ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲೆಡೆ ದಕ್ಷ ಆಡಳಿತಗಾರ ವಿಶ್ವೇಶ್ವರಯ್ಯ ಗುಣಗಾನ

ಜಿಲ್ಲೆಯಾದ್ಯಂತ ಸಡಗರದಿಂದ ಸರ್‌.ಎಂ.ವಿಶ್ವೇಶ್ವರಯ್ಯ ಅವರ 158ನೇ ಜನ್ಮ ದಿನಾಚರಣೆ
Last Updated 15 ಸೆಪ್ಟೆಂಬರ್ 2018, 13:53 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯ ಹೆಮ್ಮೆಯ ಸುಪುತ್ರ, ದೇಶ ಕಂಡ ಮೇಧಾವಿ, ದಕ್ಷ ಆಡಳಿತಗಾರ ಸರ್‌.ಎಂ.ವಿಶ್ವೇಶ್ವರಯ್ಯ ಅವರ 158ನೇ ಜನ್ಮ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಶನಿವಾರ ಸಡಗರದಿಂದ ಆಚರಿಸಲಾಯಿತು. ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯ ಸಮಾಧಿಗೆ ಅನೇಕ ಗಣ್ಯರು, ಮುಖಂಡರು, ವಿದ್ಯಾರ್ಥಿಗಳು ಗೌರವ ಸಲ್ಲಿಸಿದರು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಸ್ಮಾರಕ ವಿದ್ಯಾ ಸಂಸ್ಥೆ ವತಿಯಿಂದ ನಗರದಲ್ಲಿ ವಿಶ್ವೇಶ್ವರಯ್ಯ ಅವರ ಭಾವಚಿತ್ರ ಮೆರವಣಿಗೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ಭಾವಚಿತ್ರವುಳ್ಳ ಮೆರವಣಿಗೆ ವಾಹನದೊಂದಿಗೆ ಬಿ.ಬಿ.ರಸ್ತೆ ಮೂಲಕ ಡಿಡಿಪಿಐ ಕಚೇರಿ ವರೆಗೆ ಪಾದಯಾತ್ರೆ ನಡೆಸಿದರು. ಬಳಿಕ ವಿದ್ಯಾರ್ಥಿಗಳು ವಾಹನಗಳಲ್ಲಿ ಮುದ್ದೇನಹಳ್ಳಿಗೆ ತೆರಳಿ, ಅಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ಮತ್ತು ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ವತಿಯಿಂದ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಕನ್ನಡ ಶಿಕ್ಷಕರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಎಂ.ವೀರಪ್ಪ ಮೊಯಿಲಿ, ‘ದೇಶಕ್ಕೆ ಕೀರ್ತಿ ತಂದ ಮೇಧಾವಿ ವಿಶ್ವೇಶ್ವರಯ್ಯ ಅವರ ಕರ್ಮಭೂಮಿಯಲ್ಲಿ ಇಂತಹದೊಂದು ಕಾರ್ಯಕ್ರಮ ಹಮ್ಮಿಕೊಂಡಿರುವ ಶ್ಲಾಘನೀಯ. ವಿಶ್ವೇಶ್ವರಯ್ಯನವರ ಬದುಕು ಇಂದಿನ ಯುವಜನರಿಗೆ ದಾರಿದೀಪವಾಗಬೇಕು’ ಎಂದು ಹೇಳಿದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಕೈವಾರ ಶ್ರೀನಿವಾಸ್‌, ‘ಮುದ್ದೇನಹಳ್ಳಿಯಂತಹ ಪುಟ್ಟ ಗ್ರಾಮದಲ್ಲಿ ಜನಿಸಿದರೂ ವಿಶ್ವೇಶ್ವರಯ್ಯನವರು ತಮ್ಮ ವಿದ್ವತ್ತು, ಶಿಸ್ತು, ಪ್ರಾಮಾಣಿಕತೆ, ಬದ್ಧತೆಯಿಂದಾಗಿ ವಿಶ್ವವಿಖ್ಯಾತಿ ಗಳಿಸಿದರು. ಬಡ ಕುಟುಂಬದಲ್ಲಿ ಹುಟ್ಟಿ ಬೀದಿದೀಪದ ಕೆಳಗೆ ಓದಿದ ಅವರು ಭಾರತರತ್ನ ಪಡೆಯುವಷ್ಟರ ಮಟ್ಟಿಗೆ ಬೆಳೆದದ್ದು ಸಾಮಾನ್ಯ ಸಂಗತಿಯಲ್ಲ. ಇಂದಿನ ವಿದ್ಯಾರ್ಥಿಗಳಿಗೆ ವಿಶ್ವೇಶ್ವರಯ್ಯ ಅವರು ಮಾದರಿಯಾಗಬೇಕು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಡೆದ ವಿಚಾರ ಗೋಷ್ಠಿಯಲ್ಲಿ ಇಸ್ರೊ ಬ್ಯಾಲಾಳು ಕೇಂದ್ರದ ವಿಜ್ಞಾನಿ ಶ್ರೀನಾಥರತ್ನ ಕುಮಾರ್, ಚಿಂತಾಮಣಿ ಸರ್ಕಾರಿ ಮಹಿಳಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಎಂ.ಎನ್.ರಘು ಅವರು ಉಪನ್ಯಾಸ ನೀಡಿದರು.

ಸಾಯಿರಾಂ ವಿದ್ಯಾ ಸಂಸ್ಥೆ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಸ್ನಾತಕೋತ್ತರ ಕೇಂದ್ರದ ಸಂಯೋಜನಾಧಿಕಾರಿ ಬಿ.ಎಸ್.ವೆಂಕಟೇಶ್, ಉದ್ಯಮಿ ನಾರಾಯಣಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಿವಣ್ಣ ರೆಡ್ಡಿ, ಚಿಕ್ಕಬಳ್ಳಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮೋಹನ್ ಕುಮಾರ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಮಂಚನಬಲೆ ಶ್ರೀನಿವಾಸ್, ಶಿಕ್ಷಕರಾದ ಕೆ.ಎಲ್.ಶ್ರೀನಿವಾಸ್, ಗೋಪಾಲಕೃಷ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT