ ಸರ್ಕಾರಿ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ ಗಿಡಗಳನ್ನು ನೆಡಲು  ಸೂಚಿಸಲಾಗಿದೆ’ ಎಂದರು.

‘ವನ ಮಹೋತ್ಸವ, ಪರಿಸರ ದಿನಾಚರಣೆ ಕಾರ್ಯಕ್ರಮಗಳ ಪಟ್ಟಿಗೆ ಹಸಿರು ಕರ್ನಾಟಕ ಸೇರಲಿದೆ. ಈ ಯೋಜನೆಯು ಒಂದು ದಿನದ ಕಾರ್ಯಕ್ರವಾಗದೆ ನಿರಂತರವಾಗಿ ಸಾಗಬೇಕು. ಈಗಾಗಲೇ ನೆಡಲಾಗಿರುವ ಗಿಡಗಳು ಸೊರಗಿದ್ದರೆ ಅವುಗಳನ್ನು ತೆರವುಗೊಳಿಸಿ ಹೊಸ ಗಿಡಗಳನ್ನು ನೆಡಲಾಗುತ್ತದೆ’ ಎಂದು ಹೇಳಿದರು.

‘ಸರ್ಕಾರಿ ಭೂಮಿ, ಗೋಮಾಳಗಳು, ಕೆರೆಗಳ ಸುತ್ತ, ಶಿಕ್ಷಣ ಸಂಸ್ಥೆಗಳ ಆವರಣಗಳಲ್ಲಿ ಸಸಿಗಳನ್ನು ನೆಡಲಾಗುತ್ತದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಪರಿಸರ ಸಂಘಟನೆಗಳು, ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಇದರಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ, ಶಾಲಾ ಮಕ್ಕಳಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು. ಸುಮಾರು 2ರಿಂದ 3 ಸಾವಿರ ಭಿತ್ತಿ ಪತ್ರಗಳನ್ನು ವಿತರಿಸಲಾಗುತ್ತದೆ’ ಎಂದು ತಿಳಿಸಿದರು.

ಕಾರ್ಯಕ್ರಮದ ನಡುವೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಗಳ ಮೂಲಕ ರೈತರಿಗೆ ಗಿಡ ವಿತರಿಸಲಾಗುತ್ತದೆ. ಕೃಷಿ ಹೊಂಡ ನಿರ್ಮಿಸಿರುವ ರೈತರು ಗಿಡಗಳನ್ನು ಪಡೆಯಬಹುದು ಎಂದು ಹೇಳಿದರು.

‘ಪ್ರತಿ ಶಿಕ್ಷಣ ಸಂಸ್ಥೆಗಳಲ್ಲಿ 10ರಿಂದ 100 ಗಿಡ ನೆಡುವ ಗುರಿ ಹೊಂದಲಾಗಿದೆ. ಮನೆಗೊಂದು ಮರ ಊರಿಗೊಂದು ತೋಪು, ತಾಲ್ಲೂಕಿಗೊಂದು ಕಿರು ಅರಣ್ಯ, ಜಿಲ್ಲೆಗೊಂದು ಕಾಡು ಬೆಳೆಸುವುದು ಹಸಿರು ಕರ್ನಾಟಕ ಕಾರ್ಯಕ್ರಮದ ಧ್ಯೇಯ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಮಲೆ ಮಹದೇಶ್ವರಬೆಟ್ಟ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಕಾವೇರಿ ವನ್ಯಧಾಮ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಬಿಆರ್‌ಟಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಶಂಕರ್‌ ಇದ್ದರು.  

ಸಮರ್ಪಕ ಅನುಷ್ಠಾನಕ್ಕೆ ಸೂಚನೆ 

ಇದಕ್ಕೂ ಮೊದಲು ನಡೆದ ಸಭೆಯಲ್ಲಿ ಹಸಿರು ಕರ್ನಾಟಕ ಯೋಜನೆಯ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆ ಕಲೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‌ ಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಲೆ, ಕಾಲೇಜುಗಳಲ್ಲಿ ಸಾಕಷ್ಟು ಸ್ಥಳಾವಕಾಶ ಇರುವ ಕಡೆ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕಿದೆ. ವಿದ್ಯಾರ್ಥಿಗಳಲ್ಲಿ ಗಿಡ ಮರ ಬೆಳೆಸಿ ಹಸಿರೀಕರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವು ಈ ಅಭಿಯಾನದಲ್ಲಿ ನಡೆಯಬೇಕಿದೆ. ಶಾಲಾ ಶಿಕ್ಷಕರಿಗೆ ಈ ಬಗ್ಗೆ ತಿಳಿವಳಿಕೆ ನೀಡಿ ವಿದ್ಯಾರ್ಥಿಗಳನ್ನು ಉತ್ತೇಜಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆವರಣದಲ್ಲಿಯೂ ಗಿಡಮರಗಳನ್ನು ಪೋಷಿಸಬಹುದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಆಸಕ್ತಿ ವಹಿಸಬೇಕು. ಇದೇ ರೀತಿ ವಸತಿ ಶಾಲೆ, ಹಾಸ್ಟೆಲ್‌ಗಳಲ್ಲಿಯೂ ಸಹ ಗಿಡಗಳನ್ನು ನೆಡಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಹರೀಶ್‌ಕುಮಾರ್ ಸೂಚಿಸಿದರು.

ತೋಟಗಾರಿಕೆ, ಕೃಷಿ, ರೇಷ್ಮೆ ಇಲಾಖೆಗಳಿಗೆ ಸೇರಿದ ಸ್ಥಳ, ಫಾರಂ, ಕಚೇರಿ ಆವರಣ ಸೇರಿದಂತೆ  ಎಲ್ಲ ಇಲಾಖೆಗಳ ವ್ಯಾಪ್ತಿಯಲ್ಲಿ ಸಹ ಗಿಡಗಳನ್ನು ಪೋಷಿಸಲು ಹಸಿರು ಕರ್ನಾಟಕ ಅಭಿಯಾನ ನೆರವಾಗಲಿದೆ. ಗ್ರಾಮ ಪಂಚಾಯಿತಿಗಳಲ್ಲೂ ಕಾರ್ಯಕ್ರಮ ಅನುಷ್ಠಾನ ಮಾಡಬೇಕು ಎಂದು ಅವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !